ಚಿಕ್ಕಬಳ್ಳಾಪುರ | ಪೌರಾಯುಕ್ತೆಗೆ ನಿಂದಿಸಿದ ಆರೋಪ; ಕಾಂಗ್ರೆಸ್ ಮುಖಂಡನ ವಿರುದ್ಧ ಪ್ರತಿಭಟನೆ
ಚಿಕ್ಕಬಳ್ಳಾಪುರ : ಬ್ಯಾನರ್ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳವಾರ ಜಿಲ್ಲೆಯ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಹಾಗೂ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರ ನಡುವೆ ನಡೆದ ಫೋನ್ ಸಂಭಾಷಣೆಯ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವಿವಾದಕ್ಕೆ ಕಾರಣವಾಗಿದೆ.
ವೈರಲ್ ಆದ ಆಡಿಯೋದಲ್ಲಿ ರಾಜೀವ್ ಗೌಡ ಅವರು ಪೌರಾಯುಕ್ತೆ ಅಮೃತಾ ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಸಿ ನಿಂದಿಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದ್ದು, ಇದರಿಂದ ಶಿಡ್ಲಘಟ್ಟ ನಗರದಲ್ಲಿ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಈ ಹಿನ್ನೆಲೆಯಲ್ಲಿ ಪೌರಾಯುಕ್ತೆಯ ಪರವಾಗಿ ಶಿಡ್ಲಘಟ್ಟ ನಗರಸಭೆ ಮುಂದೆ ಪೌರಕಾರ್ಮಿಕರು ಪ್ರತಿಭಟನೆ ನಡೆಸಿದ್ದಾರೆ. ಇನ್ನೊಂದೆಡೆ, ಈ ಘಟನೆಯಿಂದ ಮನಸ್ಸು ನೊಂದ ಪೌರಾಯುಕ್ತೆ ಅಮೃತಾ ಗೌಡ ಅವರು ಕಣ್ಣೀರಿಟ್ಟು ಮಾಧ್ಯಮಗಳ ಮುಂದೆ ತಮ್ಮ ನೋವು ಮತ್ತು ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.
ಮಂಗಳವಾರ ರಾತ್ರಿ ಶಿಡ್ಲಘಟ್ಟದಲ್ಲಿ ನಡೆದ ಕಲ್ಟ್ ಸಿನಿಮಾ ಪ್ರಮೋಷನ್ ಕಾರ್ಯಕ್ರಮದ ಹಿನ್ನೆಲೆ ರಾಜೀವ್ ಗೌಡ ಅವರ ಬ್ಯಾನರ್‌ಗಳು ಹಾಕಲಾಗಿತ್ತು .ಈ ಪೈಕಿ ಕೆಲ ಬ್ಯಾನರ್ ತೆರವುಗೊಳಿಸಿರುವ ವಿಚಾರಕ್ಕೆ ಕೋಪಗೊಂಡ ರಾಜೀವ್ ಗೌಡ ಅವರು ಪೌರಾಯುಕ್ತೆಗೆ ಫೋನ್ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ತಿಳಿದುಬಂದಿದೆ. ಅಲ್ಲದೆ, ಸ್ಥಳೀಯ ಶಾಸಕ ರವಿಕುಮಾರ್ ಅವರ ವಿರುದ್ಧವೂ ಮಾತುಗಳನ್ನು ಆಡಿದ್ದಾರೆ ಎನ್ನಲಾಗಿದೆ.
ಈ ಕುರಿತು ಶಾಸಕ ರವಿಕುಮಾರ್ ಅವರು ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳ ಗಮನಕ್ಕೆ ವಿಷಯವನ್ನು ತಂದಿದ್ದು, ಪ್ರಕರಣದ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.