CHIKKABALLAPURA | ಬಸ್-ಟ್ರಕ್ ಮಧ್ಯೆ ಅಪಘಾತ: ಓರ್ವ ಮೃತ್ಯು; 11 ಪ್ರಯಾಣಿಕರಿಗೆ ಗಾಯ
ಚಿಕ್ಕಬಳ್ಳಾಪುರ: ಕಂಟೈನರ್ ಟ್ರಕ್ ಹಾಗೂ ಸ್ಲೀಪರ್ ಕೋಚ್ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ಮೃತಪಟ್ಟು, 11 ಮಂದಿ ಬಸ್ ಪ್ರಯಾಣಿಕರು ಗಾಯಗೊಂಡ ಘಟನೆ ಮಂಗಳವಾರ ಮುಂಜಾನೆ 2 ಗಂಟೆ ಸುಮಾರಿಗೆ ನಗರ ಹೊರವಲಯದ ರಾಷ್ಟ್ರೀಯ ಹೆದ್ದಾರಿ–44ರ ಅಗಲಗುರ್ಕಿ ಬಳಿ ಸಂಭವಿಸಿದೆ.
ಮೃತರನ್ನು ಬಿಹಾರ ಮೂಲದ ಸುಹಾಸ್(20) ಎಂದು ಗುರುತಿಸಲಾಗಿದೆ.
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬಿಹಾರ ಮೂಲಕ 20 ವರ್ಷದ ಸುಹಾಸ್ ಎಂಬ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ ಎಂದು ಮಾಹಿತಿ ಲಭ್ಯ ವಾಗಿದೆ..
ಬಸ್ಸಿನಲ್ಲಿದ್ದ 28 ಪ್ರಯಾಣಿಕರ ಪೈಕಿ 12 ಮಂದಿ ಗಾಯಗೊಂಡಿದ್ದು, ಈ ಪೈಕಿ ಗಂಭೀರಾವಸ್ಥೆಯಲ್ಲಿದ್ದ ಸುಹಾಸ್ ಸೇರಿದಂತೆ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಪೈಕಿ ಚಿಕಿತ್ಸೆ ಫಲಿಸದೆ ಸುಹಾಸ್ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಉಳಿದ ಗಾಯಾಳುಗಳು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೈಸೂರಿನಿಂದ ಬೆಂಗಳೂರು ಮಾರ್ಗವಾಗಿ ಮಂತ್ರಾಲಯಕ್ಕೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಕೋಚ್ ಬಸ್ ಅಗಲಗುರ್ಕಿ ಫ್ಲೈ ಓವರ್ ಬಳಿ ತಲುಪಿದಾಗ ಕಂಟೈನರ್ ಲಾರಿ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಬಸ್ಸಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.
ಸ್ಥಳೀಯರ ನೆರವಿನಿಂದ ಬಸ್ಸಿನಲ್ಲಿ ಸಿಲುಕಿದ್ದ ಗಾಯಾಳುಗಳನ್ನು ಹೊರತೆಗೆದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಜಿಲ್ಲಾ ಆಸ್ಪತ್ರೆಗೆ ತೆರಳಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.