ಪೌರಾಯುಕ್ತೆಗೆ ನಿಂದನೆ ಪ್ರಕರಣ: ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಬಂಧನ
ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ನಗರಸಭೆಯ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ದೂರವಾಣಿ ಮೂಲಕ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ ಆರೋಪಿಯಾಗಿರುವ ರಾಜೀವ್ ಗೌಡನನ್ನು ಚಿಕ್ಕಬಳ್ಳಾಪುರ ಪೊಲೀಸರು ಇಂದು ಸಂಜೆ ಕೇರಳ–ಕರ್ನಾಟಕ ಗಡಿ ಪ್ರದೇಶದಲ್ಲಿ ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಬಂಧಿತ ರಾಜೀವ್ ಗೌಡನನ್ನು ಇಂದು ಮಧ್ಯರಾತ್ರಿ ಚಿಕ್ಕಬಳ್ಳಾಪುರಕ್ಕೆ ಕರೆತರುವ ಸಾಧ್ಯತೆ ಇದ್ದು, ನಂತರ ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಸಾಧ್ಯತೆ ಇದೆ ಎಂದು ಮಾಹಿತಿ ಲಭ್ಯವಾಗಿದೆ.
ರಾಜೀವ್ ಗೌಡನ ಬಂಧನವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ ಅವರು ಖಚಿತಪಡಿಸಿದ್ದು, ಅಗತ್ಯ ಕಾನೂನು ಪ್ರಕ್ರಿಯೆಗಳು ಪೂರ್ಣಗೊಂಡ ಬಳಿಕ ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಲಾಗುವುದೆಂದು ತಿಳಿಸಿದ್ದಾರೆ.
ಶಿಡ್ಲಘಟ್ಟ ನಗರ ವ್ಯಾಪ್ತಿಯಲ್ಲಿ ‘ಕಲ್ಟ್’ ಸಿನಿಮಾದ ಫ್ಲೆಕ್ಸ್ ತೆರವುಗೊಳಿಸಿದ ಹಿನ್ನೆಲೆಯಲ್ಲಿ, ನಗರಸಭೆಯ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ದೂರವಾಣಿ ಮೂಲಕ ಧಮ್ಕಿ ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಸಂಬಂಧ ಪೌರಾಯುಕ್ತೆ ಅಮೃತಾ ಗೌಡ ಅವರು ಶಿಡ್ಲಘಟ್ಟ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿತ್ತು.
ಪ್ರಕರಣ ದಾಖಲಾಗುತ್ತಿದ್ದಂತೆಯೇ ರಾಜೀವ್ ಗೌಡ ಅವರು ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ ನ್ಯಾಯಾಲಯ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಜಾಮೀನು ನಿರಾಕರಣೆಯ ನಂತರ, ಅವರ ಬಂಧನಕ್ಕಾಗಿ ಚಿಕ್ಕಬಳ್ಳಾಪುರ ಪೊಲೀಸರು ನಿರಂತರ ಶೋಧ ಕಾರ್ಯಾಚರಣೆ ನಡೆಸುತ್ತಿದ್ದರು.