ಮುಖ್ಯಮಂತ್ರಿ ಬದಲಾವಣೆ ಚರ್ಚೆ ಅನಗತ್ಯ : ಕೆ.ಎಚ್.ಮುನಿಯಪ್ಪ
ಕೆ.ಎಚ್.ಮುನಿಯಪ್ಪ
ಗುಡಿಬಂಡೆ : ದಲಿತರನ್ನು ಮುಖ್ಯಮಂತ್ರಿ ಮಾಡುವುದು ಸೇರಿದಂತೆ ಮುಖ್ಯಮಂತ್ರಿ ಬದಲಾವಣೆಯ ವಿಚಾರವಾಗಿ ಪಕ್ಷದ ವರಿಷ್ಠರು ಈಗಾಗಲೇ ಅಂತಿಮವಾಗಿ ಸಂದೇಶ ರವಾನೆ ಮಾಡಿದ್ದಾರೆ. ಆ ವಿಚಾರ ಚರ್ಚೆ ಮಾಡುವ ಅವಶ್ಯಕತೆ ಇಲ್ಲ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.
ಗುಡಿಬಂಡೆ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಬೇಡ ಮಾದರ ಸಮುದಾಯದ ಅನೇಕ ವರ್ಷಗಳಿಂದ ಅಭಿವೃದ್ಧಿಯಲ್ಲಿ ಹಿಂದುಳಿದಿದೆ. ಈ ಸಮುದಾಯವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಪಕ್ಷ ಬೇದ ಮರೆತು ಮಾದರ ಮಹಾ ಸಭಾ ಸಂಘವನ್ನು ಅಸ್ಥಿತ್ವಕ್ಕೆ ತಂದಿದ್ದೇವೆ. ತಾತ್ಕಾಲಿಕವಾಗಿ ಮಾದರ ಮಹಾ ಸಭಾದ ಜಿಲ್ಲಾಧ್ಯಕ್ಷರನ್ನಾಗಿ ಕೃಷ್ಣ ಅವರನ್ನು ಆಯ್ಕೆ ಮಾಡಲಾಗಿದೆ. ಅದರಂತೆ ಎಲ್ಲ ತಾಲೂಕುಗಳಲ್ಲಿ ತಾಲೂಕು ಸಮಿತಿಗಳನ್ನು ರಚನೆ ಮಾಡುತ್ತಿದ್ದೇವೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಂಸದ ಚಂದ್ರಪ್ಪ, ಮಾದರ ಮಹಾ ಸಭಾ ಜಿಲ್ಲಾಧ್ಯಕ್ಷ ಕೃಷ್ಣ , ಮಾತಾಂಗ ಸೇವಾ ಸಮಿತಿ ಅಧ್ಯಕ್ಷ ಆರ್.ಲೋಕೇಶ್, ಆರ್‌ಟಿಒ ವೆಂಕಟೇಶ್, ದಲಿತ ಸಂಘರ್ಷ ಸಮಿತಿ ತಾಲೂಕು ಸಂಚಾಲಕ ಚೆಂಡೂರು ರಮಣ, ದಲಿತ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.