×
Ad

ಮಂಡ್ಯ ಅಭಿವೃದ್ಧಿಗೆ 1 ಸಾವಿರ ಕೋಟಿ ರೂ. ಬಿಡುಗಡೆ : ಸಚಿವ ಚಲುವರಾಯಸ್ವಾಮಿ

Update: 2024-02-11 22:50 IST

ಮಂಡ್ಯ : ನಮ್ಮ ಸರಕಾರ ಅಸ್ತಿತ್ವಕ್ಕೆ ಬಂದ ನಂತರ ಕಳೆದ 8 ತಿಂಗಳಿಂದ ಜಿಲ್ಲೆಯ ಅಭಿವೃದ್ಧಿಗೆ ಗ್ಯಾರಂಟಿ ಯೋಜನೆಯ ಜೊತೆಗೆ ಲೋಕೋಪಯೋಗಿ, ನೀರಾವರಿ ಸೇರಿದಂತೆ ಇನ್ನಿತರೆ ಇಲಾಖೆಗಳ ಮೂಲಕ 1,000 ಕೋಟಿ ರೂ. ಅನುದಾನ ನೀಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ.

ರವಿವಾರ ಮದ್ದೂರು ತಾಲೂಕು ಆಡಳಿತದ ವತಿಯಿಂದ ಆಯೋಜಿಸಲಾಗಿದ್ದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಹಾಗೂ ಸಾರ್ವಜನಿಕರಿಗೆ ಮಾಹಿತಿ ನೀಡುವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸರಕಾರ 5 ಗ್ಯಾರಂಟಿ ಯೋಜನೆಗಳ ಮೂಲಕ ಮಾ.9 ಅಂತ್ಯದವರೆಗೆ 56 ಸಾವಿರ ಕೋಟಿ ರೂ. ಅನುದಾನವನ್ನು ಸಾರ್ವಜನಿಕರಿಗೆ  ನೀಡಲಿದೆ. ಮುಂದಿನ ಒಂದು ವರ್ಷಕ್ಕೆ 69 ಸಾವಿರ ಕೋಟಿ ಅನುದಾನ ಬೇಕಾಗುತ್ತದೆ ಎಂದು ಅವರು ತಿಳಿಸಿದರು.

ಮದ್ದೂರು ತಾಲೂಕಿನ ಶಾಸಕರು ತಾಲೂಕಿನ ಅಭಿವೃದ್ಧಿಗೆ ವಿಶೇಷ ಆಸಕ್ತಿ ವಹಿಸಿದ ಹಿನ್ನಲೆಯಲ್ಲಿ ತಾಲೂಕಿನ ಅಭಿವೃದ್ಧಿಗೆ ಲೋಕೋಪಯೋಗಿ ಇಲಾಖೆಗೆ 50ರಿಂದ 60 ಕೋಟಿ, ನೀರಾವರಿ ಇಲಾಖೆಗೆ 250 ಕೋಟಿ ರೂ. ಅನುದಾನ ನೀಡಲಾಗಿದೆ ಎಂದು ಅವರು ಶ್ಲಾಘಿಸಿದರು.

ಮದ್ದೂರು ತಾಲೂಕಿನಲ್ಲಿ ಅನ್ನಭಾಗ್ಯ ಯೋಜನೆಯಡಿ 73,000, ಗೃಹಲಕ್ಷ್ಮಿ 74,000 ಹಾಗೂ ಗೃಹಜ್ಯೋತಿ ಯೋಜನೆಯಡಿ 71,000 ಫಲಾನುಭವಿಗಳು ಪ್ರಯೋಜನ ಪಡೆಯುತ್ತಿದ್ದಾರೆ. ಯುವನಿಧಿ ಯೋಜನೆಗೆ ಹೆಚ್ಚಿನ ಫಲಾನುಭವಿಗಳು ಹೆಸರು ನೋಂದಾಯಿಸಿಕೊಳ್ಳಿ ಎಂದು ಅವರು ಕರೆ ನೀಡಿದರು.

ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ, ತಹಶೀಲ್ದಾರ್ ಕೋರ್ಟ್‍ಗಳಲ್ಲಿದ್ದ ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗುತ್ತಿದೆ. ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿನ ಅಪಘಾತಗಳನ್ನು ನಿಯಂತ್ರಿಸಲಾಗಿದೆ ಎಂದು ಅವರು ವಿವರಿಸಿದರು.

ಮಂಡ್ಯ ಶಾಸಕ ಪಿ.ರವಿಕುಮಾರ್, ವಿಧಾನಪರಿಷತ್ ಸದಸ್ಯರಾದ ಮರಿತಿಬ್ಬೇಗೌಡ, ದಿನೇಶ್ ಗೂಳಿಗೌಡ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಜೋಗೀಗೌಡ, ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶೇಖ್ ತನ್ವಿರ್ ಆಸೀಫ್, ಇತರೆ ಗಣ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News