×
Ad

ಗ್ರೇಟರ್ ಬೆಂಗಳೂರು ಪ್ರಾಧಿಕಾರದಡಿ 7 ಟೌನ್‌ಶಿಪ್ ನಿರ್ಮಾಣ : ಡಿ.ಕೆ.ಶಿವಕುಮಾರ್

Update: 2025-04-25 23:14 IST

ಮಂಡ್ಯ : ಗ್ರೇಟರ್ ಬೆಂಗಳೂರು ಪ್ರಾಧಿಕಾರದಡಿಯಲ್ಲಿ ಇಡೀ ದೇಶಕ್ಕೇ ಮಾದರಿಯಾಗುವಂತಹ 7 ಟೌನ್ ಶಿಪ್ ನಿರ್ಮಾಣ ಮಾಡಲಾಗುವುದು. ಜಮೀನು ಕಳೆದುಕೊಂಡ ರೈತರಿಗೆ ಸೂಕ್ತ ಪರಿಹಾರ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಕಾವೇರಿ ಆರತಿ ನಡೆಸುವ ಸಂಬಂಧ ಶುಕ್ರವಾರ ಕೆಆರ್‌ಎಸ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ ಮಾಧ್ಯಮಗಳ ಜತೆ ಮಾತನಾಡಿದ ಅವರು, ಟೌನ್‌ಶಿಪ್‌ಗೆ ಭೂ ಸ್ವಾಧೀನವಾಗಿರುವ ಭೂಮಿಯನ್ನು ಯಾವುದೇ ಕಾರಣಕ್ಕೂ ಡಿನೋಟಿಫಿಕೇಷನ್ ಮಾಡುವುದಿಲ್ಲ. ರೈತರಿಗೆ ಸೂಕ್ತ ಪರಿಹಾರ ನೀಡಲಾಗುವುದು. ಇಲ್ಲವೇ ಹಾಲಿ ಜಮೀನಿಗಿಂತ ದುಪ್ಪಟ್ಟು ಬೆಲೆಯ ಭೂಮಿ ನೀಡಲಾಗುವುದು ಎಂದು ಅವರು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ ನಡೆಸುವ ಸಂಬಂಧ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ರಾಜ್ಯ ಸಚಿವ ಸಂಪುಟದ ಒಪ್ಪಿಗೆ ದೊರೆಯುತ್ತಿದ್ದಂತೆಯೇ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶುಕ್ರವಾರ ಕೆಆರ್‌ಎಸ್‌ಗೆ ಭೇಟಿ ನೀಡಿ ಪರಿಶೀಲಿಸಿ, ಅಧಿಕಾರಿಗಳ ಸಭೆ ನಡೆಸಿದರು.

ಈ ಸಂದರ್ಭದಲ್ಲಿ ಶಾಸಕರಾದ ರಮೇಶ್ ಬಂಡಿಸಿದ್ದೇಗೌಡ, ದರ್ಶನ ಪುಟ್ಟಣ್ಣಯ್ಯ, ದಿನೇಶ್ ಗೂಳಿಗೌಡ, ಬೆಂಗಳೂರು ನೀರು ಸರಬರಾಜು, ಒಳಚರಂಡಿ ಮಂಡಳಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹ‌ರ್, ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಹೇಶ್, ಮಂಡ್ಯ, ಮೈಸೂರು ಜಿಲ್ಲಾಧಿಕಾರಿ ಡಾ.ಕುಮಾರ, ಲಕ್ಷ್ಮೀಕಾಂತ ರೆಡ್ಡಿ, ಜಿಪಂ ಸಿಇಒ ಕೆ.ಆರ್.ನಂದಿನಿ, ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

ಕಾವೇರಿ ಆರತಿಗೆ 98 ಕೋಟಿ ರೂ. ಬಜೆಟ್‌ನಲ್ಲಿ ಮೀಸಲಿಡಲಾಗಿದೆ. ಸುಮಾರು 10 ಸಾವಿರ ಜನರಿಗೆ ಆರತಿ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗುವುದು. ರಸ್ತೆ ಅಭಿವೃದ್ಧಿ ಸೇರಿದಂತೆ ಎಲ್ಲ ಅಗತ್ಯ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು. ಮೈಸೂರು ದಸರಾ ಕಾರ್ಯಕ್ರಮದಲ್ಲಿ ಕರಾವಳಿ ಭಾಗದ ಜನಪ್ರಿಯ ಕ್ರೀಡೆಯಾದ ಕಂಬಳ ಸೇರ್ಪಡೆ ಮಾಡಲು ತೀರ್ಮಾನಿಸಲಾಗಿದೆ.

-ಡಿ.ಕೆ.ಶಿವಕುಮಾ‌ರ್, ಉಪ ಮುಖ್ಯಮಂತ್ರಿ 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News