×
Ad

ದೀಪಾವಳಿ ಕೊಡುಗೆ ನೆಪದಲ್ಲಿ ಬೆಂಗಳೂರು ಜನರಿಗೆ ದೋಖಾ; ʼಎʼ ಖಾತಾ ಸೋಗಿನಲ್ಲಿ 15,000 ಕೋಟಿ ರೂ. ಸುಲಿಗೆ : ಎಚ್‌ಡಿಕೆ ಆರೋಪ

Update: 2025-10-16 14:09 IST

ಮಂಡ್ಯ: ದೀಪಾವಳಿ ಕೊಡುಗೆ ಕೊಡುತ್ತಿದ್ದೇವೆ ಎಂದು ಹೇಳಿ ರಾಜ್ಯ ಸರಕಾರ ಬೆಂಗಳೂರು ಜನರ ಕಿಸೆಗೆ ಕೈ ಹಾಕಿದೆ. ʼಎʼ ಖಾತಾ ಸೋಗಿನಲ್ಲಿ 15,000 ಕೋಟಿ ರೂ. ಸುಲಿಗೆ ಮಾಡುತ್ತಿದೆ ಎಂದು ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿ ಅವರು ಆರೋಪ ಮಾಡಿದರು.

ಮಂಡ್ಯ ನಗರದ ಸಂಜಯ್ ವೃತ್ತದಲ್ಲಿ ಹೊಸದಾಗಿ ನಿರ್ಮಿಸಿರುವ ಸುಸಜ್ಜಿತ ಆಟೋ ನಿಲ್ದಾಣವನ್ನು ಉದ್ಘಾಟಿಸಿದ ಬಳಿಕ ರೈತ ಭವನದ ಬಳಿ ನಡೆದ ಮಾಧ್ಯಮಗೋಷ್ಟಿಯಲ್ಲಿ ಅವರು ಮಾತನಾಡಿದರು.

ದೀಪಾವಳಿ ಕೊಡುಗೆ ಎಂದರೆ ಏನೋ ನಮಗೆ ದೊಡ್ಡ ಕೊಡುಗೆಯನ್ನು ಕೊಡುತ್ತದೆ ಎಂದು ಜನರು ಭಾವಿಸಿದ್ದರು. ದೊಡ್ಡ ದೊಡ್ಡ ಜಾಹೀರಾತುಗಳನ್ನು ನೋಡಿ ನಾನು ಕೂಡ ಹಾಗೆಯೇ ಅಂದುಕೊಂಡಿದ್ದೆ. ಆದರೆ, ಅದು ದೀಪಾವಳಿ ಹೆಸರಿನಲ್ಲಿ ಜನರಿಗೆ ಮಾಡುತ್ತಿರುವ ಮಹಾನ್ ದೋಖಾ ಇದಾಗಿದೆ ಎಂದು ಕಿಡಿಕಾರಿದರು.

ಬೆಂಗಳೂರು ನಗರ ಜನರಿಗೆ ದೀಪಾವಳಿ ಕೊಡುಗೆ ನೀಡಲು ಶಾಕ್ ಕೊಡ್ತಿದ್ದಾರೆ. ಅದು ಹೇಗಿದೆ ಎಂದರೆ, ಬಿ ಖಾತಾದಿಂದ ಎ ಖಾತಾಗೆ ಪರಿವರ್ತನೆ ಮಾಡುವ ಅರ್ಜಿಗೆ 500 ರೂಪಾಯಿ ಶುಲ್ಕ ತುಂಬಬೇಕು. ಆ ಶುಲ್ಕದ ಹೆಸರಿನಲ್ಲಿಯೇ ನೂರಾರು ಕೋಟಿ ರೂಪಾಯಿ ಸುಲಿಗೆ ಮಾಡುತ್ತಿದೆ ಈ ಸರಕಾರ. 30/40 ನಿವೇಶನಕ್ಕೆ 4 ರಿಂದ 8 ಲಕ್ಷ ರೂಪಾಯಿವರೆಗೂ ಕಿತ್ತುಕೊಳ್ಳುತ್ತಿದ್ದಾರೆ. ಮೊದಲು 10 ರಿಂದ 13 ಸಾವಿರ ರೂಪಾಯಿ ಅಷ್ಟನ್ನೇ ಕಟ್ಟಬೇಕಿದ್ದ ಬೆಂಗಳೂರು ಜನರು ಇನ್ನು ಮುಂದೆ ಲಕ್ಷಗಳಲ್ಲಿ ಹಣ ಏರಬೇಕಿದೆ. ಎ ಖಾತಾ ದಂಧೆಯ ಮೂಲಕ ರಾಜ್ಯ ಸರಕಾರ 15,000 ಕೋಟಿ ರೂಪಾಯಿ ವಸೂಲಿ ಮಾಡುತ್ತಿದೆ ಎಂದು ಆರೋಪ ಮಾಡಿದರು.

ಗ್ಯಾರಂಟಿ ಕೊಟ್ಟು ಜನರ ಬದುಕು ಹಸನು ಮಾಡೋದು ಎಂದರೆ ಹೀಗೆನಾ? ಜನರ ಮೇಲೆ ತೆರಿಗೆ ವಿಧಿಸಿ 6ನೇ ಗ್ಯಾರಂಟಿ ಕೊಡಲು ಹೊರಟಿದ್ದಾರೆ. ಈ ಸರಕಾರ ಬಂದ ಮೇಲೆ ನಿರಂತರವಾಗಿ ಸುಲಿಗೆ ಮಾಡುತ್ತಿದೆ. ಕೇವಲ ಹಣ ಮಾಡುವುದಕ್ಕೆ ಸರಕಾರ ಹೊರಟಿದೆ. ಪ್ರತಿಯೊಂದರಲ್ಲಿ ದುಡ್ಡು ಮಾಡುವ ಬಗ್ಗೆಯಷ್ಟೇ ಆಲೋಚನೆ ಮಾಡುತ್ತಿದೆ ಎಂದು ಟೀಕಿಸಿದರು.

ಈ ಸರಕಾರದಲ್ಲಿ ಹಣ ಇಲ್ಲ. ಅದಕ್ಕೆ ಕಂಡ ಕಂಡ ಕಡೆ ಹಣಕ್ಕೆ ಕೈ ಹಾಕುತ್ತಿದೆ. ಬೆಂಗಳೂರಿನ ಗುಂಡಿ ಮುಚ್ಚೋದು ಇರಲಿ. ರಾಜ್ಯದಲ್ಲಿರುವ ಗುಂಡಿಗಳನ್ನೂ ಮುಚ್ಚೋಕೆ ಇವರಿಂದ ಆಗುತ್ತಿಲ್ಲ ಎಂದು ತರಾಟೆಗೆ ತೆಗೆದುಕೊಂಡ ಸಚಿವರು; ಜೆಡಿಎಸ್ ಕೊಡುಗೆ ಏನು ಎಂದು ಹಾಸನದಲ್ಲಿ ಸಿಎಂ ಪ್ರಶ್ನೆ ಮಾಡಿದ್ದಾರೆ. ನನ್ನ ಆರೋಗ್ಯ ವಿಚಾರಿಸಲು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರೊಬ್ಬರು ದೆಹಲಿಗೆ ಬಂದಿದ್ದರು. 2018ರಲ್ಲಿ ನೀವು ಕೊಟ್ಟ 500 ಕೋಟಿ ರೂಪಾಯಿ ಅನುದಾನದಲ್ಲಿಯೇ ಇನ್ನೂ ಕೆಲಸ ನಡೆಯುತ್ತಿದೆ ಎಂದು ಅವರೇ ಹೇಳುತ್ತಾರೆ. ಅನುದಾನದ ಬಗ್ಗೆ ಮಾತನಾಡುವ ಮುಖ್ಯಮಂತ್ರಿಗಳು, ನಾನು ಅಧಿಕಾರದಲ್ಲಿ ಇದ್ದಾಗ ಎಷ್ಟು ಕೊಟ್ಟಿದ್ದೇನೆ, ಇವರು ಎಷ್ಟು ಕೊಟ್ಟಿದ್ದಾರೆ ಎಂಬ ಬಗ್ಗೆ ಜನರ ಮುಂದೆ ದಾಖಲೆ ಇಡಲಿ ಎಂದು ಸವಾಲು ಹಾಕಿದರು.

ಸುಸಜ್ಜಿತ ಆಟೋ ನಿಲ್ದಾಣ ಲೋಕಾರ್ಪಣೆ:

ಮಂಡ್ಯದ ಸಂಜಯ ನಗರ ವೃತ್ತದಲ್ಲಿ 35 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಆಗಿರುವ ಸುಸಜ್ಜಿಯ ಆಟೋ ನಿಲ್ದಾಣವನ್ನು ಇದೇ ಸಂದರ್ಭದಲ್ಲೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಉದ್ಘಾಟನೆ ಮಾಡಿದರು.

ಈ ಸಂದರ್ಭದಲ್ಲಿ ಮಾಜಿ ಮಂತ್ರಿ ಸಿ ಎಸ್ ಪುಟ್ಟರಾಜು, ಜಿಲ್ಲಾ ಜೆಡಿಎಸ್ ಅಧ್ಯಕ್ಷ ರಮೇಶ್, ವಿಧಾನ ಪರಿಷತ್ ಸದಸ್ಯ ವಿವೇಕಾನಂದ, ಮುಖಂಡರಾದ ರಾಮಚಂದ್ರ, ನಗರ ಸಭಾಧ್ಯಕ್ಷ ಪ್ರಕಾಶ್ ಮೊದಲಾದವರು ಇದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News