ಮದ್ದೂರು: ಗಾರ್ಮೆಂಟ್ಸ್ ಕಾರ್ಖಾನೆಯಲ್ಲಿ ಬೆಂಕಿ: ಅಪಾರ ನಷ್ಟ
ಮಂಡ್ಯ: ಮದ್ದೂರು ನಗರದ ಮಳವಳ್ಳಿ ರಸ್ತೆಯಲ್ಲಿರುವ ಗಿಲ್ ವುಡ್ ಫ್ಯಾಷನ್ ಪ್ರೈವೇಟ್ ಲಿಮಿಟೆಡ್ ಗಾರ್ಮೆಂಟ್ಸ್ ಕಾರ್ಖಾನೆಯಲ್ಲಿ ಗುರುವಾರ ಬೆಳಗಿನ ಜಾವ ಭಾರೀ ಬೆಂಕಿ ಅವಘಡ ಸಂಭವಿಸಿದೆ.
ಸೋಮನಹಳ್ಳಿಯಿಂದ ಇತ್ತೀಚೆಗೆ ಮದ್ದೂರು ನಗರಕ್ಕೆ ಸ್ಥಳಾಂತರಗೊಂಡಿದ್ದ ಗಾರ್ಮೆಂಟ್ಸ್ ಕಾರ್ಖಾನೆಯಲ್ಲಿ ಬೆಳಗಿನ ಜಾವ ಬೆಂಕಿ ಕಾಣಿಸಿಕೊಂಡಿದೆ. ಎಂದಿನಂತೆ ಕಾರ್ಮಿಕರು ಕೆಲಸಕ್ಕೆ ಆಗಮಿಸಿದಾಗ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿರುವುದು ಬೆಳಕಿಗೆ ಬಂದಿದೆ.
ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದರು. ಮೂರಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು, 15ಕ್ಕೂ ಹೆಚ್ಚು ಕಾರ್ಮಿಕರು ಹಾಗೂ ಸಿಬ್ಬಂದಿ ಹರಸಾಹಸಪಟ್ಟು ಬೆಂಕಿಯನ್ನು ನಂದಿಸಿದರು.
ಬೆಂಕಿಯ ಕೆನ್ನಾಲಗೆಗೆ ಸಿಲುಕಿ ಕಾರ್ಖಾನೆಯಲ್ಲಿದ್ದ ಅಪಾರ ಪ್ರಮಾಣದ ಸಾಮಗ್ರಿಗಳು ಸುಟ್ಟು ಕರಕಲಾಗಿವೆ. ಘಟನೆಯಿಂದ ಭಾರೀ ಪ್ರಮಾಣದ ನಷ್ಟ ಸಂಭವಿಸಿದೆ.
ಬೆಂಕಿ ಅವಘಡಕ್ಕೆ ಕಾರಣ ಏನೆಂಬುದು ಇನ್ನಷ್ಟೇ ತಿಳಿದುಬರಬೇಕಿದೆ.
ಮದ್ದೂರು ಠಾಣೆಯ ಪೊಲೀಸರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.