ಮಂಡ್ಯ: ಜಿಲ್ಲಾಧಿಕಾರಿ ಕಚೇರಿ ಎದುರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಮೃತ್ಯು
ಮಂಡ್ಯ: ಭೂಸ್ವಾಧೀನಗೊಂಡ ಜಮೀನಿಗೆ ಪರಿಹಾರ ಸಿಗದ ಬೇಸರದಿಂದ ಜಿಲ್ಲಾಧಿಕಾರಿ ಕಚೇರಿ ಎದುರಿನ ಕಾವೇರಿ ಉದ್ಯಾನದಲ್ಲಿ ಮಂಗಳವಾರ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದ ರೈತ ಚಿಕಿತ್ಸೆ ಫಲಿಸದೆ ಬುಧವಾರ ಬೆಳಗ್ಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಕೆ.ಆರ್.ಪೇಟೆ ತಾಲೂಕು ಮೂಡನಹಳ್ಳಿ ಗ್ರಾಮದ ಮಂಜೇಗೌಡ(55) ಆತ್ಮಹತ್ಯೆ ಮಾಡಿಕೊಂಡವರು. ಇವರ ದೇಹ ಶೇ.50ರಷ್ಟು ದೇಹ ಸುಟ್ಟುಹೋಗಿತ್ತು. ಮಿಮ್ಸ್ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿತ್ತು.
ಗ್ರಾಮದಲ್ಲಿ ಮಂಜೇಗೌಡನ ಕುಟುಂಬಕ್ಕೆ ಸೇರಿದ ಎರಡು ಎಕರೆ ಜಮೀನಿದ್ದು, ಕೆಲ ವರ್ಷಗಳ ಹಿಂದೆಯೇ ಅದನ್ನು ಸರಕಾರ ವಶಪಡಿಸಿಕೊಂಡು ನಿವೇಶನ ಮಾಡಿ ಬಡವರಿಗೆ ಹಂಚಿಕೆ ಮಾಡಿದೆ. ಆದರೆ, ಇದಕ್ಕೆ ಪ್ರತಿಯಾಗಿ ತಮಗೆ ಯಾವುದೇ ಪರಿಹಾರ ಬಂದಿಲ್ಲ ಎಂಬುದು ಮಂಜೇಗೌಡರ ಆರೋಪವಾಗಿತ್ತು.
ಈ ಸಂಬಂಧ ಜಿಲ್ಲಾಧಿಕಾರಿ ಹಾಗೂ ಕೆ.ಆರ್.ಪೇಟೆ ತಾಲೂಕು ಕಚೇರಿಗೆ ಮನವಿ ಕೊಟ್ಟರೂ ಪ್ರಯೋಜನವಾಗಿಲ್ಲ. ಸೋಮವಾರ ಜಿಲ್ಲಾಧಿಕಾರಿಗೆ ಮತ್ತೆ ಮನವಿ ಸಲ್ಲಿಸಲು ಬಂದಿದ್ದ ಮಂಜೇಗೌಡ, ಅದು ಸಾಧ್ಯವಾಗದ ಕಾರಣ ಜಿಲ್ಲಾಧಿಕಾರಿ ಕಚೇರಿ ಎದುರಿನ ಉದ್ಯಾನವನದಲ್ಲಿ ಮಲಗಿದ್ದರು. ಮಂಗಳವಾರ ಬೆಳಗ್ಗೆ ಉದ್ಯಾನವನದಲ್ಲೇ ಮಂಜೇಗೌಡ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು.
ಈ ಸಂಬಂಧ ಮಂಡ್ಯ ಸೆಂಟ್ರಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.