×
Ad

ಮಂಡ್ಯ | ಮೂರು ಸ್ಕ್ಯಾನಿಂಗ್ ಸೆಂಟರ್ ವಿರುದ್ಧ ದೂರು ದಾಖಲು: ಜಿಲ್ಲಾಧಿಕಾರಿ ಡಾ.ಕುಮಾರ್

Update: 2024-02-12 22:37 IST

ಮಂಡ್ಯ: ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಹೆಣ್ಣುಭ್ರೂಣ ಪತ್ತೆ ಪ್ರಕರಣ ಕುರಿತಂತೆ ಸ್ಕ್ಯಾನಿಂಗ್ ಸೆಂಟರ್ ಗಳನ್ನು ಪರಿಶೀಲಿಸಿದ ಸಂದರ್ಭದಲ್ಲಿ ಕೆ.ಆರ್.ಪೇಟೆ ತಾಲೂಕಿನಲ್ಲಿ 1 ಹಾಗೂ ನಾಗಮಂಗಲ ತಾಲೂಕಿನಲ್ಲಿ 2 ಸ್ಕ್ಯಾನಿಗ್ ಸೆಂಟರ್ ಗಳಲ್ಲಿ ನಿಯಮ ಉಲ್ಲಂಘನೆ ಕಂಡುಬಂದಿದ್ದು, ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ್ ತಿಳಿಸಿದ್ದಾರೆ.

ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 55 ಸ್ಕ್ಯಾನಿಂಗ್ ಸೆಂಟರ್, 25 ಹಾಸ್ಪಿಟಲ್, 32 ಲ್ಯಾಬ್, 130 ಕ್ಲಿನಿಕ್‍ಗಳನ್ನು ಪರಿಶೀಲಿಸಿರುವ ಬಗ್ಗೆ ನಿಯೋಜಿಸಿರುವ ವೈದ್ಯರು, ಅಧಿಕಾರಿಗಳು ಇಲ್ಲಿ ಯಾವುದೇ ಹೆಣ್ಣು ಭ್ರೂಣ ಲಿಂಗ ಪತ್ತೆ ಅಥವಾ ಅನಧಿಕೃತ ಕೃತ್ಯ ನಡೆಯುತ್ತಿಲ್ಲ ಎಂಬ ದೃಢೀಕರಣ ಪತ್ರವನ್ನು ನೀಡಬೇಕು ಎಂದರು.

ಈಗಾಗಲೇ ಜಿಲ್ಲಾ, ತಾಲೂಕು ಹಾಗೂ ಗ್ರಾಮ ಮಟ್ಟದಲ್ಲಿ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿದೆ. ಅರಿವು ಕಾರ್ಯಕ್ರಮ ಇನ್ನೂ ಚುರುಕುಗೊಳ್ಳಬೇಕು. ಜಾಗೃತಿ ಕಾರ್ಯಕ್ರಮದಲ್ಲಿ ಸ್ಥಳೀಯ ಸಂಘ ಸಂಸ್ಥೆಗಳನ್ನು ಹೆಚ್ಚು ತೊಡಗಿಸಿಕೊಳ್ಳಿ. ಗ್ರಾಮ ಮತ್ತು ವಾರ್ಡ್ ಸಭೆಗಳಲ್ಲಿ ಒಬ್ಬರು ಆರೋಗ್ಯ ಇಲಾಖೆಯ ಅಧಿಕಾರಿಗಳನ್ನು ನಿಯೋಜಿಸಿ, ಸಭೆಯಲ್ಲಿ ಹೆಣ್ಣುಭ್ರೂಣ ಹತ್ಯೆಯ ದುಷ್ಪರಿಣಾಮ ಕುರಿತು ಅರಿವು ಮೂಡಿಸಿ ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮೋಹನ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಬೆಟ್ಟಸ್ವಾಮಿ, ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ಸೋಮಶೇಖರ್, ಮಹಿಳಾ ಪರ ಹೋರಾಟಗಾರರಾದ ಸುನಂದ ಜಯರಾಂ, ದೇವಿ, ಸಿ.ಕುಮಾರಿ, ವಿಮೋಚನ ಸಂಸ್ಥೆಯ ಮುಖ್ಯಸ್ಥ ಜನಾರ್ಧನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News