ಮಂಡ್ಯ, ಸೆ. 15: ಪ್ರಜಾಪ್ರಭುತ್ವವು ಕೇವಲ ಐದು ವರ್ಷಗಳಿಗೊಮ್ಮೆ ಮತದಾನ ಮಾಡುವ ಪ್ರಕ್ರಿಯೆಯಲ್ಲ, ಅದು ನಮ್ಮ ನಿತ್ಯ ಜೀವನದ ಉಸಿರು ಹಾಗೂ ನಮ್ಮೆಲ್ಲರ ಹಕ್ಕು ಮತ್ತು ಸ್ವಾತಂತ್ರ್ಯದ ರಕ್ಷಾ ಕವಚವಾಗಿದೆ. ಆದ್ದರಿಂದ ಪ್ರಜಾಪ್ರಭುತ್ವದ ರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ ಎಂದು ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು.

ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ ಹಾಗೂ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ 'ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ' ಹಾಗೂ 'ಜಿಲ್ಲಾ ಮಟ್ಟದ ಯುವ ಸಂಸತ್ತು ಸಭೆ'ಗೆ ಚಾಲನೆ ನೀಡಿ ಅವರು ಮಾತನಾಡಿದರು.

ದೇಶದ ಸಂವಿಧಾನವು ಜಾತಿ, ಅಧಿಕಾರ, ಆರ್ಥಿಕ ವ್ಯತ್ಯಾಸಗಳನ್ನು ಮರೆತು ಎಲ್ಲರಿಗೂ ಸಮಾನ ಅವಕಾಶ ಹಾಗೂ ಒಂದೇ ನ್ಯಾಯವನ್ನು ಒದಗಿಸಿದೆ. 2007ರಲ್ಲಿ ವಿಶ್ವಸಂಸ್ಥೆಯು ಪ್ರಜಾಪ್ರಭುತ್ವ ದಿನವನ್ನು ಆಚರಿಸಲು ಕರೆ ನೀಡುವ ಮುನ್ನವೇ ನಮ್ಮ ದೇಶವು ಪ್ರಜಾಸತ್ತಾತ್ಮಕ ತತ್ವದಡಿ ಮುನ್ನಡೆಯುತ್ತಿತ್ತು. 'ಜನರಿಂದ, ಜನರಿಗಾಗಿ, ಜನರಿಗೋಸ್ಕರ' ನಡೆಯುವ ಈ ವ್ಯವಸ್ಥೆಯನ್ನು ಅರ್ಥೈಸಿಕೊಂಡಾಗ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ ಎಂದರು.

ಭಾರತವನ್ನು ಜಾಗತಿಕ ಮಟ್ಟದಲ್ಲಿ ಉನ್ನತ ಸ್ಥಾನದಲ್ಲಿರಿಸಿರುವ ಈ ಶ್ರೇಷ್ಠ ಸಂವಿಧಾನವನ್ನು ರಾಷ್ಟ್ರಕ್ಕೆ ಅರ್ಪಿಸಿದ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ನಾವೆಲ್ಲರೂ ಸ್ಮರಿಸಬೇಕಿದೆ. ಜೊತೆಗೆ, ಎಲ್ಲಾ ಶಾಲೆಗಳಲ್ಲಿ ಮಕ್ಕಳಿಗೆ ಸಂವಿಧಾನದ ಮಹತ್ವವನ್ನು ಕಡ್ಡಾಯವಾಗಿ ತಿಳಿಸಬೇಕಿದೆ ಎಂದು ಅವರು ಪ್ರತಿಪಾದಿಸಿದರು.

ಅಭಿವೃದ್ಧಿಯ ಲಾಭ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಬೇಕು ಎಂಬ ಉದ್ದೇಶದಿಂದ ಸರ್ಕಾರ ಶ್ರಮಿಸುತ್ತಿದ್ದು, ಆಡಳಿತವನ್ನು ಜನಮುಖಿಯಾಗಿಸಲು ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳೇ ಇದಕ್ಕೆ ಸಾಕ್ಷಿಯಾಗಿವೆ. ಪ್ರಜಾಪ್ರಭುತ್ವ ಯಶಸ್ವಿಯಾಗಲು ಕೇವಲ ಸರ್ಕಾರ ಮಾತ್ರವಲ್ಲ, ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯೂ ಮುಖ್ಯವಾಗಿದೆ. ವಿಶೇಷವಾಗಿ ಯುವಜನತೆ ಯಾವುದೇ ಆಸೆ, ಆಮಿಷ, ಜಾತಿ, ಧರ್ಮಗಳ ಪ್ರಭಾವಕ್ಕೆ ಒಳಗಾಗದೆ ನಿರ್ಭೀತಿಯಿಂದ ತಮ್ಮ ಹಕ್ಕುಗಳನ್ನು ಚಲಾಯಿಸಬೇಕು. ಹಕ್ಕುಗಳಿಗಾಗಿ ಹೋರಾಡುವಷ್ಟೇ ಕಾಳಜಿಯನ್ನು ಸಂವಿಧಾನಬದ್ಧ ಕರ್ತವ್ಯಗಳನ್ನು ನಿಭಾಯಿಸುವಲ್ಲಿಯೂ ತೋರುವ ಮೂಲಕ ಎಲ್ಲರೂ ಒಗ್ಗೂಡಿ ಸದೃಢ, ಶಾಂತಿಪೂರ್ಣ ಹಾಗೂ ಸಮೃದ್ಧ ಸಮಾಜವನ್ನು ನಿರ್ಮಿಸೋಣ ಎಂದು ಅವರು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಹಾಗೂ ಗ್ಯಾರಂಟಿ ಯೋಜನೆಗಳ ರಾಜ್ಯ ಉಪಾಧ್ಯಕ್ಷರಾದ ದಿನೇಶ್ ಗೂಳಿಗೌಡ ಅವರು ನೆರೆದಿದ್ದವರಿಗೆ ಸಂವಿಧಾನದ ಪೀಠಿಕೆಯನ್ನು ಬೋಧಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ಕುಮಾರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್.ನಂದಿನಿ ಸೇರಿದಂತೆ ಹಲವು ಗಣ್ಯರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor