ಸರ್ವರನ್ನೂ ಒಳಗೊಳ್ಳುವ ಪರಂಪರೆ ನಮ್ಮದು : ಸಿಎಂ ಸಿದ್ದರಾಮಯ್ಯ
ಮೈಸೂರು : ಜಾತಿ-ಧರ್ಮದ ಸಹಿಷ್ಣತೆ ಇರುವ, ಸರ್ವರನ್ನೂ ಒಳಗೊಳ್ಳುವ ಪರಂಪರೆ ನಮ್ಮದು. ಮನುಷ್ಯರನ್ನು ಜಾತಿ-ಧರ್ಮದ ನೆಪದಲ್ಲಿ ವಿರೋಧಿಸುವವರು, ಪ್ರಾಣಿಗಳನ್ನು ಪ್ರೀತಿಸುತ್ತಾರೆ. ಪ್ರಾಣಿಗಳನ್ನು ಪ್ರೀತಿಸುವುದು ತಪ್ಪಲ್ಲ, ಆದರೆ ಮನುಷ್ಯರನ್ನು ವಿರೋಧಿಸುವುದು ತಪ್ಪು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ಸೋಮವಾರ ನಡೆದ ಅಂಬೇಡ್ಕರ್ ಅವರ 134 ನೇ ಜನ್ಮ ದಿನಾಚರಣೆ, ಪುತ್ಥಳಿ ಅನಾವರಣ, 2,569ನೇ ಬುದ್ಧಪೂರ್ಣಿಮೆ ಭಗವಾನ್ ಬುದ್ಧ ಜಯಂತಿ ಮಹೋತ್ಸವ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನು ನೆರವೇರಿಸಿ ಅವರು ಮಾತನಾಡಿದರು.
ನಮ್ಮ ಸರಕಾರ ಬುದ್ಧ, ಬಸವ, ಅಂಬೇಡ್ಕರ್, ಗಾಂಧಿ ಮತ್ತು ಸಂವಿಧಾನದ ಆಶಯಗಳ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.
ಆರ್ಥಿಕವಾಗಿ ಸರ್ವರಿಗೂ ಶಕ್ತಿ ಬಂದರೆ ಜಾತಿ ವಿನಾಶವಾಗುತ್ತದೆ. ಬುದ್ಧ, ಬಸವ ಅವರು ಜಾತಿ ನಾಶವಾಗಬೇಕೆಂದು ಹೋರಾಟ ಮಾಡಿದರೂ ಇನ್ನೂ ಜಾತಿ ನಾಶವಾಗಿಲ್ಲ ಎಂದು ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದರು.
ಒಳಮೀಸಲಾತಿ ಕುರಿತಾದ ಗೊಂದಲ ನಿವಾರಿಸಲು ನಾಗಮೋಹನ್ ದಾಸ್ ಅವರ ಸಮಿತಿ ರಚಿಸಿದ್ದೇವೆ. ಸಮಿತಿಯ ಶಿಫಾರಸಿನಂತೆ ದತ್ತಾಂಶ ಸಂಗ್ರಹಕ್ಕೆ ಸಮೀಕ್ಷೆ ಆರಂಭಿಸಿದ್ದೇವೆ. ಮೂರು ಹಂತಗಳಲ್ಲಿ ಸಮೀಕ್ಷೆ ನಡೆಯಲಿದೆ. ಈ ಸಮೀಕ್ಷೆ ಒಳ ಮೀಸಲಾತಿಯ ಎಲ್ಲ ಗೊಂದಲಗಳನ್ನು ನಿವಾರಿಸುತ್ತದೆ ಎನ್ನುವ ಭರವಸೆ ಇದೆ ಎಂದು ಅವರು ಹೇಳಿದರು.
ಅಂಬೇಡ್ಕರ್ ಅವರು ಮೀಸಲಾತಿ ಕೊಡದೇ ಹೋಗಿದ್ದರೆ ನಾವು ಮನುಷ್ಯರಾಗಲು ಸಾಧ್ಯವೇ ಇರಲಿಲ್ಲ. ನಾನು ಮುಖ್ಯಮಂತ್ರಿಯೂ ಆಗುತ್ತಿರಲಿಲ್ಲ. ಶತಮಾನಗಳ ಕಾಲ ಶೂದ್ರ ಸಮುದಾಯವನ್ನು ಶಿಕ್ಷಣದಿಂದ ದೂರ ಇಡಲಾಗಿತ್ತು. ಸಂವಿಧಾನದ ಕಾರಣದಿಂದ ಶಿಕ್ಷಣ ಪಡೆದು ಮುಖ್ಯಮಂತ್ರಿ ಆದೆ, ಇಲ್ಲದಿದ್ದರೆ ಕುರಿಯೋ, ಎಮ್ಮೆಯೋ ಕಾಯುತ್ತಾ ಇರಬೇಕಿತ್ತು ಎಂದರು.
140 ಕೋಟಿ ರೂ. ಸವಲತ್ತು ವಿತರಣೆ: ರಾಜ್ಯ ಸರಕಾರದ ಬಳಿ ಅಭಿವೃದ್ಧಿಗೆ ಹಣ ಇಲ್ಲ ಎಂದು ಬಿಜೆಪಿಯವರು ಸುಳ್ಳು ಹೇಳುತ್ತಿದ್ದಾರೆ. ಇಂದು ಒಂದೇ ದಿನ 140 ಕೋಟಿ ರೂ.ಅಭಿವೃದ್ಧಿ ಕಾರ್ಯಗಳನ್ನು ಎಚ್.ಡಿ.ಕೋಟೆ ಜನಕ್ಕೆ ಅರ್ಪಿಸಿದ್ದೇವೆ ಎಂದು ಸಿಎಂ ಹೇಳಿದರು.
ಬಿಜೆಪಿಯವರಿಗೆ ಮಾನ ಮರ್ಯಾದೆ ಇಲ್ಲ. ಅವರು ಸುಳ್ಳು ಹೇಳುತ್ತಾರೆ, ನೀವು ನಂಬುತ್ತೀರಿ. ಈ ಬಾರಿ 8,000 ಕೋಟಿ ರೂ. ಶಾಸಕರ ಅನುದಾನ, ಅಭಿವೃದ್ಧಿ ಕಾರ್ಯಗಳಿಗೆ ಮೀಸಲಿಟ್ಟಿದ್ದೇವೆ. 55 ಸಾವಿರ ಕೋಟಿ ಗ್ಯಾರಂಟಿ ಯೋಜನೆಗಳಿಗೆ ತೆಗೆದಿರಿಸಿದ್ದೇವೆ. 80 ಸಾವಿರ ಕೋಟಿ ರೂ. ಬಂಡವಾಳ ವೆಚ್ಚಕ್ಕೆ ಮೀಸಲಿರಿಸಿಟ್ಟಿದ್ದೇವೆ ಎಂದು ಮುಖ್ಯಮಂತ್ರಿ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಸಂಸದ ಸುನೀಲ್ ಬೋಸ್, ಸ್ಥಳೀಯ ಶಾಸಕ ಅನಿಲ್ ಚಿಕ್ಕಮಾದು, ಶಾಸಕರಾದ ಡಿ.ರವಿಶಂಕರ್, ಗಣೇಶ್ ಪ್ರಸಾದ್, ವಿಧಾನ ಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ, ಗ್ಯಾರಂಟಿ ಯೋಜನೆಗಳ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್, ಉರಿಲಿಂಗಿ ಪೆದ್ದಿ ಮಠದ ಜ್ಞಾನ ಪ್ರಕಾಶ ಸ್ವಾಮೀಜಿ, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಯಕೇಶ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ಬಾಬಾ ಸಾಹೇಬ್ ಅಂಬೇಡ್ಕರ್ ಅವರು ತೋರಿಸಿರುವ ಹಾದಿಯಲ್ಲಿ ನಾವು ನಡೆಯಬೇಕು. ನಾವು ಆರ್ಥಿಕ, ಸಾಮಾಜಿಕ, ರಾಜಕೀಯವಾಗಿ ಬೆಳೆಯಬೇಕಿದ್ದು, ಈ ನಿಟ್ಟಿನಲ್ಲಿ ಶಿಕ್ಷಣ ಅನಿವಾರ್ಯ.
-ಸತೀಶ್ ಜಾರಕಿಹೊಳಿ, ಲೋಕೋಪಯೋಗಿ ಸಚಿವ