ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆ ನನಗೆ ಸೂಕ್ತವಲ್ಲ, ತೃಪ್ತಿಯೂ ಇಲ್ಲ: ಅಸಮಾಧಾನ ಹೊರಹಾಕಿದ ಶಾಸಕ ತನ್ವೀರ್ ಸೇಠ್
"ನನ್ನೊಂದಿಗೆ ಯಾರೂ ಈ ಬಗ್ಗೆ ಚರ್ಚಿಸಿಲ್ಲ, ಸಾಮಾಜಿಕ ಜಾಲತಾಣದ ಮೂಲಕ ಮಾಹಿತಿ ತಿಳಿದುಕೊಂಡೆ"
ತನ್ವೀರ್ ಸೇಠ್
ಮೈಸೂರು: ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಹುದ್ದೆ ತನಗೆ ಸೂಕ್ತವಲ್ಲ ಎಂದು ಹೇಳುವ ಮೂಲಕ ಕಾಂಗ್ರೆಸ್‌ನ ಹಿರಿಯ ಶಾಸಕ ತನ್ವೀರ್ ಸೇಠ್ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ.
ಈ ಕುರಿತು ಶನಿವಾರ ಮೈಸೂರಿನ ತಮ್ಮ ಗೃಹ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಹುದ್ದೆ ನೀಡುವ ಬಗ್ಗೆ ತಮ್ಮೊಂದಿಗೆ ಯಾರೂ ಚರ್ಚಿಸಿಲ್ಲ. ಆದರೂ ಸಾಮಾಜಿಕ ಜಾಲತಾಣಗಳ ಮೂಲಕ ಈ ವಿಷಯ ತಿಳಿದುಕೊಂಡಿದ್ದೇನೆ. ಈ ಹುದ್ದೆ ನನಗೆ ಸೂಕ್ತವಲ್ಲ. ಇದರ ಬಗ್ಗೆ ನನಗೆ ತೃಪ್ತಿ ಇಲ್ಲ ಎಂದು ಹೇಳಿದರು.
ಕಾರ್ಯದರ್ಶಿ ಹುದ್ದೆಯು ಸೂಕ್ತ ನಿರ್ಧಾರಗಳನ್ನು ಕೈಗೊಳ್ಳುವ ಸ್ಥಾನವಲ್ಲ. ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಹುದ್ದೆ ನೀಡಿರುವುದು ತೃಪ್ತಿ ತಂದಿಲ್ಲ. ಮುಖ್ಯಮಂತ್ರಿಗೆ ರಾಜಕೀಯವಾಗಿ ಶಕ್ತಿ ತುಂಬುವ ಕೆಲಸವನ್ನು ನಾವು ಮಾಡಿದ್ದೇವೆ. ಹಿಂದಿನಿಂದಲೂ ಇದೇ ಕೆಲಸ ಮಾಡಿಕೊಂಡು ಬಂದಿದ್ದೇನೆ ಎಂದರು.
ತಮ್ಮ ಹಿರಿತನಕ್ಕೆ ತಕ್ಕ ಸ್ಥಾನಮಾನ ಕಲ್ಪಿಸಲಾಗುತ್ತದೆ ಎಂಬ ವಿಶ್ವಾಸವಿತ್ತು. ಆದರೆ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಹುದ್ದೆ ನೀಡಿರುವ ಮಾಹಿತಿ ಲಭಿಸಿದೆ. ಈ ಬಗ್ಗೆ ಮುಖ್ಯಮಂತ್ರಿ ಕಚೇರಿಯಿಂದ ಯಾವುದೇ ಕರೆ ಬಂದಿಲ್ಲ. ಆ ಹುದ್ದೆ ತನಗೆ ಬೇಡ ಎಂದು ಈ ಹಿಂದೆಯೂ ತಿಳಿಸಿದ್ದೆ. ಮುಖ್ಯಮಂತ್ರಿ ಏನು ಹೇಳುತ್ತಾರೆ ಎಂಬುದನ್ನು ನೋಡಿಕೊಂಡು ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ ಎಂದು ತನ್ವೀರ್ ಸೇಠ್ ತಿಳಿಸಿದರು.