×
Ad

ನಮ್ಮ ʼಗ್ಯಾರಂಟಿʼಗಳನ್ನು ಟೀಕಿಸಿದ್ದ ಬಿಜೆಪಿ ಬೇರೆ ರಾಜ್ಯಗಳಲ್ಲಿ ಅದನ್ನೇ ನಕಲು ಮಾಡುತ್ತಿದೆ : ಡಿ.ಕೆ.ಶಿವಕುಮಾರ್

Update: 2025-07-19 18:41 IST

ಮೈಸೂರು : ಕಾಂಗ್ರೆಸ್ ಸರಕಾರದ ಅಭಿವೃದ್ಧಿ ಯೋಜನೆಗಳು ಜನರ ಕಣ್ಣಿಗೆ ಕಾಣುತ್ತಿವೆ. ನಮ್ಮ ಗ್ಯಾರಂಟಿಗಳನ್ನು ಟೀಕಿಸಿದ್ದ ಬಿಜೆಪಿ ಬೇರೆ ರಾಜ್ಯಗಳಲ್ಲಿ ಅದನ್ನೇ ನಕಲು ಮಾಡುತ್ತಿದೆ. ವಿರೋಧ ಪಕ್ಷಗಳ ಟೀಕೆಗಳು ಸಾಯುತ್ತವೆ, ನಮ್ಮ ಕೆಲಸ ಉಳಿಯುತ್ತವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ನಗರದ ಮಹರಾಜ ಕಾಲೇಜು ಮೈದಾನದಲ್ಲಿ ಶನಿವಾರ ನಡೆದ ವಿವಿಧ ಇಲಾಖೆಗಳ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ನಮ್ಮ ಗ್ಯಾರಂಟಿ ಯೋಜನೆಗಳು ದೇಶಕ್ಕೆ ಮಾದರಿ. ಈ ಗ್ಯಾರಂಟಿ ಯೋಜನೆಗಳು ಸುಳ್ಳು, ಇದರಿಂದ ರಾಜ್ಯ ದಿವಾಳಿಯಾಗುತ್ತದೆ ಎಂದು ಪ್ರಧಾನಮಂತ್ರಿಗಳಿಂದ ಹಿಡಿದು ರಾಜ್ಯದ ಬಿಜೆಪಿ ನಾಯಕರವರೆಗೂ ಎಲ್ಲರೂ ಟೀಕೆ ಮಾಡಿದರು. ನಂತರ ನಡೆದ ಮಧ್ಯಪ್ರದೇಶ, ಮಹಾರಾಷ್ಟ್ರ, ದೆಹಲಿ, ಹರಿಯಾಣ ಸೇರಿದಂತೆ ಬೇರೆ ರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್‌ಗಿಂತ ಮೊದಲೇ ಗ್ಯಾರಂಟಿ ಯೋಜನೆ ಘೋಷಣೆ ಮಾಡಿದ್ದಾರೆ. ಇತ್ತೀಚೆಗೆ ಬಿಹಾರದಲ್ಲೂ ನಮ್ಮದೇ ಗ್ಯಾರಂಟಿ ಯೋಜನೆ ನಕಲು ಮಾಡಿದ್ದಾರೆ ಎಂದು ಟೀಕಿಸಿದರು.

ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ, ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚೆಂದ. ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿರುವ ಕಾರಣ ಜನರ ಬದುಕಿಗಾಗಿ ಐದು ಗ್ಯಾರಂಟಿ ಯೋಜನೆಗಳನ್ನು ನೀಡಲಾಗಿದೆ. ಆ ಮೂಲಕ ರಾಜ್ಯದ ಜನರ ಋಣ ತೀರಿಸಲಾಗುತ್ತಿದೆ ಎಂದರು.

ರಾಹುಲ್ ಗಾಂಧಿ ಅವರು ಭಾರತ ಜೋಡೋ ಯಾತ್ರೆ ನಡೆಸಿದರು. ನಮ್ಮ ರಾಜ್ಯದಲ್ಲಿ ರಾಹುಲ್ ಗಾಂಧಿ ಯಾತ್ರೆ ನಡೆಸಿದ ಎಲ್ಲಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ. ಇದೇ ಸಂದರ್ಭದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾದರು ಎಂದರು.

"ರಾಜ್ಯದಲ್ಲಿ ಅಭಿವೃದ್ಧಿ ಆಗುತ್ತಿಲ್ಲ, ಸರಕಾರದಲ್ಲಿ ಹಣವಿಲ್ಲ" ಎಂದು ವಿರೋಧ ಪಕ್ಷಗಳು ಅಪಪ್ರಚಾರ ಮಾಡುತ್ತಿವೆ. ಕಲ್ಯಾಣ ಕರ್ನಾಟಕಕ್ಕೆ ನಮ್ಮ ಸರಕಾರ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ ನೀಡುತ್ತಿದೆ. ಬೀದರ್ ನಲ್ಲಿ 2025 ಕೋಟಿ ಮೊತ್ತದ ಯೋಜನೆಗೆ ಚಾಲನೆ ನೀಡಿದ್ದೇವೆ. ಇತ್ತೀಚೆಗೆ ಇಂಡಿಯಲ್ಲಿ 3400 ಕೋಟಿ ಮೊತ್ತದ ಯೋಜನೆಗಳಿಗೆ ಚಾಲನೆ ನೀಡಿದೆವು. ಇಂದು ಮೈಸೂರಿನಲ್ಲಿ 2 ಸಾವಿರ ಕೋಟಿಗೂ ಹೆಚ್ಚಿನ ಅನುದಾನದಲ್ಲಿ 74 ಯೋಜನೆಗಳಿಗೆ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದ್ದೇವೆ ಎಂದರು.

ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ಮಾಡಿ, 3 ಸಾವಿರ ಕೋಟಿಗೂ ಹೆಚ್ಚು ಮೊತ್ತದ ಯೋಜನೆ, ವಿಜಯನಗರದಲ್ಲಿ 2 ಸಾವಿರ ಕೋಟಿಗೂ ಹೆಚ್ಚು ಮೊತ್ತದ ಯೋಜನೆಗಳು, ನಂದಿ ಬೆಟ್ಟದಲ್ಲಿ ಸುಮಾರು 2 ಸಾವಿರ ಕೋಟಿಗೂ ಹೆಚ್ಚು ಮೊತ್ತದ ಕಾಮಗಾರಿಗಳಿಗೆ ಅನುಮೋದನೆ ನೀಡಿದ್ದೇವೆ. ನಾವು ಭಾವನೆ ಮೇಲೆ ರಾಜಕೀಯ ಮಾಡುವುದಿಲ್ಲ, ಬದುಕಿನ ಮೇಲೆ ರಾಜಕೀಯ ಮಾಡುತ್ತೇವೆ ಎಂದು ತಿಳಿಸಿದರು.

"ಮಾಜಿ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜ ಅರಸು ನಂತರ ಅತೀ ಹೆಚ್ಚು ಅಭಿವೃದ್ಧಿ ಮಾಡಿದ್ದು ಸಿದ್ಧರಾಮಯ್ಯ ನೇತೃತ್ವದ ನಮ್ಮ ಸರಕಾರ. ನಮ್ಮ ಐದು ಗ್ಯಾರಂಟಿಗಳು ಪಕ್ಷಬೇಧವಿಲ್ಲದೆ, ಎಲ್ಲರಿಗೂ ನೀಡಲಾಗುತ್ತಿದೆ. ನಾವು ಹೇಳಿದ್ದನ್ನು ಮಾಡುತ್ತಿದ್ದೇವೆ. ನುಡಿದಂತೆ ನಡೆಯುತ್ತಿದ್ದೇವೆ. ಕರ್ನಾಟಕವನ್ನು ಸರ್ವಾಂಗೀಣ ಅಭಿವೃದ್ಧಿಯತ್ತ ಕೊಂಡೊಯ್ಯುವ ಕೆಲಸ ಮಾಡೋಣ"

- ಡಾ.ಎಚ್.ಸಿ.ಮಹದೇವಪ್ಪ,ಜಿಲ್ಲಾ ಉಸ್ತುವಾರಿ ಸಚಿವ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News