ಪ್ರಯತ್ನ ವಿಫಲವಾದರು ಪ್ರಾರ್ಥನೆ ವಿಫಲವಾಗಲ್ಲ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಚಾಮುಂಡೇಶ್ವರಿ ದರ್ಶನ ಪಡೆದ ಸಿಎಂ

Update: 2026-08-01 15:41 IST

ಮೈಸೂರು : ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಮೈಸೂರಿಗೆ ಆಗಮಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಚಾಮುಂಡಿ ಬೆಟ್ಟಕ್ಕೆ ತೆರಳಿ ನಾಡದೇವತೆ ಶ್ರೀ ಚಾಮುಂಡೇಶ್ವರಿ ತಾಯಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ವಿಶೇಷ ವಿಮಾನದ ಮೂಲಕ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಶನಿವಾರ ಆಗಮಿಸಿದ ಅವರು, ಅಲ್ಲಿಂದ ರಸ್ತೆ ಮಾರ್ಗವಾಗಿ ಕಾರಿನಲ್ಲಿ ಚಾಮುಂಡಿ ಬೆಟ್ಟಕ್ಕೆ ತೆರಳಿದರು.

ಮುಖ್ಯಮಂತ್ರಿಗಳ ಆಗಮನದ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಪೂರ್ಣಕುಂಭ ಸ್ವಾಗತ ನೀಡಿ, ಶಾಲು ಹಾಗೂ ಹಾರ ಹಾಕಿ ಸನ್ಮಾನಿಸಲಾಯಿತು.

ಬಳಿಕ ಶ್ರೀ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೇವಿಗೆ ಪ್ರಾರ್ಥನೆ ಸಲ್ಲಿಸಿದರು. ನಂತರ ಚಾಮುಂಡಿ ಪಾದುಕೆಗೆ ನಮಸ್ಕರಿಸಿ, ಭಕ್ತಿಯಿಂದ ದೇವರಿಗೆ ವಂದನೆ ಸಲ್ಲಿಸಿದರು. ಇಡುಗಾಯಿ ಹೊಡೆದು ಹರಕೆ ತೀರಿಸಿದರು. ದೇವಾಲಯದ ಪ್ರಧಾನ ಅರ್ಚಕ ಶಶಿಶೇಖರ ದೀಕ್ಷಿತ್ ಅವರು ಫಲ-ತಾಂಬೂಲ ನೀಡಿ ಆಶೀರ್ವದಿಸಿದರು.

ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, “ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲವಾಗುವುದಿಲ್ಲ ಎಂಬ ನಂಬಿಕೆ ನನ್ನದು. ಚಾಮುಂಡೇಶ್ವರಿ ದೇವಿ ಹಾಗೂ ಅಜ್ಜಯ್ಯನ ಆಶೀರ್ವಾದ ಸದಾ ಇರುತ್ತದೆ” ಎಂದು ಹೇಳಿದರು.

“ರಾಜ್ಯದ ಜನರೆಲ್ಲರೂ ಸುಖ-ಸಮೃದ್ಧಿಯಿಂದ ಇರಲಿ, ನಾಡು ಸುಭಿಕ್ಷವಾಗಿರಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದೇನೆ. ಎಲ್ಲಾ ಜಾತಿ, ಧರ್ಮದವರನ್ನು ಸಮಾನವಾಗಿ ಕಾಣುವುದು ನನ್ನ ಕರ್ತವ್ಯ. ಆ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತೇನೆ” ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಚಾಮುಂಡಿ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ರೂಪ ಅವರು ಮುಖ್ಯಮಂತ್ರಿಗಳನ್ನು ಗೌರವಿಸಿದರು.

ಸಂಸದ ಸುನೀಲ್ ಬೋಸ್, ಶಾಸಕರಾದ ತನ್ವೀರ್ ಸೇಠ್, ಪುಟ್ಟರಂಗ ಶೆಟ್ಟಿ, ಅನಿಲ್ ಚಿಕ್ಕಮಾದು, ಕೆ. ಹರೀಶ್ ಗೌಡ, ಡಿ. ರವಿಶಂಕರ್, ದರ್ಶನ್ ಧ್ರುವನಾರಾಯಣ್, ಕಾಂಗ್ರೆಸ್ ಮುಖಂಡ ಶ್ರೀನಾಥ್ ಬಾಬು ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಬೃಹತ್ ವೀಳ್ಯದೆಲೆ, ಸೇಬಿನ ಹಾರ ಹಾಕಿ ಸಿಎಂಗೆ ಕಾಂಗ್ರೆಸ್ ಕಾರ್ಯಕರ್ತರಿಂದ ಸನ್ಮಾನ :

ಮೈಸೂರು: ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಮೈಸೂರಿಗೆ ಆಗಮಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ನಗರ ಹಾಗೂ ಜಿಲ್ಲಾ ಕಾಂಗ್ರೆಸ್ ಘಟಕದ ವತಿಯಿಂದ ಅದ್ಧೂರಿ ಸ್ವಾಗತ ಹಾಗೂ ಸನ್ಮಾನ ನಡೆಯಿತು.

ಚಾಮುಂಡಿ ಬೆಟ್ಟ ರಸ್ತೆಯ ಕಾರಂಜಿ ಕೆರೆ ವೃತ್ತದಿಂದ ಕುರುಬಾರಹಳ್ಳಿ ವೃತ್ತದವರೆಗೆ ತೆರೆದ ವಾಹನದಲ್ಲಿ ಮುಖ್ಯಮಂತ್ರಿ ರೋಡ್‌ಶೋ ನಡೆಸಿದರು.

ಈ ವೇಳೆ ಬೃಹತ್ ಗಾತ್ರದ ವೀಳ್ಯದೆಲೆ ಹಾಗೂ ತುಳಸಿಯಿಂದ ಅಲಂಕರಿಸಿದ ಹಾರ, ಕಪ್ಪು ಕಂಬಳಿ ಹೊದಿಸಿ ಗೌರವ ಸಲ್ಲಿಸಲಾಯಿತು. ಕ್ರೇನ್ ಮೂಲಕ ಸೇಬಿನ ಹಾರ ಹಾಗೂ ಸುಗಂಧರಾಜ ಹೂವಿನ ಹಾರ ಹಾಕಿ ಕಾರ್ಯಕರ್ತರು ಸಿಎಂ ಅವರನ್ನು ಅಭಿನಂದಿಸಿದರು.

ರಸ್ತೆಯ ಎರಡೂ ಬದಿಗಳಲ್ಲಿ ನೆರೆದಿದ್ದ ಜನರತ್ತ ಕೈಬೀಸಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶುಭಾಶಯ ಕೋರಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News