ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ 50:50 ಬದಲಿ ನಿವೇಶನ ಹಂಚಿಕೆ ರದ್ದು: ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ
ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಯನ್ನು ರದ್ದುಪಡಿಸಿ ಆದೇಶಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಏಕಸದಸ್ಯ ವಿಚಾರಣಾ ಆಯೋಗದ ಶಿಫಾರಸ್ಸು, ಉನ್ನತ ಮಟ್ಟದ ತಾಂತ್ರಿಕ ಸಮಿತಿಯ ವರದಿಯನ್ವಯ ತಕ್ಷಣದಿಂದ ಜಾರಿಗೆ ಬರುವಂತೆ 2023ರ ಮಾ.14ರ ನಿರ್ದೇಶನವನ್ನು ಉಲ್ಲಂಘಿಸಿ ಮಾಡಲಾದ ಎಲ್ಲ 50:50 ಬದಲಿ ನಿವೇಶನಗಳ ಹಂಚಿಕೆಯನ್ನು ರದ್ದುಪಡಿಸಿ ಆದೇಶಿಸಲಾಗಿದೆ ಎಂದು ಹೇಳಿದ್ದಾರೆ.
ಈ ಸಂಬಂಧ ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು, ಜಿಲ್ಲಾಧಿಕಾರಿ, ಆಯುಕ್ತರು ಹಾಗೂ ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳಿಗೆ ಸರಕಾರವು ಪ್ರಮುಖ ನಿರ್ದೇಶನಗಳನ್ನು ನೀಡಿದೆ. 2023ರ ಮಾ.14ರ ಸರಕಾರದ ನಿರ್ದೇಶನಗಳನ್ನು ಉಲ್ಲಂಘಿಸಿ ಮಾಡಲಾಗಿರುವ ಎಲ್ಲ 50:50 ಬದಲಿ ನಿವೇಶನ ಹಂಚಿಕೆ ಆದೇಶಗಳನ್ನು ತಕ್ಷಣವೆ ರದ್ದುಪಡಿಸಬೇಕು ಎಂದು ಅವರು ಹೇಳಿದ್ದಾರೆ.
ನಿಯಮ ಉಲ್ಲಂಘಿಸಿ ಈಗಾಗಲೇ ಸಬ್-ರಿಜಿಸ್ಟ್ರಾರ್ ಕಚೇರಿಯಲ್ಲಿ ನೋಂದಣಿಯಾಗಿರುವ ಬದಲಿ ನಿವೇಶನಗಳ ‘ಕ್ರಯಪತ್ರ'ಗಳನ್ನು ರದ್ದುಪಡಿಸಲು ಸಿವಿಲ್ ನ್ಯಾಯಾಲಯದಲ್ಲಿ ತಕ್ಷಣವೇ ದಾವೆ ಹೂಡಬೇಕು. ಇದುವರೆಗೆ ಕ್ರಯಪತ್ರವಾಗದ ಪ್ರಕರಣಗಳಲ್ಲಿ, ಸರಕಾರದಿಂದ ಸ್ಪಷ್ಟ ಮಾರ್ಗಸೂಚಿ ರಚನೆಯಾಗಿ ಸೂಕ್ತ ನಿರ್ದೇಶನ ಬರುವವರೆಗೂ ಪ್ರಾಧಿಕಾರದಿಂದ ಯಾವುದೇ ಕ್ರಯಪತ್ರಗಳನ್ನು ನೀಡಬಾರದು ಎಂದು ಯತೀಂದ್ರ ಸಿದ್ದರಾಮಯ್ಯ ಸೂಚಿಸಿದ್ದಾರೆ.
ಖಾತಾ ಪ್ರಕ್ರಿಯೆ: ಈಗಾಗಲೇ ನೋಂದಣಿಯಾಗಿರುವ ನಿವೇಶನಗಳಿಗೆ ಖಾತಾ ಮಾಡಿಕೊಡುವುದನ್ನು ತಡೆಹಿಡಿಯಲು ಮೈಸೂರು ಮಹಾನಗರ ಪಾಲಿಕೆ, ಸಂಬಂಧಪಟ್ಟ ನಗರಸಭೆ ಹಾಗೂ ಗ್ರಾಮ ಪಂಚಾಯಿತಿಗಳಿಗೆ ನಿರ್ದೇಶನ ನೀಡಬೇಕು. ಈಗಾಗಲೇ ಖಾತಾ ಆಗಿದ್ದಲ್ಲಿ, ಕರ್ನಾಟಕ ನಗರ ಪಾಲಿಕೆಗಳ ಕಾಯ್ದೆ 1976, ಕರ್ನಾಟಕ ಮುನಿಸಿಪಲ್ ಕಾಯ್ದೆ 1961 ಹಾಗೂ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯ್ದೆ 1993 ರಡಿ ನಿಯಮಾನುಸಾರ ರದ್ದುಪಡಿಸಲು ಸ್ಥಳೀಯ ಸಂಸ್ಥೆಗಳಿಗೆ ಸೂಚಿಸುವಂತೆ ಅವರು ತಿಳಿಸಿದ್ದಾರೆ.
ಈ ಆದೇಶದ ಮೇರೆಗೆ ಕೈಗೊಂಡ ಕ್ರಮಗಳ ಕುರಿತು ಅನುಪಾಲನಾ ವರದಿಯನ್ನು ಸರಕಾರಕ್ಕೆ ತಕ್ಷಣವೇ ಸಲ್ಲಿಸಬೇಕು. ಸೂಚನೆ ಪಾಲನೆಯಲ್ಲಿ ವಿಫಲವಾದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ನಿಯಮಾನುಸಾರ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಯತೀಂದ್ರ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
ನಿಯಮ ಉಲ್ಲಂಘಿಸಿ 50:50 ಬದಲಿ ನಿವೇಶನಗಳ ಹಂಚಿಕೆ ರದ್ದುಪಡಿಸಲು ಇಂದು(ಆ.19) ನೀಡಿರುವ ನಿರ್ದೇಶನದನ್ವಯ ಮೈಸೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಸುಮಾರು 1100 ‘50:50’ ಬದಲಿ ನಿವೇಶನಗಳನ್ನು ರದ್ದುಪಡಿಸಲು ಸರಕಾರ ನಿರ್ದೇಶನ ನೀಡಿದೆ. ಇದರ ಮೌಲ್ಯ ಸರಿ ಸುಮಾರು 2 ಸಾವಿರ ಕೋಟಿ ರೂ. ಎಂದು ಅಂದಾಜಿಸಬಹುದಾಗಿದೆ ಎಂದು ಅವರು ಹೇಳಿದ್ದಾರೆ.
ಮೊದಲ ಹಂತದಲ್ಲಿ 2023ರ ಮಾ.14ರ ನಂತರ ನಿಯಮ ಉಲ್ಲಂಘಿಸಿ ಮಾಡಲಾದ ಹಂಚಿಕೆಯನ್ನು ರದ್ದುಪಡಿಸಲಾಗಿದೆ. ಎರಡನೇ ಹಂತದಲ್ಲಿ 2023ರ ಮಾ.14ಕ್ಕೂ ಮೊದಲೂ ಹಂಚಿಕೆ ಮಾಡಲಾಗಿರುವ ಪ್ರಕರಣಗಳಲ್ಲಿ ನಿಯಮ ಉಲ್ಲಂಘನೆಯನ್ನು ಪರಿಶೀಲಿಸಲು ಕ್ರಮ ಕೈಗೊಳ್ಳಲಾಗುತ್ತಿದ್ದು, ಅಕ್ರಮ ಕಂಡುಬಂದಲ್ಲಿ ಅವುಗಳ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದು ಯತೀಂದ್ರ ಸಿದ್ದರಾಮಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.