Mysuru | ಪಶ್ಚಿಮ ಬಂಗಾಳ ಮೂಲದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: ಮೂವರು ಆರೋಪಿಗಳ ಬಂಧನ
ಸಾಂದರ್ಭಿಕ ಚಿತ್ರ | Photo Credit : magnific
ಮೈಸೂರು : ಪಶ್ಚಿಮ ಬಂಗಾಳ ಮೂಲದ ಮಹಿಳೆಯೊಬ್ಬರ ಮೇಲೆ ಸಾಮೂಹಿ ಅತ್ಯಾಚಾರ ಎಸಗಿರುವ ಘಟನೆ ಮೈಸೂರು ಜಿಲ್ಲೆಯ ಟಿ.ನರಸೀಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.
ಬಂಧಿತರನ್ನು ಕಿರಣ್ ಅಲಿಯಾಸ್ ಹುಚ್ಚ, ರಿಯಾನ್ಸನ್ ಮತ್ತು ಕಿಶೋರ್ ಎಂದು ಗುರುತಿಸಲಾಗಿದೆ. ಈ ಮೂವರು ಟಿ.ನರಸೀಪುರ ಟೌನ್ ನಿವಾಸಿಗಳಾಗಿದ್ದಾರೆ ಎನ್ನಲಾಗಿದೆ.
ಪಶ್ಚಿಮ ಬಂಗಾಳದ ಮಹಿಳೆಯೋರ್ವರು, ಟಿ.ನರಸೀಪುರದ ಕಬಾಬ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಶನಿವಾರ ರಾತ್ರಿ 9.30 ರ ಸಮಯದಲ್ಲಿ ಟಿ.ನರಸೀಪುರ ಟೌನ್ ನಲ್ಲಿ ಬಸ್ ಗಾಗಿ ಕಾಯುತ್ತಿದ್ದ ವೇಳೆ ಕಿರಣ್ ಎಂಬಾತ ಅವರನ್ನು ಡ್ರಾಪ್ ಮಾಡುವ ನೆಪದಲ್ಲಿ ತನ್ನ ವಾಹನಕ್ಕೆ ಹತ್ತಿಸಿಕೊಂಡು ಮೂಗೂರು ಗ್ರಾಮದ ಆಚೆಗೆ ಇರುವ ಲಾಡ್ಜ್ ಒಂದಕ್ಕೆ ಕರೆದೊಯ್ದು ತನ್ನ ಇನ್ನಿಬ್ಬರು ಸ್ನೇಹಿತರೊಂದಿಗೆ ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಸಂಬಂಧ ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಸೂಚನೆ ಮೇರೆಗೆ ಡಿವೈಎಸ್ಪಿ ಧರ್ಮೇಂದ್ರ ಅವರ ಮಾರ್ಗದರ್ಶನದಲ್ಲಿ ಇನ್ಸ್ ಪೆಕ್ಟರ್ ಧನಂಜಯ ತನಿಖೆ ನಡೆಸುತ್ತಿದ್ದಾರೆ.