Mysuru | ವೃದ್ಧೆಯನ್ನು ಹತ್ಯೆಗೈದು ಶೌಚಾಲಯದ ಗುಂಡಿಯಲ್ಲಿ ಹೂತು ಹಾಕಿದ್ದ ಆರೋಪಿಯ ಬಂಧನ
ಸಾಂದರ್ಭಿಕ ಚಿತ್ರ | PC : Gemini AI/ಗೌರಮ್ಮ(90)
ಮೈಸೂರು : ಜಿಲ್ಲೆಯ ಕೆ.ಆರ್.ನಗರ ತಾಲ್ಲೂಕಿನಲ್ಲಿ ವೃದ್ದ ಮಹಿಳೆಯನ್ನು ಕೊಲೆ ಮಾಡಿ ಶೌಚಾಲಯದ ಗುಂಡಿಯಲ್ಲಿ ಹೂತು ಹಾಕಿದ ಪ್ರಕರಣ ಬೆಳಕಿಗೆ ಬಂದಿದೆ.
ತಾಲೂಕಿನ ತಿಪ್ಪೂರು ಗ್ರಾಮದ ಗೌರಮ್ಮ(90), ಎಂಬಾಕೆಯನ್ನು ಅದೇ ಗ್ರಾಮದ ವೀರಭದ್ರ ಎಂಬಾತ ಹತ್ತು ದಿನಗಳ ಹಿಂದೆ ಕೊಲೆ ಮಾಡಿ ಯಾರಿಗೂ ಅನುಮಾನ ಬಾರದ ಹಾಗೆ ಚೀಲದಲ್ಲಿ ಹಾಕಿ ಮುಚ್ಚಿಟ್ಟಿದ್ದ ಎನ್ನಲಾಗಿದೆ.
ತನ್ನ ತಾಯಿ ಕಾಣೆಯಾಗಿದ್ದಾರೆ ಎಂದು ಮಗ ಸದಾನಂದ ಕೆ.ಆರ್.ನಗರ ಠಾಣೆಗೆ ಎಪ್ರಿಲ್ 30 ರಂದು ದೂರು ನೀಡಿ ಹುಡುಕಿ ಕೊಡುವಂತೆ ಮನವಿ ಮಾಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆಗಿಳಿದಾಗ ಗ್ರಾಮಸ್ಥರು ವೀರಭದ್ರನ ಮೇಲೆ ಅನುಮಾನ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಆತನನ್ನು ಶುಕ್ರವಾರ ಬಂಧಿಸಿ ತೀವ್ರ ವಿಚಾರಣೆಗೆ ಒಳಪಡಿಸಿದಾಗ ತಾನೇ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.
ಮೃತದೇಹವಿದ್ದ ಸ್ಥಳಕ್ಕೆ ಪೊಲೀಸ್ ಅಧೀಕ್ಷಕ ಮಲ್ಲಿಕಾರ್ಜುನ ಬಾಲದಂಡಿ, ಹೆಚ್ಚುವರಿ ಪೊಲೀಸ್ ಅಧಿಕ್ಷಕ ಮಲ್ಲಿಕ್, ಡಿವೈಎಸ್ ಪಿ ರಾಜಣ್ಣ, ಪೊಲೀಸ್ ಇನ್ಸ್ ಪೆಕ್ಟರ್ ಎಸ್.ಶಿವಪ್ರಕಾಶ್, ಪಿಎಸ್ ಐ ಆರ್.ಸ್ವಾಮೀಗೌಡ ಭೇಟಿ ನೀಡಿ ಪರಿಶೀಲಿಸಿದರು.
ಆನಂತರ ಮೃತದೇಹವನ್ನು ವಶಕ್ಕೆ ಪಡೆದ ಪೊಲೀಸರು, ಮೈಸೂರಿನ ಕೆ.ಆರ್.ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.