Mysuru | ಒಂದೇ ಕುಟುಂಬದ ಮೂವರು ಸಾವು: ಶವಾಗಾರ ಮುಂದೆ ಗ್ರಾಮಸ್ಥರ ಪ್ರತಿಭಟನೆ
ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಮತ್ತು ಕುಟುಂಬಕ್ಕೆ ನ್ಯಾಯ ದೊರಕಬೇಕು :ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ
ಮೈಸೂರು: ಟಿ.ನರಸೀಪುರ ತಾಲ್ಲೂಕಿನ ಕೆಂಪಯ್ಯನಹುಂಡಿಯಲ್ಲಿ ಸೋಮವಾರ ತಂದೆ,ತಾಯಿ ಮತ್ತು ಮಗಳು ಸೇರಿದಂತೆ ಒಂದೇ ಕುಟುಂಬದ ಮೂವರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಶವಾಗಾರದ ಬಳಿ ಗ್ರಾಮಸ್ಥರು ಪ್ರತಿಭಟನೆ ನಡೆಸಿ ಸ್ಥಳಕ್ಕೆ ಯತೀಂದ್ರ ಸಿದ್ದರಾಮಯ್ಯ ಮತ್ತು ಪುಟ್ಟರಂಗಶೆಟ್ಟಿ ಬರುವಂತೆ ಆಗ್ರಹಿಸಿದರು.
ಶಿವಣ್ಣ, ಪತ್ನಿ ನಾಗರತ್ನ ಮಗಳು ರಕ್ಷಿತಾ ಸಾವಿಗೆ ಕಾರಣನಾದ ಉಲ್ಲಾಸ್ ಗೌಡನಿಗೆ ಉಗ್ರ ಶಿಕ್ಷೆ ಆಗಬೇಕು ಮತ್ತು ಆತನ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಬೇಕು. ಸಂತ್ರಸ್ತ ಕುಟುಂಬಕ್ಕೆ ಸೂಕ್ತ ಪರಿಹಾರ ಕೊಡಬೇಕು ಎಂದು ಆಗ್ರಹಿಸಿದ್ದಾರೆ.
ಸ್ಥಳಕ್ಕೆ ಚಾಮರಾಜನಗರ ಶಾಸಕ ಪುಟ್ಟರಂಗಶೆಟ್ಟಿ ಮತ್ತು ಮಾಜಿ ಸಚಿವ ಸಾ.ರಾ ಮಹೇಶ್ ಭೇಟಿ ನೀಡಿ ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಿ ನ್ಯಾಯ ದೊರಕಿಸಿಕೊಡುವಂತೆ ಭರವಸೆ ನೀಡಿದರು.
ಮಾಜಿ ಸಿಎಂ ಸಿದ್ದರಾಮಯ್ಯ ಕ್ಷೇತ್ರವಾಗಿರುವುದರಿಂದ ಸ್ಥಳಕ್ಕೆ ಸಿದ್ದರಾಮಯ್ಯ ಅಥವಾ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಬರಲೇಬೇಕು ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದರು.
ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಮತ್ತು ಕುಟುಂಬಕ್ಕೆ ನ್ಯಾಯ ದೊರಕಬೇಕು: ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ
ಟಿ. ನರಸೀಪುರ ತಾಲೂಕಿನ ಹಳೇಕೆಂಪಯ್ಯನಹುಂಡಿ ಗ್ರಾಮದಲ್ಲಿ ಆತ್ಮಹತ್ಯೆಗೆ ಶರಣಾದ ಶಿವಣ್ಣ, ನಾಗರತ್ನ ಹಾಗೂ ರಕ್ಷಿತಾ ಅವರ ನಿವಾಸಕ್ಕೆ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಮಂಗಳವಾರ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಈ ವೇಳೆ ಮಾತನಾಡಿದ ಅವರು, ಈ ಅಮಾನವೀಯ ಘಟನೆ ನನ್ನ ಮನಸ್ಸಿಗೆ ತೀವ್ರ ನೋವುಂಟು ಮಾಡಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಹಾಗೂ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿ ದೊರೆಯಲಿ ಎಂದು ಆಶಿಸುತ್ತೇನೆ. ಈ ದುರ್ಘಟನೆಗೆ ಕಾರಣವಾದವರು ಕಾನೂನಿನ ಬಾಹುಗಳಿಂದ ತಪ್ಪಿಸಿಕೊಳ್ಳಲು ಅವಕಾಶ ನೀಡುವುದಿಲ್ಲ. ಘಟನೆ ತಿಳಿದ ಕ್ಷಣದಿಂದಲೇ ಪೊಲೀಸ್ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಮಾಹಿತಿ ಪಡೆಯುತ್ತಿರುವ ಜೊತೆಗೆ ಪ್ರಕರಣದ ಸಂಪೂರ್ಣ ತನಿಖೆಯನ್ನು ಶೀಘ್ರಗತಿಯಲ್ಲಿ ಕೈಗೊಂಡು, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ ಎಂದರು.
ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಮತ್ತು ಕುಟುಂಬಕ್ಕೆ ನ್ಯಾಯ ದೊರಕಬೇಕು ಎಂಬುದು ನನ್ನ ದೃಢ ಸಂಕಲ್ಪ ಎಂದು ತಿಳಿಸಿದರು.
ಇದೇ ವೇಳೆ ಸಂಸದ ಸುನೀಲ್ ಬೋಸ್, ಶಾಸಕ ಪುಟ್ಟರಂಗ ಶೆಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.