ಒಪಿಎಸ್ ಜಾರಿ ಕುರಿತು ಸಮಿತಿಯ ವರದಿ ಬಳಿಕ ನಿರ್ಧಾರ : ಸಿಎಂ ಸಿದ್ದರಾಮಯ್ಯ
Update: 2025-07-19 23:02 IST
ಮೈಸೂರು : ಏಳನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿ ಮಾಡಲಾಗಿದೆ. ಒಪಿಎಸ್ (ಹಳೇ ಪಿಂಚಣಿ ಯೋಜನೆ) ಜಾರಿ ಕುರಿತು ಸಮಿತಿ ವರದಿ ಕೊಟ್ಟ ಬಳಿಕ ಸೂಕ್ತ ನಿರ್ಧಾರ ಕೈಗೊಳ್ಳುತ್ತೇನೆ. ಆರೋಗ್ಯ ಸಂಜೀವಿನಿ ಬಗ್ಗೆಯೂ ತೀರ್ಮಾನ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ರಾಜ್ಯ ಸರಕಾರಿ ನೌಕರರ ಸಂಘ ಶನಿವಾರ ಆಯೋಜಿಸಿದ್ದ ಸರಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಮಕ್ಕಳ ಪ್ರತಿಭೆ ರೂಪುಗೊಳ್ಳಲು ಶಿಕ್ಷಕರಷ್ಟೇ ಪೋಷಕರ ಶ್ರಮ ಕೂಡ ಅಗತ್ಯ. ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಸರಕಾರಿ ನೌಕರರು ಜಾತಿ, ಧರ್ಮ ನೋಡಬಾರದು. ನಮ್ಮ ಮೇಲೆ, ಸರಕಾರಿ ನೌಕರರ ಮೇಲೆ ಸಮಾಜದ ಋಣ ಇದೆ. ಸರಕಾರಿ ನೌಕರರ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಸಿದ್ದವಿದೆ ಎಂದರು.
ಕಾರ್ಯಕ್ರಮದಲ್ಲಿ ಸಚಿವ ಕೆ.ವೆಂಕಟೇಶ್, ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಕ್ಷರಿ, ಇತರರು ಉಪಸ್ಥಿತರಿದ್ದರು