ರಾಹುಲ್ ಗಾಂಧಿ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ ಜೈಲಿಗಟ್ಟಬೇಕು : ಛಲವಾದಿ ನಾರಾಯಣಸ್ವಾಮಿ
"ಕರ್ನಾಟಕದಲ್ಲೂ ಕಾಂಗ್ರೆಸ್ ಪಕ್ಷವನ್ನು ನಿರ್ನಾಮ ಮಾಡಬೇಕು"
ಮೈಸೂರು: ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ದೇಶದ್ರೋಹಿ. ಅವರ ವಿರುದ್ಧ ತಕ್ಷಣ ದೇಶದ್ರೋಹದ ಪ್ರಕರಣ ದಾಖಲಿಸಿ ಜೈಲಿಗಟ್ಟಬೇಕು ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.
ನಗರದ ಬಿಜೆಪಿ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿ ಎಂದಿಗೂ ಸ್ವಂತ ಬುದ್ಧಿಯಿಂದ ಮಾತನಾಡುವುದಿಲ್ಲ. ವಿದೇಶದಲ್ಲಿರುವ ಭಾರತದ ವಿರೋಧಿಗಳ ಮಾತುಗಳನ್ನು ಕೇಳಿಕೊಂಡು ಭಾರತದ ವಿರುದ್ಧ ವಿದೇಶಗಳಲ್ಲಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಆದ್ದರಿಂದ ಅವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸಬೇಕು ಎಂದು ಒತ್ತಾಯಿಸಿದರು.
ಕೇಂದ್ರದಲ್ಲಿ ತಮ್ಮದೇ ಪಕ್ಷ ಅಧಿಕಾರದಲ್ಲಿರುವುದರಿಂದ ರಾಹುಲ್ ಗಾಂಧಿ ವಿರುದ್ಧ ಕ್ರಮ ಕೈಗೊಳ್ಳುತ್ತೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಛಲವಾದಿ ನಾರಾಯಣಸ್ವಾಮಿ, ರಾಹುಲ್ ಗಾಂಧಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಪ್ರಧಾನಮಂತ್ರಿ ಹಾಗೂ ಗೃಹ ಸಚಿವರನ್ನು ಒತ್ತಾಯಿಸುವುದಾಗಿ ತಿಳಿಸಿದರು. ತಕ್ಷಣವೇ ಕ್ರಮ ಕೈಗೊಳ್ಳುವ ಬದಲು ದೇಶದ ಜನರಿಗೆ ಅವರ ಬಗ್ಗೆ ತಿಳಿಯಬೇಕು. ಜನರಿಗೆ ಅರ್ಥವಾದ ಬಳಿಕ ಅವರೇ ಅವರನ್ನು ಹೊರಹಾಕುತ್ತಾರೆ ಎಂದರು.
ಭಾರತದ ಮುಖ್ಯ ಚುನಾವಣಾ ಆಯುಕ್ತರ ನೇಮಕ ಪ್ರಕ್ರಿಯೆಯನ್ನು ವಿರೋಧ ಪಕ್ಷದವರು ಹೇಳಿದಂತೆ ನಡೆಸಲು ಸಾಧ್ಯವಿಲ್ಲ. ಪ್ರಸ್ತುತ ಅನುಸರಿಸಿರುವ ನೇಮಕ ಪ್ರಕ್ರಿಯೆ ಸರಿಯಾಗಿಯೇ ಇದೆ ಎಂದು ಛಲವಾದಿ ನಾರಾಯಣಸ್ವಾಮಿ ಸಮರ್ಥಿಸಿಕೊಂಡರು.
ಮುಖ್ಯ ಚುನಾವಣಾ ಆಯುಕ್ತರನ್ನು ಪ್ರಧಾನಮಂತ್ರಿ, ಗೃಹ ಸಚಿವರು ಹಾಗೂ ವಿರೋಧ ಪಕ್ಷದ ನಾಯಕರು ಸೇರಿ ಆಯ್ಕೆ ಮಾಡುತ್ತಾರೆ. ವಿರೋಧ ಪಕ್ಷದವರು ಸೂಚಿಸಿದವರನ್ನೇ ನೇಮಕ ಮಾಡಲು ಸಾಧ್ಯವಿಲ್ಲ. ಹೀಗಾಗಿ ಪ್ರಧಾನಿ ಮತ್ತು ಗೃಹ ಸಚಿವರು ಸೂಚಿಸಿದವರನ್ನು ನೇಮಕ ಮಾಡುವುದು ಸರಿಯಾಗಿಯೇ ಇದೆ ಎಂದರು.
ಮುಖ್ಯ ಚುನಾವಣಾ ಆಯುಕ್ತರ ನೇಮಕಾತಿ ಆಯ್ಕೆ ಸಮಿತಿಯಿಂದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳನ್ನು ಕೈಬಿಟ್ಟಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಹಿಂದಿನಿಂದಲೂ ಮುಖ್ಯ ನ್ಯಾಯಮೂರ್ತಿಗಳನ್ನು ಸಮಿತಿಯಲ್ಲಿ ಸೇರಿಸಿಕೊಂಡಿರಲಿಲ್ಲ. ಈಗಲೂ ಸೇರಿಸಿಕೊಂಡಿಲ್ಲ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷವನ್ನು ನಿರ್ನಾಮ ಮಾಡಬೇಕು :
ಆಂಧ್ರಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ನಿರ್ನಾಮ ಮಾಡಿದಂತೆ ಕರ್ನಾಟಕದಲ್ಲೂ ಕಾಂಗ್ರೆಸ್ ಪಕ್ಷವನ್ನು ನಿರ್ನಾಮ ಮಾಡಬೇಕು. ಇಲ್ಲದಿದ್ದರೆ ಗಂಡಾಂತರ ತಪ್ಪಿದ್ದಲ್ಲ. ಅರ್ಬನ್ ನಕ್ಸಲರು, ದೇಶವಿರೋಧಿ ಸಂಘಟನೆಗಳು ಹಾಗೂ ಕಮ್ಯುನಿಸ್ಟರು ಸೇರಿದಂತೆ ಎಲ್ಲರೂ ಕಾಂಗ್ರೆಸ್‌ನೊಳಗೆ ಸೇರಿಕೊಂಡಿದ್ದಾರೆ. ಹಾಗಾಗಿ ಕಾಂಗ್ರೆಸ್ ದೇಶವಿರೋಧಿ ಪಕ್ಷವಾಗಿದೆ ಎಂದು ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು.