ಮೈಸೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ 'ದಸರಾ ನಾಡಕುಸ್ತಿ' ಪಂದ್ಯಾವಳಿಯ ಸಾಂಪ್ರದಾಯಿಕ ಜೋಡಿ ಕಟ್ಟುವ ಕಾರ್ಯಕ್ರಮಕ್ಕೆ ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಚಾಲನೆ ನೀಡಿದರು.

ನಗರದ ಡಿ. ದೇವರಾಜ ಅರಸ್ ವಿವಿಧೋದ್ದೇಶ ಕ್ರೀಡಾಂಗಣದಲ್ಲಿ ನೆರವೇರಿದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಚಾಲನೆ ನೀಡಿ, ಮಾತನಾಡಿದ ಸಚಿವರು, ಮೈಸೂರಿನ ಸಾಂಸ್ಕೃತಿಕ ಹಿರಿಮೆಯ ದಸರಾ ಮಹೋತ್ಸವದಷ್ಟೇ ನಮ್ಮ ಮಣ್ಣಿನ ಕ್ರೀಡೆಯಾದ ಕುಸ್ತಿಗೂ ಸುದೀರ್ಘವಾದ ಇತಿಹಾಸವಿದೆ. ಸ್ಥಳೀಯ ಹಾಗೂ ರಾಜ್ಯದ ಕ್ರೀಡಾಪಟುಗಳಿಗೆ ಸೂಕ್ತ ವೇದಿಕೆ ಮತ್ತು ಪ್ರೋತ್ಸಾಹ ನೀಡುವುದೇ ಈ ಕ್ರೀಡಾಕೂಟದ ಮುಖ್ಯ ಉದ್ದೇಶವಾಗಿದೆ ಎಂದರು.

ಇಂತಹ ಕ್ರೀಡೆಗಳಲ್ಲಿ ಸೋಲು ಗೆಲುವಿಗಿಂತ ಭಾಗವಹಿಸುವಿಕೆ ಮತ್ತು ಕ್ರೀಡಾಸ್ಪೂರ್ತಿ ಅತ್ಯಂತ ಮುಖ್ಯ ಎಂದು ತಿಳಿಸಿ, ಕುಸ್ತಿ ಪಂದ್ಯಾವಳಿಯಲ್ಲಿ ಭಾಗವಹಿಸುತ್ತಿರುವ ಎಲ್ಲಾ ಪೈಲ್ವಾನರಿಗೂ ಹಾಗೂ ಕ್ರೀಡಾಪಟುಗಳಿಗೂ ಶುಭ ಹಾರೈಸಿ ಅಭಿನಂದನೆ ಸಲ್ಲಿಸಿದರು.

ಇದೇ ವೇಳೆ 2026ರ ದಸರಾ ಕುಸ್ತಿ ಪಂದ್ಯಾವಳಿಯ ಅಧಿಕೃತ ಪೋಸ್ಟರ್ ಅನ್ನು ಬಿಡುಗಡೆ ಮಾಡಲಾಯಿತು.

ಈ ಸಂದರ್ಭದಲ್ಲಿ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ.ಎಸ್. ಶ್ರೀವತ್ಸ, ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಮಲ್ಲಿಕಾರ್ಜುನ ಬಾಲದಂಡಿ, ಅಪರ ಪೊಲೀಸ್ ವರಿಷ್ಠಾಧಿಕಾರಿಗಳಾದ  ನಾಗೇಶ್. ಎಲ್, ದಸರಾ ಕುಸ್ತಿ ಸಮಿತಿಯ ಕಾರ್ಯಾಧ್ಯಕ್ಷರಾದ ಧರ್ಮೇಂದ್ರ, ಕಾರ್ಯದರ್ಶಿಗಳಾದ ನರಸಿಂಹ ಮೂರ್ತಿ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು, ಗಣ್ಯರು ಹಾಗೂ ನೂರಾರು ಕುಸ್ತಿಪಟುಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor