×
Ad

ಸಿದ್ದರಾಮಯ್ಯರನ್ನು ಕೆಳಗಿಳಿಸಲು ಯಾವ ಕಾರಣವೂ ಇಲ್ಲ, ಅವರೇ ಐದು ವರ್ಷ ಸಿಎಂ : ಯತೀಂದ್ರ

Update: 2025-11-27 17:50 IST

ಮೈಸೂರು : ಸಿದ್ದರಾಮಯ್ಯ ಅವರೇ ಐದು ವರ್ಷವೂ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.

ನಗರದಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಅವರ ಮೇಲೆ ಯಾವ ಕಾರಣವೂ ಇಲ್ಲ. ಹಾಗಾಗಿ ಅಧಿಕಾರದಿಂದ ಕೆಳಗಿಳಿಸುವ ಪ್ರಶ್ನೆಯೇ ಬರುವುದಿಲ್ಲ. ಆದರೆ ಹೈಕಮಾಂಡ್ ನಿರ್ಧಾರಕ್ಕೆ ಎಲ್ಲರೂ ಬದ್ಧ ಎಂದು ಹೇಳಿದರು.

ಮುಖ್ಯಮಂತ್ರಿ ಬದಲಾವಣೆ ಮಾಡುತ್ತೇವೆ ಎಂದು ಹೈಕಮಾಂಡ್ ಒಮ್ಮೆಯೂ ಹೇಳಿಲ್ಲ, ಆದರೂ ಹೈಕಮಾಂಡ್ ತೀರ್ಮಾನವೇ ಅಂತಿಮ, ಉಳಿದ ಎರಡೂವರೆ ವರ್ಷವೂ ನಮ್ಮ ತಂದೆಯವರೇ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂಬ ವಿಶ್ವಾಸ ನನಗಿದೆ ಎಂದರು.

ನನಗಿರುವ ಮಾಹಿತಿ ಪ್ರಕಾರ ಅಧಿಕಾರ ಹಂಚಿಕೆ ಸೂತ್ರವೇ ನಡೆದಿಲ್ಲ. ಆದರೂ ಕೆಲವರು ಸಿಎಂ ಬದಲಾಯಿಸಬೇಕು ಎಂದು ಹೇಳುತ್ತಿದ್ದಾರೆ.‌ ಈ ಬಗ್ಗೆ ಹೈಕಮಾಂಡ್ ತೀರ್ಮಾನ ತೆಗದುಕೊಳ್ಳುತ್ತದೆ. ಹೈಕಮಾಂಡ್ ಹೇಳಿದಂತೆ ಸಿದ್ದರಾಮಯ್ಯ ಅವರು ಕೇಳುತ್ತಾರೆ, ಡಿ.ಕೆ.ಶಿವಕುಮಾರ್ ಅವರು ಕೇಳುತ್ತಾರೆ ಎಂದು ಹೇಳಿದರು.

ಯಾರಿಗೆ ಎಷ್ಟು ಶಾಸಕರ ಬೆಂಬಲವಿದೆ ಎಂದು ಮಾಧ್ಯಮದ ಮುಂದೆ, ಬೀದಿಯಲ್ಲಿ ನಿಂತು ಹೇಳುವುದಲ್ಲ, ಅದು ನಮ್ಮ ಪಕ್ಷದ ಆಂತರಿಕ ವಿಚಾರ, ಎಲ್ಲಾ ಶಾಸಕರ ಬೆಂಬಲ ಸಿದ್ದರಾಮಯ್ಯ ಅವರಿಗಿದೆ ಎಂದು ಹೇಳಿದರು.

ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಎಂದು ಆದಿಚುಂಚನಗಿರಿ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮಿ ಹೇಳಿರುವ ಪ್ರಶ್ನೆಗ ಉತ್ತರಿಸಿದ ಡಾ.ಯತೀಂದ್ರ ಸಿದ್ದರಾಮಯ್ಯ, ಯಾರನ್ನು ಸಿಎಂ‌ ಮಾಡಬೇಕು, ಮಾಡಬಾರದು ಎಂಬುದು ನಮ್ಮ ಪಕ್ಷದ ಆಂತರಿಕ ವಿಚಾರ, ಅದು ನಮ್ಮ ಶಾಸಕರು ಮತ್ತು ಹೈ ಕಮಾಂಡ್ ಗೆ ಬಿಟ್ಟಿದ್ದು, ಬೇರೆಯವರ ಅಭಿಪ್ರಾಯ ಅನಗತ್ಯ ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News