Photo Credit : NDTV

ಕೋಲ್ಕತ್ತಾ: ದುರ್ಗಾ ಪೂಜೆಯ ಸಂಭ್ರಮದ ನಡುವೆಯೇ ಉತ್ತರ ಕೋಲ್ಕತ್ತಾದ ಚೋರ್‌ ಬಗಾನ್ ಪ್ರದೇಶದ ಶಾರದಾ ಪಾರ್ಕ್ ಪೂಜಾ ಪೆಂಡಾಲ್‌ ನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 13 ಮಹಿಳೆಯರು ಮತ್ತು ಒಂದು ಮಗು ಸೇರಿದಂತೆ 18 ಮಂದಿ ಮೃತಪಟ್ಟಿದ್ದಾರೆ. ಶನಿವಾರ ಸಂಜೆ ಸಂಭವಿಸಿದ ದುರಂತದಲ್ಲಿ 25 ಜನರು ಗಾಯಗೊಂಡಿದ್ದು, ಎಂಟು ಮಂದಿಯ ಸ್ಥಿತಿ ಗಂಭೀರವಾಗಿದೆ.

ಶನಿವಾರ ಸಂಜೆ 7.40ರ ಸುಮಾರಿಗೆ ಗಿರೀಶ್ ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯ ಪೆಂಡಾಲ್‌ ನ ನಿರ್ಗಮನ ದ್ವಾರದ ಬಳಿ ನೂಕುನುಗ್ಗಲು ಸಂಭವಿಸಿದೆ. ಮಳೆಯ ನಡುವೆಯೂ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪೆಂಡಾಲ್‌ ಗೆ ಭೇಟಿ ನೀಡಿದ್ದರಿಂದ ಈ ದುರಂತ ಸಂಭವಿಸಿದೆ ಎಂದು ಕೋಲ್ಕತ್ತಾ ಪೊಲೀಸರು ತಿಳಿಸಿದ್ದಾರೆ.

ಗಾಯಾಳುಗಳನ್ನು ರಕ್ಷಿಸಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು, ಅಗ್ನಿಶಾಮಕ ದಳ, ವಿಪತ್ತು ನಿರ್ವಹಣಾ ತಂಡ ಹಾಗೂ ವೈದ್ಯಕೀಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಘಟನೆಯ ಬಳಿಕ ಪೆಂಡಾಲ್‌ ಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

►ಕಿರಿದಾದ ದ್ವಾರಗಳೇ ಕಾರಣ? :

ಪೆಂಡಾಲ್‌ ನ ಪ್ರವೇಶ ಮತ್ತು ನಿರ್ಗಮನ ದ್ವಾರಗಳು ಕಿರಿದಾಗಿದ್ದವು. ಅಲ್ಲದೆ, ಸೂಕ್ತ ಬೆಳಕಿನ ವ್ಯವಸ್ಥೆಯೂ ಇರಲಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ಆರೋಪಿಸಿದ್ದಾರೆ.

‘ಪ್ರವೇಶ ದ್ವಾರ ತುಂಬಾ ಕಿರಿದಾಗಿತ್ತು. ನಿರ್ಗಮನ ದ್ವಾರವೂ ಕಿರಿದಾಗಿತ್ತು. ಆ ಪ್ರದೇಶದಲ್ಲಿ ಬೆಳಕಿನ ವ್ಯವಸ್ಥೆಯೂ ಇರಲಿಲ್ಲ. ನನ್ನ ಮಗಳು ಮತ್ತು ಮೊಮ್ಮಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.

ನೂಕುನುಗ್ಗಲು ಆರಂಭವಾದ ಬಳಿಕ ಆಯೋಜಕರು ಪೆಂಡಾಲ್‌ ಗೆ ಪ್ರವೇಶವನ್ನು ತಡೆದು ದೀಪಗಳನ್ನು ಆರಿಸಿದ್ದರು ಎಂದು ವರದಿಯಾಗಿದೆ.

ಘಟನೆಗೆ ನಿಖರವಾದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಸದ್ಯ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವುದು ಮತ್ತು ರಕ್ಷಣಾ ಕಾರ್ಯಾಚರಣೆಗೆ ಆದ್ಯತೆ ನೀಡಲಾಗಿದೆ ಎಂದು ಪೂಜಾ ಆಯೋಜಕರಲ್ಲೊಬ್ಬರಾದ ಬಿಕಾಶ್ ದಾಸ್ ಹೇಳಿದ್ದಾರೆ.

►ಸಿಸಿಟಿವಿ ದೃಶ್ಯಾವಳಿ ಪರಿಶೀಲನೆ :

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಮತ್ತು ಮುಖ್ಯ ಕಾರ್ಯದರ್ಶಿ ಮನೋಜ್ ಅಗರ್ವಾಲ್ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು.

‘ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಜನಸಂದಣಿಯನ್ನು ಸರಿಯಾಗಿ ನಿಯಂತ್ರಿಸಲಾಗಿತ್ತೇ ಎಂಬುದನ್ನು ಖಚಿತಪಡಿಸಿಕೊಳ್ಳುತ್ತೇವೆ. ಆಯೋಜಕ ಸಮಿತಿ, ಪೊಲೀಸರು, ಖಾಸಗಿ ಭದ್ರತಾ ಸಿಬ್ಬಂದಿ ಅಥವಾ ಇತರರು ಹೊಣೆಗಾರರಾಗಿದ್ದಾರೆಯೇ ಎಂಬುದನ್ನು ತನಿಖೆ ನಡೆಸಿ ನಿರ್ಧರಿಸಲಾಗುವುದು. ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ’ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಹತ್ತು ದಿನಗಳ ದುರ್ಗಾ ಪೂಜಾ ಉತ್ಸವದ ಏಳನೇ ದಿನವಾದ ಸಪ್ತಮಿಯಂದು ಈ ದುರಂತ ಸಂಭವಿಸಿದೆ.

►ಮೃತರ ಕುಟುಂಬಗಳಿಗೆ 2 ಲಕ್ಷ ರೂ. ಪರಿಹಾರ :

ಪ್ರಧಾನಿ ನರೇಂದ್ರ ಮೋದಿ ಅವರು ಘಟನೆಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಮಧ್ಯಂತರ ಪರಿಹಾರ ಘೋಷಿಸಿದ್ದಾರೆ. ಗಾಯಗೊಂಡವರಿಗೆ ತಲಾ 50,000 ರೂ. ನೆರವು ನೀಡಲಾಗುವುದು ಎಂದು ತಿಳಿಸಿದ್ದಾರೆ.

‘ಕೋಲ್ಕತ್ತಾದಲ್ಲಿ ಸಂಭವಿಸಿದ ಕಾಲ್ತುಳಿತದ ಘಟನೆ ಅತ್ಯಂತ ದುಃಖಕರವಾಗಿದೆ. ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳೊಂದಿಗೆ ನನ್ನ ಸಂವೇದನೆಗಳಿವೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ. ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವು ಒದಗಿಸುತ್ತಿದೆ’ ಎಂದು ಅವರು ಎಕ್ಸ್‌ನಲ್ಲಿ ತಿಳಿಸಿದ್ದಾರೆ.

►ಅಮಿತ್ ಶಾ ಕಾರ್ಯಕ್ರಮ ಮುಂದೂಡಿಕೆ :

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕಾಲ್ತುಳಿತದ ಹಿನ್ನೆಲೆಯಲ್ಲಿ ರವಿವಾರ ನಿಗದಿಯಾಗಿದ್ದ ಪಶ್ಚಿಮ ಬಂಗಾಳದ ತಮ್ಮ ಎಲ್ಲ ಕಾರ್ಯಕ್ರಮಗಳನ್ನು ಮುಂದೂಡಿದ್ದಾರೆ.

ಘಟನೆ ಕುರಿತು ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರೊಂದಿಗೆ ಮಾತನಾಡಿರುವುದಾಗಿ ತಿಳಿಸಿದ ಅವರು, ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳಿಗೆ ಉತ್ತಮ ವೈದ್ಯಕೀಯ ಚಿಕಿತ್ಸೆ ಒದಗಿಸುವಂತೆ ಆಡಳಿತ ವ್ಯವಸ್ಥೆ ಮಾಡುತ್ತಿದೆ ಎಂದೂ ತಿಳಿಸಿದ್ದಾರೆ.

►ಖರ್ಗೆ, ಮಮತಾ ಸಂತಾಪ :

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ದುರಂತಕ್ಕೆ ಸಂತಾಪ ಸೂಚಿಸಿ, ತಕ್ಷಣದ ರಕ್ಷಣಾ ಕಾರ್ಯಾಚರಣೆ, ವೈದ್ಯಕೀಯ ನೆರವು ಹಾಗೂ ಮೃತರು ಮತ್ತು ಗಾಯಾಳುಗಳ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಇಂತಹ ಘಟನೆಗಳು ಮರುಕಳಿಸದಂತೆ ಸಮಗ್ರ ತನಿಖೆ ನಡೆಸಬೇಕು ಎಂದೂ ಆಗ್ರಹಿಸಿದ್ದಾರೆ.

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೂಡ ಘಟನೆಗೆ ಆಘಾತ ವ್ಯಕ್ತಪಡಿಸಿದ್ದಾರೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಮತ್ತು ಸಂತ್ರಸ್ತ ಕುಟುಂಬಗಳಿಗೆ ಈ ಕಠಿಣ ಸಮಯವನ್ನು ಎದುರಿಸುವ ಶಕ್ತಿ ಸಿಗಲಿ ಎಂದು ಅವರು ಎಕ್ಸ್‌ನಲ್ಲಿ ಹಾರೈಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor