ಆಂಧ್ರಪ್ರದೇಶ | ಶ್ರೀಕಾಕುಳಂ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಕಾಲ್ತುಳಿತ : ಕನಿಷ್ಠ 9 ಮಂದಿ ಮೃತ್ಯು
Photo credit: NDTV
ಶ್ರೀಕಾಕುಳಂ : ಆಂಧ್ರಪ್ರದೇಶದ ಶ್ರೀಕಾಕುಳಂನಲ್ಲಿರುವ ಕಾಶಿಬುಗ್ಗ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಕಾಲ್ತುಳಿತ ಸಂಭವಿಸಿ ಕನಿಷ್ಠ 9 ಮಂದಿ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.
ಆಂಧ್ರ ಸಿಎಂ ಕಚೇರಿ (CMO) ನೀಡಿದ ಹೇಳಿಕೆಯ ಪ್ರಕಾರ, ಏಕಾದಶಿ ಆಚರಣೆಗಾಗಿ ದೇವಾಲಯದಲ್ಲಿ ದೊಡ್ಡ ಜನಸಮೂಹ ಜಮಾಯಿಸಿದಾಗ ಕಾಲ್ತುಳಿತ ಸಂಭವಿಸಿದೆ. ಹಲವು ಭಕ್ತರು ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ.
ಈ ಕುರಿತು ತುರ್ತಾಗಿ ಪ್ರತಿಕ್ರಿಯಿಸಿರುವ ಆಂಧ್ರ ಸಿಎಂ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, "ಶ್ರೀಕಾಕುಳಂ ಜಿಲ್ಲೆಯ ಕಾಶಿಬುಗ್ಗಾದ ವೆಂಕಟೇಶ್ವರ ದೇವಾಲಯದಲ್ಲಿ ನಡೆದ ಕಾಲ್ತುಳಿತ ಘಟನೆ ಆಘಾತವನ್ನುಂಟುಮಾಡಿದೆ. ಈ ದುರಂತ ಘಟನೆಯಲ್ಲಿ ಭಕ್ತರ ಪ್ರಾಣಹಾನಿಯಾಗಿರುವುದು ಆಘಾತಕಾರಿಯಾಗಿದೆ. ಮೃತರ ಕುಟುಂಬಗಳಿಗೆ ನನ್ನ ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಗಾಯಗೊಂಡವರಿಗೆ ತ್ವರಿತ ಮತ್ತು ಸರಿಯಾದ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಘಟನೆಯ ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ಕ್ರಮಗಳನ್ನು ಮೇಲ್ವಿಚಾರಣೆ ಮಾಡುವಂತೆ ಸ್ಥಳೀಯ ಅಧಿಕಾರಿಗಳಿಗೆ ಸೂಚಿಸಿದ್ದೇನೆ" ಎಂದು ಹೇಳಿದ್ದಾರೆ.