Pune| ರಾಹುಲ್ ಗಾಂಧಿ ಕಾರ್ಯಕ್ರಮಕ್ಕೆ ಮುನ್ನ ಎಬಿವಿಪಿ-ಎನ್‌ಎಸ್‌ಯುಐ ಘರ್ಷಣೆ; ಕ್ಯಾಂಪಸ್‌ನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

Update: 2026-08-22 09:11 IST

Photo: screengrab/x.com/IYC

ಮುಂಬೈ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಉದ್ದೇಶಿತ ಛಾತ್ರೋಂ ಕಿ ಗೂಂಜ್ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಎಬಿವಿಪಿ ಮತ್ತು ಎನ್‌ಎಸ್‌ಯುಐ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿರುವ ಘಟನೆ ಸಿಒಇಪಿ ತಾಂತ್ರಿಕ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಕಾರ್ಯಕ್ರಮ ಇಂದು, ಶನಿವಾರ (ಆ.22)ರಂದು ನಿಗದಿಯಾಗಿತ್ತು.

ಕಾರ್ಯಕ್ರಮದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳ ನೋಂದಣಿ ಪ್ರಕ್ರಿಯೆಗೆ ಸಂಬಂಧಿಸಿ ಎರಡೂ ಬಣಗಳ ನಡುವೆ ವಾಗ್ವಾದವುಂಟಾಗಿ ಘರ್ಷಣೆಗೆ ತಿರುಗಿತು ಎಂದು ತಿಳಿದುಬಂದಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಎಬಿವಿಪಿ ರಾಜ್ಯ ಕಾರ್ಯದರ್ಶಿ ಅಥರ್ವ ಕುಲಕರ್ಣಿ, ರಾಹುಲ್ ಗಾಂಧಿಯವರ ಕಾರ್ಯಕ್ರಮಕ್ಕೆ ಜನರನ್ನು ಸೇರಿಸಲು ಸಾಧ್ಯವಾಗದೆ, ಕಾರ್ಯಕ್ರಮಕ್ಕೆ ಹಾಜರಾಗುವಂತೆ ವಿವಿ ವಿದ್ಯಾರ್ಥಿಗಳ ಮೇಲೆ ಎನ್‌ಎಸ್‌ಯುಐ ಕಾರ್ಯಕರ್ತರು ಒತ್ತಡ ಹೇರುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಸುಮಾರು 150ಕ್ಕೂ ಹೆಚ್ಚು ಎನ್‌ಎಸ್‌ಯುಐ ಕಾರ್ಯಕರ್ತರು ಕ್ಯಾಂಪಸ್‌ಗೆ ನುಗ್ಗಿ ವಿದ್ಯಾರ್ಥಿನಿಯರನ್ನು ಚೇಡಿಸಿದ್ದಾರೆ ಮತ್ತು ಮಧ್ಯಪ್ರವೇಶಿಸಲು ಯತ್ನಿಸಿದ ವಿದ್ಯಾರ್ಥಿಗಳ ಮೇಲೆಯೂ ದಾಳಿ ನಡೆಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ರಾಜ್ಯ ಸರ್ಕಾರದಿಂದ ತಮಗೆ ಸಿಗಬೇಕಾದ ಶಿಷ್ಯವೇತನದ ಹಣ ಸಿಗದಿರುವ ವಿಷಯವನ್ನು ರಾಹುಲ್ ಗಾಂಧಿಯವರ ಗಮನಕ್ಕೆ ತರಲು ಕೆಲವು ವಿದ್ಯಾರ್ಥಿಗಳು ಕಾರ್ಯಕ್ರಮಕ್ಕೆ ಹೋಗಲು ನಿರ್ಧರಿಸಿದ್ದರು ಎಂದು ಎನ್‌ಎಸ್‌ಯುಐ ತಿಳಿಸಿದೆ. ಆದರೆ ಎಬಿವಿಪಿ ಇದನ್ನು ತಡೆಯಲು ಯತ್ನಿಸಿದ್ದರಿಂದ ನಾವು ಪ್ರತಿಭಟನೆ ನಡೆಸಿದೆವು ಹೊರತು, ಯಾವುದೇ ವಿದ್ಯಾರ್ಥಿನಿಯರಿಗೆ ತೊಂದರೆ ನೀಡಿಲ್ಲ ಎಂದು ಎನ್‌ಎಸ್‌ಯುಐ ಸ್ಪಷ್ಟಪಡಿಸಿದೆ.

"ಎಬಿವಿಪಿ ಕಾರ್ಯಕರ್ತರಿಗೆ ಈ ವಿಷಯ ತಿಳಿಯುತ್ತಿದ್ದಂತೆ, ಅವರು ವಿಶ್ವವಿದ್ಯಾಲಯಕ್ಕೆ ತೆರಳಿ ರಾಹುಲ್ ಗಾಂಧಿಯವರ ಕಾರ್ಯಕ್ರಮಕ್ಕೆ ಹಾಜರಾಗದಂತೆ ವಿದ್ಯಾರ್ಥಿಗಳಲ್ಲಿ ಮನವಿ ಮಾಡಿದರು. ವಿದ್ಯಾರ್ಥಿಗಳು ಆ ಕಾರ್ಯಕ್ರಮಕ್ಕೆ ಹೋಗುವುದನ್ನು ತಡೆಯಲು ಯತ್ನಿಸಿದ ಎಬಿವಿಪಿ ವಿರುದ್ಧ ನಾವೂ ಸಹ ಅಲ್ಲಿಗೆ ತೆರಳಿ ಪ್ರತಿಭಟನೆ ನಡೆಸಿದೆವು," ಎಂದು ನಗರ ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ಅಕ್ಷಯ್ ಜೈನ್ ಹೇಳಿದರು.

ಎರಡೂ ಗುಂಪುಗಳು ಪರಸ್ಪರ ವಿರುದ್ಧ ಘೋಷಣೆಗಳನ್ನು ಕೂಗಿದಾಗ ವಾತಾವರಣ ಕಾವೇರಿತು. ಬಳಿಕ ಮಹಾರಾಷ್ಟ್ರ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ನಾಯಕ ವಿಜಯ್ ವಾಡೆಟ್ಟಿವಾರ್ ಸ್ಥಳಕ್ಕೆ ಆಗಮಿಸಿ ಎನ್‌ಎಸ್‌ಯುಐ ಕಾರ್ಯಕರ್ತರನ್ನು ಶಾಂತಗೊಳಿಸಿದರು.

ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಪುಣೆ ಪೊಲೀಸರು ಕ್ಯಾಂಪಸ್‌ನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News