Uttar Pradesh | 50 ವರ್ಷದ ದಲಿತ ವ್ಯಕ್ತಿಯನ್ನು ಥಳಿಸಿ ಹತ್ಯೆ
ಸಾಂದರ್ಭಿಕ ಚಿತ್ರ (AI Generated)
ಪ್ರತಾಪ್ ಗಢ: ಮಹಿಳೆಯೊಬ್ಬರೊಂದಿಗೆ ಅನೈತಿಕ ಸಂಬಂಧದ ಸಂಶಯದಿಂದ 50 ವರ್ಷದ ದಲಿತ ವ್ಯಕ್ತಿಯೊಬ್ಬರನ್ನು ಥಳಿಸಿ ಹತ್ಯೆಗೈದಿರುವ ಘಟನೆ ಪ್ರತಾಪ್ ಗಢ ಜಿಲ್ಲೆಯ ಅಸ್ಪುರ್ ಡಿಯೊಸಾರಾ ಪೊಲೀಸ್ ಠಾಣೆ ವ್ಯಾಪ್ತಿಯ ಪರ್ದಾಹ ಸುಮೇರ್ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಜಿಲಾಜಿತ್ ಅಲಿಯಾಸ್ ಜಿಲ್ಲು ಎಂದು ಗುರುತಿಸಲಾಗಿದೆ.
ಮೃತ ಜಿಲಾಜಿತ್ ರ ಪತ್ನಿ ನಿಧನರಾಗಿದ್ದು, ಅವರು ಸ್ಥಳೀಯ ನಿವಾಸಿಯೊಬ್ಬರ ಟ್ರ್ಯಾಕ್ಟರ್ ಚಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದರು. ಸೋಮವಾರ ರಾತ್ರಿ ಮನೆಯಿಂದ ತೆರಳಿದ್ದ ಜಿಲಾಜಿತ್, ಮರುದಿನ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಅವರ ದೇಹದ ಮೇಲೆ ಗಾಯದ ಗುರುತುಗಳು ಕಂಡು ಬಂದಿದ್ದು, ಅವರನ್ನು ದೊಣ್ಣೆಗಳಿಂದ ಥಳಿಸಿ, ಹತ್ಯೆಗೈದಿರಬಹುದು ಎಂದು ಶಂಕಿಸಲಾಗಿದೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಕುಮಾರ್ ತಿಳಿಸಿದ್ದಾರೆ.
ಈ ಘಟನೆ ಸಂಬಂಧ ಇಬ್ಬರು ಶಂಕಿತ ಆರೋಪಿಗಳನ್ನು ವಿಚಾರಣೆಗಾಗಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಮತ್ತಷ್ಟು ತನಿಖೆ ಮುಂದುವರಿದಿದೆ ಎಂದು ಹೇಳಿದ್ದಾರೆ.
ಮೃತ ಜಿಲಾಜಿತ್ ಗೆ ಗ್ರಾಮದಲ್ಲಿನ ಮಹಿಳೆಯೊಬ್ಬರೊಂದಿಗೆ ಅನೈತಿಕ ಸಂಬಂಧವಿತ್ತು ಎಂದು ಗ್ರಾಮಸ್ಥರು ಆರೋಪಿಸಿದ್ದು, ಇದೇ ಕಾರಣದಿಂದ ಹತ್ಯೆ ನಡೆದಿರಬಹುದು ಎಂದು ಶಂಕಿಸಲಾಗಿದೆ.