ಮಧ್ಯಪ್ರದೇಶ | ಭಾವಿ ಪತಿಗೆ ಥಳಿಸಿ ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ : ಮೂವರು ಆರೋಪಿಗಳ ಬಂಧನ
ಸಾಂದರ್ಭಿಕ ಚಿತ್ರ
ಭೋಪಾಲ್ : ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ತನ್ನ ನಿಶ್ಚಿತ ವರನೊಂದಿಗೆ ವಿಹಾರಕ್ಕೆ ತೆರಳಿದ್ದ ದಲಿತ ಯುವತಿಯ ಮೇಲೆ ನಾಲ್ವರು ದುಷ್ಕರ್ಮಿಗಳು ಅತ್ಯಾಚಾರ ಎಸಗಿ ಆಕೆಯ ಭಾವಿ ಪತಿಗೆ ಥಳಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೋರ್ವರು ತಿಳಿಸಿದ್ದಾರೆ.
ʼಚುರ್ಹತ್ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಯಾಗಿರುವ ಸಂತ್ರಸ್ತೆ ಮಂಗಳವಾರ ತನ್ನ ಭಾವಿ ಪತಿಯೊಂದಿಗೆ ಕಥೌಥಾ ಬಳಿಯ ಬೆಟ್ಟಕ್ಕೆ ವಿಹಾರಕ್ಕೆಂದು ಹೋಗಿದ್ದರು. ಈ ವೇಳೆ ನಾಲ್ವರು ದುಷ್ಕರ್ಮಿಗಳು ಯುವತಿಯ ನಿಶ್ಚಿತ ವರನನ್ನು ಥಳಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ದುಷ್ಕರ್ಮಿಗಳಿಂದ ತಪ್ಪಿಸಿಕೊಂಡು ಬಂದ ಯುವತಿ ಈ ಬಗ್ಗೆ ಸೆಮಾರಿಯಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆʼಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅರವಿಂದ್ ಶ್ರೀವಾಸ್ತವ ತಿಳಿಸಿದ್ದಾರೆ.
ಸಾಮೂಹಿಕ ಅತ್ಯಾಚಾರ ಘಟನೆಯ ಬಗ್ಗೆ ವಿರೋಧ ಪಕ್ಷ ಕಾಂಗ್ರೆಸ್ ಆಡಳಿತರೂಡ ಬಿಜೆಪಿ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಈ ಅಪರಾಧ ಮಧ್ಯಪ್ರದೇಶದ ಕಾನೂನು ಮತ್ತು ಸುವ್ಯವಸ್ಥೆಯ ಶೋಚನೀಯ ಸ್ಥಿತಿಯನ್ನು ಬಹಿರಂಗಪಡಿಸಿದೆ ಎಂದು ಹೇಳಿದೆ.
ಈ ಕುರಿತು ಪ್ರತಿಕ್ರಿಯಿಸಿದ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಜಿತು ಪಟ್ವಾರಿ, ಈ ನಾಚಿಕೆಗೇಡಿನ ಘಟನೆ ಇಡೀ ಮಾನವೀಯತೆಯನ್ನು ಕಳಂಕಿತಗೊಳಿಸುತ್ತದೆ ಮತ್ತು ಮಧ್ಯಪ್ರದೇಶದ ಕಾನೂನು ಮತ್ತು ಸುವ್ಯವಸ್ಥೆಯ ಶೋಚನೀಯ ಸ್ಥಿತಿಯನ್ನು ಬಹಿರಂಗಪಡಿಸಿದೆ. ಕಳೆದ ಮೂರು ವರ್ಷಗಳಲ್ಲಿ ಮಧ್ಯಪ್ರದೇಶದಲ್ಲಿ 7,418 ದಲಿತ ಮತ್ತು ಬುಡಕಟ್ಟು ಮಹಿಳೆಯರ ಮೇಲಿನ ಅತ್ಯಾಚಾರ ಘಟನೆಗಳು, 338 ಸಾಮೂಹಿಕ ಅತ್ಯಾಚಾರಗಳು ಮತ್ತು 558 ಕೊಲೆಗಳು ದಾಖಲಾಗಿವೆ. ಪ್ರತಿದಿನ ಸರಾಸರಿ 7 ದಲಿತ ಅಥವಾ ಬುಡಕಟ್ಟು ಹೆಣ್ಣುಮಕ್ಕಳು ಈ ಕ್ರೌರ್ಯಕ್ಕೆ ಬಲಿಯಾಗುತ್ತಿದ್ದಾರೆ. ಈ ಅಂಕಿಅಂಶಗಳು ಬಿಜೆಪಿ ಸರಕಾರದ ವೈಫಲ್ಯವನ್ನು ಸಾಬೀತುಪಡಿಸುತ್ತದೆ ಎಂದು ಹೇಳಿದರು.