ಹೊಸದಿಲ್ಲಿ, ನ.25: ಸಹೋದ್ಯೋಗಿಗಳೊಂದಿಗೆ ತಡರಾತ್ರಿ ಪಾರ್ಟಿಯಲ್ಲಿ ಭಾಗವಹಿಸಿದ್ದ 22 ವರ್ಷದ ಮಹಿಳೆಯ ಮೇಲೆ ಇಬ್ಬರು ಪುರುಷರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪ ದಿಲ್ಲಿಯಲ್ಲಿ ಕೇಳಿಬಂದಿದೆ. ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಮಹಿಳೆಯರು ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಉಳಿದ ಮೂವರು ಆರೋಪಿಗಳ ಪತ್ತೆಗೆ ಶೋಧ ಕಾರ್ಯ ಮುಂದುವರಿಸಿದ್ದಾರೆ.

ಸಂತ್ರಸ್ತೆ ಮತ್ತು ಆರೋಪಿಗಳು ಕರ್ಕರ್ದೂಮಾದ ಕ್ರಾಸ್ ರಿವರ್ ಮಾಲ್‌ ನಲ್ಲಿರುವ 'ಕೆಫೆ 8'ನಲ್ಲಿ ಕೆಲಸ ಮಾಡುತ್ತಿದ್ದರು. ಸೋಮವಾರ ರಾತ್ರಿ ಸಂತ್ರಸ್ತೆ ಸೇರಿದಂತೆ ಎಂಟು ಮಂದಿ ಪ್ರೀತ್ ವಿಹಾರ್‌ನಲ್ಲಿರುವ ಕೆಫೆಯೊಂದರಲ್ಲಿ ಪಾರ್ಟಿ ಮಾಡಲು ಸೇರಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಸಾಮಾನ್ಯವಾಗಿ ರಾತ್ರಿ 11.30ಕ್ಕೆ ಮುಚ್ಚುವ ಕೆಫೆಯನ್ನು, ಉದ್ಯೋಗಿಯೊಬ್ಬರ ಬಳಿ ಕೀಲಿ ಇದ್ದ ಕಾರಣ ಪಾರ್ಟಿ ಮುಂದುವರಿಸಲು ತಡರಾತ್ರಿ ಮತ್ತೆ ತೆರೆಯಲಾಗಿತ್ತು. ಗುಂಪಿನ ಸದಸ್ಯರು ಮದ್ಯಪಾನ ಮಾಡಿದ ಬಳಿಕ ಮಂಗಳವಾರ ಬೆಳಗಿನ ಜಾವ 3.30ರ ಸುಮಾರಿಗೆ ಕೆಫೆಯಿಂದ ಹೊರಟಿದ್ದರು.

ಇದಾದ ಸ್ವಲ್ಪ ಸಮಯದ ಬಳಿಕ ಇಬ್ಬರು ಪುರುಷರು ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ. ಅವರೊಂದಿಗೆ ಇದ್ದ ಇತರರು ಕೃತ್ಯಕ್ಕೆ ಬೆಂಬಲ ನೀಡಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.

ಈ ಸಂಬಂಧ ನಾಲ್ವರು ಪುರುಷರು ಮತ್ತು ಇಬ್ಬರು ಮಹಿಳೆಯರು ಸೇರಿದಂತೆ ಒಟ್ಟು ಆರು ಮಂದಿಯ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಈ ಪೈಕಿ ಇಬ್ಬರು ಮಹಿಳೆಯರು ಸೇರಿದಂತೆ ಮೂವರನ್ನು ಬಂಧಿಸಲಾಗಿದ್ದು, ಉಳಿದ ಮೂವರಿಗಾಗಿ ಶೋಧ ಮುಂದುವರಿದಿದೆ.

ಸಂತ್ರಸ್ತೆಯ ಹೇಳಿಕೆಯನ್ನು ಸದ್ಯ ಪೊಲೀಸ್ ಠಾಣೆಯಲ್ಲಿ ದಾಖಲಿಸಿಕೊಳ್ಳಲಾಗುತ್ತಿದೆ. ಮ್ಯಾಜಿಸ್ಟ್ರೇಟ್ ಎದುರಲ್ಲೂ ಆಕೆಯ ಹೇಳಿಕೆಯನ್ನು ದಾಖಲಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ನಡೆದ ತಕ್ಷಣ ಮಹಿಳೆ ಪೊಲೀಸರನ್ನು ಸಂಪರ್ಕಿಸಿರಲಿಲ್ಲ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ. ಸಿಸಿಟಿವಿ ದೃಶ್ಯಾವಳಿಗಳಲ್ಲಿ ಆಕೆ ಓರ್ವ ಪುರುಷ ಸ್ನೇಹಿತ ಮತ್ತು ಇಬ್ಬರು ಮಹಿಳೆಯರೊಂದಿಗೆ ವಾಹನದಲ್ಲಿ ತೆರಳುತ್ತಿರುವುದು ಕಂಡುಬಂದಿದೆ ಎಂದು ವರದಿಯಾಗಿದೆ.

ನಂತರ ಮಂಗಳವಾರ ಬೆಳಗಿನ ಜಾವ 5.45ರ ಸುಮಾರಿಗೆ ಪೊಲೀಸ್ ಠಾಣೆಗೆ ತೆರಳಿದ ಮಹಿಳೆ ದೂರು ದಾಖಲಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Contributor - ಇರ್ಷಾದ್ ಎಂ. ವೇಣೂರು/ವಾರ್ತಾಭಾರತಿ

contributor

ಇರ್ಷಾದ್ ಎಂ. ವೇಣೂರು ಅವರು ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರರಾಗಿದ್ದು, ಪತ್ರಿಕೋದ್ಯಮ ಕ್ಷೇತ್ರದಲ್ಲಿ 13 ವರ್ಷಗಳ ಅನುಭವ ಹೊಂದಿದ್ದಾರೆ. ಪ್ರಸ್ತುತ ‘ವಾರ್ತಾಭಾರತಿ’ಯಲ್ಲಿ ಡಿಜಿಟಲ್ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ‘ಡೆಕ್ಕನ್ ಹೆರಾಲ್ಡ್–ಪ್ರಜಾವಾಣಿ’ ಸಮೂಹದಲ್ಲಿ ಫೋಟೊ ಜರ್ನಲಿಸ್ಟ್ ಆಗಿಯೂ ಕೆಲಸ ಮಾಡಿದ್ದಾರೆ. ಅಂತರರಾಷ್ಟ್ರೀಯ ವಿದ್ಯಮಾನಗಳು, ಮಧ್ಯಪ್ರಾಚ್ಯದ ಸಂಘರ್ಷಗಳು, ಗಲ್ಫ್ ರಾಷ್ಟ್ರಗಳ ಬೆಳವಣಿಗೆಗಳು, ರಾಜಕೀಯ, ವಾಯುಯಾನ, ಅಪರಾಧ ಮತ್ತು ಕ್ರೀಡೆ ಅವರ ಆಸಕ್ತಿಯ ಸುದ್ದಿ ಕ್ಷೇತ್ರಗಳಾಗಿವೆ.