Delhi ಪ್ರತಿಭಟನೆ: CJP ನಾಯಕ ಅಭಿಜೀತ್ ದೀಪ್ಕೆ ಬಂಧನ; AISA ಮುಖ್ಯಸ್ಥೆ ನೇಹಾ ಬೋರಾ ಬಿಡುಗಡೆ
ನೇಹಾ ಬೋರಾ | ಅಭಿಜೀತ್ ದೀಪ್ಕೆ Photo: x.com/EconomicTimes
ಹೊಸದಿಲ್ಲಿ: 'ಲೇಹ್ರಾ ದೋ ತಿರಂಗಾ' ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ಕಾಕ್ರೋಚ್ ಜನತಾ ಪಾರ್ಟಿ (CJP) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರನ್ನು ದಿಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದು, ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (AISA) ಮುಖ್ಯಸ್ಥೆ ನೇಹಾ ಬೋರಾ ಅವರನ್ನು ಬಿಡುಗಡೆ ಮಾಡಿದ್ದಾರೆ.
ಶುಕ್ರವಾರ ಸಂಜೆ ಇಬ್ಬರನ್ನೂ ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ಪಡೆಯಲಾಗಿತ್ತು. ಶಾಂತಿ ಭಂಗವಾಗುವ ಆತಂಕದ ಹಿನ್ನೆಲೆಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS)ಯ ಸೆಕ್ಷನ್ 126 ಮತ್ತು 170ರ ಅಡಿಯಲ್ಲಿ ಅಭಿಜೀತ್ ದೀಪ್ಕೆ ಅವರನ್ನು ಬಂಧಿಸಲಾಗಿದೆ. ಅವರನ್ನು ಎಸ್ಇಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ವರದಿಯಾಗಿದೆ.
ದಿಲ್ಲಿ ಪೊಲೀಸ್ ಕಾಯಿದೆಯ ಸೆಕ್ಷನ್ 65ರ ಅಡಿಯಲ್ಲಿ ಅಗತ್ಯ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ ಬಳಿಕ ನೇಹಾ ಬೋರಾ ಅವರನ್ನು ಬಿಡುಗಡೆ ಮಾಡಲಾಗಿದೆ.
ಅಭಿಜೀತ್ ದೀಪ್ಕೆ ಅವರನ್ನು ಅಪರಿಚಿತ ಸ್ಥಳಕ್ಕೆ ಕರೆದೊಯ್ಯಲಾಗಿದ್ದು, ಅವರಿರುವ ಸ್ಥಳದ ಮಾಹಿತಿ ಲಭ್ಯವಾಗಿಲ್ಲ. ವಕೀಲರಿಗೂ ಅವರನ್ನು ಭೇಟಿಯಾಗಲು ಅವಕಾಶ ನೀಡಿಲ್ಲ ಎಂದು CJPಯ ಕಾನೂನು ವಿಭಾಗದ ಮುಖ್ಯಸ್ಥೆ ರತ್ನಾ ಸಿಂಗ್ ಎಕ್ಸ್ ನಲ್ಲಿ ಆರೋಪಿಸಿದ್ದಾರೆ.
ತಮ್ಮ ನಾಯಕರನ್ನು ವಶಕ್ಕೆ ಪಡೆದ ಬಳಿಕ ವಕೀಲರು ಅಥವಾ ಸ್ನೇಹಿತರನ್ನು ಭೇಟಿಯಾಗಲು ಪೊಲೀಸರು ಅವಕಾಶ ನೀಡಿಲ್ಲ ಎಂದು CJP ಮತ್ತು AISA ಶುಕ್ರವಾರ ಕಳವಳ ವ್ಯಕ್ತಪಡಿಸಿದ್ದವು.
ನೇಹಾ ಬೋರಾ ಅವರನ್ನು ಮಂಗೋಲ್ಪುರಿಯ ಆ್ಯಂಟಿ-ನಾರ್ಕೋಟಿಕ್ಸ್ ಟಾಸ್ಕ್ ಫೋರ್ಸ್ ಕಚೇರಿಯಲ್ಲಿ ಏಕಾಂಗಿಯಾಗಿ ಇರಿಸಲಾಗಿದೆ ಎಂದೂ AISA ಆರೋಪಿಸಿತ್ತು. ಅಗತ್ಯ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ ಬಳಿಕ ಅವರನ್ನು ಬಿಡುಗಡೆ ಮಾಡಲಾಗಿದೆ.