ಉತ್ತರಾಖಂಡ | ಕಂದಕಕ್ಕೆ ಉರುಳಿ ಬಿದ್ದ ಜೀಪ್ : 8 ಮಂದಿ ಮೃತ್ಯು, ಹಲವರಿಗೆ ಗಾಯ
Photo | PTI
ಪಿಥೋರಗಢ: ಉತ್ತರಾಖಂಡದ ಪಿಥೋರಗಢ ಜಿಲ್ಲೆಯ ಥಾಲ್ ಪ್ರದೇಶದ ಸುನಿ ಗ್ರಾಮದಲ್ಲಿ ಜೀಪ್‌ವೊಂದು ಆಳವಾದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 8 ಮಂದಿ ಮೃತಪಟ್ಟಿದ್ದು, ಐವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ʼಮುವಾನಿ ಮಾರುಕಟ್ಟೆಯಿಂದ ಬೊಕ್ತಾ ಗ್ರಾಮಕ್ಕೆ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಜೀಪ್ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದಿದೆ. ಮೃತರಲ್ಲಿ ಐವರು ಮಹಿಳೆಯರು ಮತ್ತು ಮೂವರು ಪುರುಷರು ಸೇರಿದ್ದಾರೆʼ ಎಂದು ಥಾಲ್ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಅಧಿಕಾರಿ ಶಂಕರ್ ಸಿಂಗ್ ರಾವತ್ ಹೇಳಿದ್ದಾರೆ.
ಪೊಲೀಸರು, ರಾಜ್ಯ ವಿಪತ್ತು ನಿರ್ವಹಣಾ ಪಡೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ʼಪ್ರಧಾನಿ ನರೇಂದ್ರ ಮೋದಿ ಘಟನೆಯ ಬಗ್ಗೆ ದುಃಖವನ್ನು ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ಆರ್ಥಿಕ ನೆರವು ನೀಡುವುದಾಗಿ ಘೋಷಿಸಿದ್ದಾರೆʼ ಎಂದು ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಹೇಳಿದ್ದಾರೆ.