ರಾಸಾಯನಿಕ ಹೊತ್ತೊಯ್ಯುತ್ತಿದ್ದ ಟ್ರಕ್ ಹಲವು ವಾಹನಗಳಿಗೆ ಢಿಕ್ಕಿ: ಐವರು ಮೃತ್ಯು, 37 ಮಂದಿಗೆ ಗಾಯ
PC: screengrab/X.com/ ANI
ಜೈಪುರ: ರಾಸಾಯನಿಕ ಹೊತ್ತೊಯ್ಯುತ್ತಿದ್ದ ಟ್ರಕ್ ಹಲವು ವಾಹನಗಳಿಗೆ ಢಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ಐವರು ಸಜೀವ ದಹನವಾಗಿ, 37 ಮಂದಿ ಗಾಯಗೊಂಡಿರುವ ಘಟನೆ ಶನಿವಾರ ಬೆಳಗ್ಗೆ ಜೈಪುರ-ಅಜ್ಮೀರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಅಪಘಾತದಲ್ಲಿ ಸುಮಾರು 30 ಟ್ರಕ್ ಗಳು ಬೆಂಕಿಗಾಹುತಿಯಾಗಿವೆ ಎಂದು ತಿಳಿದು ಬಂದಿದೆ.
ಈ ಕುರಿತು PTI ಜೊತೆ ಮಾತನಾಡಿದ ಜೈಪುರ ಪೊಲೀಸ್ ಆಯುಕ್ತ ಬಿಜು ಜಾರ್ಜ್ ಜೋಸೆಫ್, “ಅಪಘಾತದಲ್ಲಿ ಐವರು ಮೃತಪಟ್ಟಿದ್ದು, 37 ಮಂದಿ ಗಾಯಗೊಂಡಿದ್ದಾರೆ” ಎಂದು ತಿಳಿಸಿದ್ದಾರೆ.
ಸುದ್ದಿ ತಿಳಿದ ತಕ್ಷಣ ಗಾಯಾಳುಗಳನ್ನು ದಾಖಲಿಸಲಾಗಿರುವ ಎಸ್ಎಂಎಸ್ ಆಸ್ಪತ್ರೆಗೆ ಭೇಟಿ ನೀಡಿದ ರಾಜಸ್ಥಾನ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮ, ವೈದ್ಯರ ಬಳಿ ಗಾಯಾಳುಗಳ ಯೋಗಕ್ಷೇಮವನ್ನು ವಿಚಾರಿಸಿದರು. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಹಾಗೂ ಇನ್ನಿತರ ವ್ಯವಸ್ಥೆಗಳನ್ನು ಮಾಡುವಂತೆ ಅವರು ಅಧಿಕಾರಿಗಳು ಹಾಗೂ ವೈದ್ಯರಿಗೆ ಸೂಚನೆ ನೀಡಿದರು.
“ಬೆಂಕಿಯನ್ನು ನಿಯಂತ್ರಿಸುವುದು ತುಂಬಾ ಕಠಿಣವಾಯಿತು. ಅಗ್ನಿಶಾಮಕ ದಳ ಸಿಬ್ಬಂದಿಗಳು ಬೆಂಕಿ ಹೊತ್ತಿಕೊಂಡು ಉರಿಯುತ್ತಿದ್ದ ವಾಹನಗಳನ್ನು ಸಮೀಪಿಸಲು ಸಾಧ್ಯವಾಗಲಿಲ್ಲ. ಘಟನೆ ನಡೆದ ಸ್ಥಳದಲ್ಲಿ ಮೂರು ಪೆಟ್ರೋಲ್ ಬಂಕ್ ಗಳಿದ್ದರೂ, ಅದೃಷ್ಟವಶಾತ್, ಅವೆಲ್ಲ ಸುರಕ್ಷಿತವಾಗಿವೆ” ಎಂದು ಭಂಕ್ರೋಟಾ ಪೊಲೀಸ್ ಠಾಣೆಯ ಠಾಣಾಧಿಕಾರಿ ಮನೀಶ್ ಗುಪ್ತ ತಿಳಿಸಿದ್ದಾರೆ.
ಗಾಯಾಳುಗಳನ್ನು ಆಂಬ್ಯುಲೆನ್ಸ್ ಗಳ ಮೂಲಕ ಆಸ್ಪತ್ರೆಗೆ ಸಾಗಿಸಲಾಗಿದೆ. ಇದಕ್ಕಾಗಿ 25ಕ್ಕೂ ಅಧಿಕ ಆಂಬ್ಯುಲೆನ್ಸ್ ಗಳ ವ್ಯವಸ್ಥೆ ಮಾಡಲಾಗಿದೆ. ಅಪಘಾತದಿಂದಾಗಿ ಹೆದ್ದಾರಿಯಲ್ಲಿ ಸಂಚಾರವನ್ನು ಸ್ಥಗಿತಗೊಳಿಸಿರುವುದರಿಂದ, ವಾಹನಗಳು ದೊಡ್ಡ ಸರತಿ ಸಾಲಿನಲ್ಲಿ ನಿಂತಿವೆ.