×
Ad

Madhya Pradesh | ಸಚಿವ ವಿಜಯ್ ಶಾ ವಿರುದ್ಧ ಕ್ರಮಕ್ಕೆ ಅನುಮತಿ ಕುರಿತು 2 ವಾರಗಳಲ್ಲಿ ನಿರ್ಧಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕರ್ನಲ್ ಸೋಫಿಯಾ ಖುರೇಷಿ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಸಚಿವ

Update: 2026-01-20 10:46 IST

 ಕುನ್ವರ್ ವಿಜಯ್ ಶಾ , ಕರ್ನಲ್ ಸೋಫಿಯಾ ಖುರೇಷಿ | Photo Credit : NDTV

ಹೊಸದಿಲ್ಲಿ: ಕರ್ನಲ್ ಸೋಫಿಯಾ ಖುರೇಷಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ ಆರೋಪಕ್ಕೆ ಸಂಬಂಧಿಸಿ ಸಚಿವ ಕುನ್ವರ್ ವಿಜಯ್ ಶಾ ವಿರುದ್ಧ ಮೊಕದ್ದಮೆ ಹೂಡಲು ಅನುಮತಿ ನೀಡುವ ಕುರಿತು ಎರಡು ವಾರಗಳೊಳಗೆ ನಿರ್ಧಾರ ಕೈಗೊಳ್ಳುವಂತೆ ಸುಪ್ರೀಂ ಕೋರ್ಟ್ ಸೋಮವಾರ ಮಧ್ಯಪ್ರದೇಶ ಸರ್ಕಾರಕ್ಕೆ ಸೂಚನೆ ನೀಡಿದೆ.

ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 196 (ಕೋಮು ದ್ವೇಷ, ದ್ವೇಷ ಪ್ರಚಾರ) ಅಡಿಯಲ್ಲಿ ಶಾ ವಿರುದ್ಧ ಪ್ರಕರಣ ದಾಖಲಿಸಲು ವಿಶೇಷ ತನಿಖಾ ತಂಡ (ಎಸ್‌ಐಟಿ) ಅನುಮತಿ ಕೋರಿರುವುದನ್ನು ಗಮನಿಸಿದ ಮುಖ್ಯ ನ್ಯಾಯಮೂರ್ತಿ, ಅನುಮತಿ ನೀಡುವಲ್ಲಿ ಆಗಿರುವ ವಿಳಂಬದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

ಕಳೆದ ವರ್ಷ ‘ಆಪರೇಷನ್ ಸಿಂಧೂರ್’ ಸಂಬಂಧಿಸಿದ ಮಾಧ್ಯಮಗೋಷ್ಠಿಗಳ ವೇಳೆ ರಾಷ್ಟ್ರವ್ಯಾಪಿ ಗಮನ ಸೆಳೆದಿದ್ದ ಕರ್ನಲ್ ಸೋಫಿಯಾ ಖುರೇಷಿ ಅವರ ವಿರುದ್ಧ ಮಾನನಷ್ಟ ಹೇಳಿಕೆಗಳನ್ನು ನೀಡಲಾಗಿದೆ ಎಂಬ ಆರೋಪ ಈ ಪ್ರಕರಣದ ಕೇಂದ್ರಬಿಂದು. ಈ ಹೇಳಿಕೆಗಳಿಗೆ ಸಂಬಂಧಿಸಿ ಸಚಿವ ಕುನ್ವರ್ ವಿಜಯ್ ಶಾ ವಿರುದ್ಧ ಕ್ರಮಕ್ಕೆ ಅನುಮತಿ ನೀಡುವ ವಿಚಾರ ನ್ಯಾಯಾಲಯದ ಮುಂದೆ ವಿಚಾರಣೆಗೆ ಬಂದಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಹಾಗೂ ನ್ಯಾಯಮೂರ್ತಿಗಳಾದ ದೀಪಂಕರ್ ದತ್ತ ಮತ್ತು ಜೋಯ್ಮಲ್ಯ ಬಾಗ್ಚಿ ಅವರನ್ನು ಒಳಗೊಂಡ ಪೀಠವು ಎಸ್‌ಐಟಿ ಸಲ್ಲಿಸಿದ ವರದಿಯನ್ನು ಪರಿಶೀಲಿಸಿತು. “ಆಗಸ್ಟ್ 19, 2025ರಿಂದ ಎಸ್‌ಐಟಿ ವರದಿಯ ಕುರಿತು ಯಾವುದೇ ನಿರ್ಧಾರ ಕೈಗೊಳ್ಳಲಾಗಿಲ್ಲ. ಶಾಸನವು ನಿಮ್ಮ ಮೇಲೆ ಸ್ಪಷ್ಟ ಕರ್ತವ್ಯವನ್ನು ವಿಧಿಸಿದೆ. ನಿರ್ಧಾರ ತಪ್ಪಿಸಲು ಸಾಧ್ಯವಿಲ್ಲ. ಇಂದು ಜನವರಿ 19,” ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದರು.

ಈ ವಿಷಯವು ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವುದರಿಂದ ಎಸ್‌ಐಟಿಯ ಮನವಿಯ ಮೇರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಮಧ್ಯಪ್ರದೇಶ ಸರ್ಕಾರದ ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಪೀಠವು, “ವಿಷಯ ನ್ಯಾಯಾಲಯದಲ್ಲಿ ಬಾಕಿ ಇರುವುದನ್ನು ಕಾರಣವನ್ನಾಗಿ ಮಾಡಿಕೊಂಡು ರಾಜ್ಯವು ನಿರ್ಧಾರವನ್ನು ಮುಂದೂಡಲು ಸಾಧ್ಯವಿಲ್ಲ. ಕಾನೂನಿನ ಪ್ರಕಾರ ಮಂಜೂರಾತಿಗೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ನಿರ್ದೇಶನ ನೀಡಿತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News