ಸಂಸತ್ತಿನಲ್ಲಿ ಚರ್ಚೆಗೆ ವಿಪಕ್ಷಗಳ ಬಿಗಿಪಟ್ಟು: ಉಭಯ ಸದನಗಳ ಕಲಾಪ ಮುಂದೂಡಿಕೆ
Photo Credit : PTI
ಹೊಸದಿಲ್ಲಿ, ಆ. 10: ವಿವಿಧ ವಿಷಯಗಳ ಕುರಿತು ಚರ್ಚೆಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿ ವಿರೋಧ ಪಕ್ಷಗಳು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಸಂಸತ್ತಿನ ಉಭಯ ಸದನಗಳ ಕಲಾಪ ಸೋಮವಾರ ಆರಂಭವಾದ ಕೆಲವೇ ನಿಮಿಷಗಳಲ್ಲಿ ಮುಂದೂಡಿಕೆಯಾಯಿತು.
ಲೋಕಸಭೆಯಲ್ಲಿ ಕಲಾಪ ಆರಂಭವಾದ ಒಂದು ನಿಮಿಷದೊಳಗೇ ಸದನವನ್ನು ಮುಂದೂಡಲಾಯಿತು. ರಾಜ್ಯಸಭೆಯಲ್ಲಿ ಸಭಾಪತಿಗಳು ಕೆಲವು ನಿಮಿಷಗಳ ಕಾಲ ಕಲಾಪ ನಡೆಸಲು ಪ್ರಯತ್ನಿಸಿದ ಬಳಿಕ ಮಧ್ಯಾಹ್ನ 12 ಗಂಟೆಯವರೆಗೆ ಸದನವನ್ನು ಮುಂದೂಡಿದರು.
ಇದಕ್ಕೂ ಮುನ್ನ, ಸದನದ ಒಳಗೆ ಸೋಮವಾರ ಅನುಸರಿಸಬೇಕಾದ ಕಾರ್ಯತಂತ್ರದ ಕುರಿತು ಚರ್ಚಿಸಲು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕೊಠಡಿಯಲ್ಲಿ ವಿರೋಧ ಪಕ್ಷಗಳ ನಾಯಕರು ಸಭೆ ನಡೆಸಿದ್ದರು.
12 ಗಂಟೆಗೆ ಮತ್ತೆ ಗದ್ದಲ: ಮಧ್ಯಾಹ್ನ 12 ಗಂಟೆಗೆ ಲೋಕಸಭೆಯ ಕಲಾಪ ಮತ್ತೆ ಆರಂಭವಾಯಿತು. ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿರುವ ಕ್ರಮ ಮತ್ತು ರಾಮಮಂದಿರದ ದೇಣಿಗೆ ಕಳ್ಳತನದ ಆರೋಪದ ಕುರಿತು ಸರಕಾರ ಸ್ಪಷ್ಟನೆ ನೀಡಬೇಕು ಎಂದು ವಿರೋಧ ಪಕ್ಷಗಳು ಒತ್ತಾಯಿಸಿದವು. ಇದರಿಂದ ಸದನದಲ್ಲಿ ಗದ್ದಲ ಉಂಟಾದ ಹಿನ್ನೆಲೆಯಲ್ಲಿ ಲೋಕಸಭೆಯ ಕಲಾಪವನ್ನು ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಲಾಯಿತು.
ಈ ಅಧಿವೇಶನದ ಆರಂಭದಿಂದಲೂ ಲೋಕಸಭೆಯ ಕಲಾಪಗಳಿಗೆ ಪದೇ ಪದೇ ಅಡ್ಡಿಯಾಗುತ್ತಿದೆ. ಎಂಟು ಮಸೂದೆಗಳ ಪೈಕಿ ಆರು ಮಸೂದೆಗಳನ್ನು ಯಾವುದೇ ಚರ್ಚೆಯಿಲ್ಲದೆ ಸದನದಲ್ಲಿ ಅಂಗೀಕರಿಸಲಾಗಿದೆ. ಕಳೆದ 16 ದಿನಗಳಿಂದ ಲೋಕಸಭೆಯಲ್ಲಿ ಪ್ರಶ್ನೋತ್ತರ ವೇಳೆಯನ್ನು ಪೂರ್ಣಗೊಳಿಸಲು ಸಾಧ್ಯವಾಗಿಲ್ಲ.
ಈ ಮಧ್ಯೆ, ರಾಜ್ಯಸಭೆಯ ಕಲಾಪವನ್ನೂ ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಲಾಗಿದೆ.