Photo: PTI

ಹೊಸದಿಲ್ಲಿ: ಕೇಂದ್ರ ಸರಕಾರ ಮಂಡಿಸಲಿದೆ ಎನ್ನಲಾದ ಕ್ಷೇತ್ರ ಪುನರ್ವಿಂಗಡಣೆ ತಿದ್ದುಪಡಿ ಮಸೂದೆಯನ್ನು ಸಂಸತ್ತಿನಲ್ಲಿ ಸೋಲಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟ ರಾಜಕೀಯ ಚಟುವಟಿಕೆಗಳನ್ನು ಚುರುಕುಗೊಳಿಸಿದೆ. ಪ್ರತಿಪಕ್ಷಗಳ ಸಂಖ್ಯಾಬಲ ಹೆಚ್ಚಿಸಿಕೊಳ್ಳುವ ಪ್ರಯತ್ನದ ಭಾಗವಾಗಿ ಮೈತ್ರಿಕೂಟದ ಹಿರಿಯ ನಾಯಕರ ನಿಯೋಗ ರವಿವಾರ ಚೆನ್ನೈ ಮತ್ತು ಮುಂಬೈಗೆ ತೆರಳಿ ಪ್ರಮುಖ ಪ್ರಾದೇಶಿಕ ಪಕ್ಷಗಳ ನಾಯಕರೊಂದಿಗೆ ಮಾತುಕತೆ ನಡೆಸಲಿದೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಮಾಜಿ ಅಧ್ಯಕ್ಷರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಹಾಗೂ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ನೇತೃತ್ವದ ನಿಯೋಗವು ಮೊದಲು ಚೆನ್ನೈನಲ್ಲಿ ಡಿಎಂಕೆ ಮುಖ್ಯಸ್ಥ ಎಂ.ಕೆ. ಸ್ಟಾಲಿನ್ ಅವರನ್ನು ಭೇಟಿಯಾಗಲಿದೆ. ಬಳಿಕ ಮುಂಬೈಗೆ ತೆರಳಿ ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಅವರೊಂದಿಗೆ ಸಮಾಲೋಚನೆ ನಡೆಸಲಿದೆ.

ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ, ಸಿಪಿಐ-ಎಂ ಪ್ರಧಾನ ಕಾರ್ಯದರ್ಶಿ ಎಂ.ಎ. ಬೇಬಿ, ಸಮಾಜವಾದಿ ಪಕ್ಷದ ರಾಜೀವ್ ರೈ, ಆರ್‌ಜೆಡಿಯ ಅಭಯ್ ಕುಮಾರ್ ಸಿನ್ಹಾ ಮತ್ತು ಸುಧಾಕರ್ ಸಿಂಗ್ ಕೂಡ ನಿಯೋಗದಲ್ಲಿದ್ದಾರೆ. ಚೆನ್ನೈಯಿಂದ ಮುಂಬೈಗೆ ತೆರಳಿ ಶರದ್ ಪವಾರ್ ಅವರೊಂದಿಗೆ ಚರ್ಚೆ ನಡೆಸಲಿದೆ ಎಂದು ಮೂಲಗಳು ತಿಳಿಸಿವೆ.

ಈ ನಡುವೆ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಅವರು ಎಕ್ಸ್‌ನಲ್ಲಿ ‘ಪಿಕ್ಚರ್ ಅಭೀ ಬಾಕಿ ಹೈ ಬ್ರೋ’ (ಪಿಕ್ಚರ್ ಇನ್ನೂ ಆಟ ಮುಗಿದಿಲ್ಲ) ಎಂದು ಪೋಸ್ಟ್ ಮಾಡಿದ್ದಾರೆ. ಕ್ಷೇತ್ರ ಪುನರ್ವಿಂಗಡನೆ ತಿದ್ದುಪಡಿ ಮಸೂದೆಯ ವಿರುದ್ಧದ ಹೋರಾಟ ಇನ್ನೂ ಮುಗಿದಿಲ್ಲ ಎಂಬ ಸಂದೇಶವನ್ನು ಅವರು ನೀಡಿದ್ದಾರೆ.

ಕ್ಷೇತ್ರ ಪುನರ್ವಿಂಗಡಣೆ ಮತ್ತು ಮಹಿಳಾ ಮೀಸಲಾತಿ ಜಾರಿಗೆ ಸಂಬಂಧಿಸಿದ ತಿದ್ದುಪಡಿ ಮಸೂದೆಯನ್ನು ಸಂಸತ್ತಿನಲ್ಲಿ ಒಗ್ಗಟ್ಟಿನಿಂದ ವಿರೋಧಿಸಲು ಇಂಡಿಯಾ ಮೈತ್ರಿಕೂಟ ಶನಿವಾರ ನಿರ್ಧರಿಸಿದೆ. ಈ ಮಸೂದೆಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಹಿತಾಸಕ್ತಿಗಳಿಗೆ ಧಕ್ಕೆಯಾಗಲಿದೆ ಎಂಬುದು ಮೈತ್ರಿಕೂಟದ ವಾದವಾಗಿದೆ.

ಬಿಜೆಪಿ-RSS ಈ ಕ್ರಮವನ್ನು ದೇಶದಲ್ಲಿ ಶಾಶ್ವತವಾಗಿ ಅಧಿಕಾರ ಹಿಡಿಯಲು ಮತ್ತು ಪ್ರಜಾಪ್ರಭುತ್ವವನ್ನು ಅಂತ್ಯಗೊಳಿಸಲು ನಡೆಸುತ್ತಿರುವ ಪ್ರಯತ್ನ ಎಂದು ಪ್ರತಿಪಕ್ಷಗಳ ಮೈತ್ರಿಕೂಟ ಆರೋಪಿಸಿದೆ.

132ನೇ ತಿದ್ದುಪಡಿ ಮಸೂದೆ-2026ರ ಮೂಲಕ ಲೋಕಸಭೆಯ ಗರಿಷ್ಠ ಸದಸ್ಯರ ಸಂಖ್ಯೆಯನ್ನು 850ಕ್ಕೆ ಹೆಚ್ಚಿಸಲು ಪ್ರಸ್ತಾಪಿಸಲಾಗಿದೆ. ಈ ಪೈಕಿ ರಾಜ್ಯಗಳಿಂದ 815 ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ 35 ಸದಸ್ಯರು ಇರಲಿದ್ದಾರೆ.

ರಾಜ್ಯ ವಿಧಾನಸಭೆಗಳ ಗರಿಷ್ಠ ಸದಸ್ಯರ ಮಿತಿಯನ್ನು ಈಗಿನ 500ರಿಂದ 650ಕ್ಕೆ ಹೆಚ್ಚಿಸುವುದು ಹಾಗೂ ಪರಿಷ್ಕೃತ ಕ್ಷೇತ್ರ ಹಂಚಿಕೆ ಮತ್ತು ಕ್ಷೇತ್ರಗಳ ಗಡಿಗಳನ್ನು 2051ರವರೆಗೆ ಸ್ಥಗಿತಗೊಳಿಸುವ ಪ್ರಸ್ತಾವನೆಯೂ ಮಸೂದೆಯಲ್ಲಿದೆ.

ಲೋಕಸಭೆಯ ಕಲಾಪ ನ. 30ರಂದು ಮತ್ತು ರಾಜ್ಯಸಭೆಯ ಕಲಾಪ ಡಿ. 2ರಂದು ಪುನರಾರಂಭವಾಗಲಿದ್ದು, ಸಂಸತ್ತಿನ ವಿಶೇಷ ಅಧಿವೇಶನ ಡಿ. 3ರಂದು ಮುಕ್ತಾಯಗೊಳ್ಳಲಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಇರ್ಷಾದ್ ಎಂ. ವೇಣೂರು/ವಾರ್ತಾಭಾರತಿ

contributor

ಇರ್ಷಾದ್ ಎಂ. ವೇಣೂರು ಅವರು ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರರಾಗಿದ್ದು, ಪತ್ರಿಕೋದ್ಯಮ ಕ್ಷೇತ್ರದಲ್ಲಿ 13 ವರ್ಷಗಳ ಅನುಭವ ಹೊಂದಿದ್ದಾರೆ. ಪ್ರಸ್ತುತ ‘ವಾರ್ತಾಭಾರತಿ’ಯಲ್ಲಿ ಡಿಜಿಟಲ್ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ‘ಡೆಕ್ಕನ್ ಹೆರಾಲ್ಡ್–ಪ್ರಜಾವಾಣಿ’ ಸಮೂಹದಲ್ಲಿ ಫೋಟೊ ಜರ್ನಲಿಸ್ಟ್ ಆಗಿಯೂ ಕೆಲಸ ಮಾಡಿದ್ದಾರೆ. ಅಂತರರಾಷ್ಟ್ರೀಯ ವಿದ್ಯಮಾನಗಳು, ಮಧ್ಯಪ್ರಾಚ್ಯದ ಸಂಘರ್ಷಗಳು, ಗಲ್ಫ್ ರಾಷ್ಟ್ರಗಳ ಬೆಳವಣಿಗೆಗಳು, ರಾಜಕೀಯ, ವಾಯುಯಾನ, ಅಪರಾಧ ಮತ್ತು ಕ್ರೀಡೆ ಅವರ ಆಸಕ್ತಿಯ ಸುದ್ದಿ ಕ್ಷೇತ್ರಗಳಾಗಿವೆ.