CEC ವಿರುದ್ಧದ ಪ್ರತಿಭಟನೆ | ಇಂದು (ಅ.8) ದೇಶವ್ಯಾಪಿ ಪ್ರತಿಭಟನೆಗೆ ಕಾಂಗ್ರೆಸ್ ಕರೆ
ಅ.7ನ್ನು ‘ಪ್ರಜಾಪ್ರಭುತ್ವದ ಕಪ್ಪು ದಿನ’ ಎಂದು ಘೋಷಣೆ
Photo: x.com/NDTVProfit
ಹೊಸದಿಲ್ಲಿ, ಅ.8: ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ಅವರ ರಾಜೀನಾಮೆ ಹಾಗೂ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ತೀವ್ರಗೊಂಡಿದೆ. ಪ್ರತಿಭಟನೆಯ ವೇಳೆ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ‘ಇಂಡಿಯಾ’ (INDIA) ಮೈತ್ರಿಕೂಟದ ಹಲವು ನಾಯಕರನ್ನು 24 ಗಂಟೆಗಳ ಅವಧಿಯಲ್ಲಿ ಎರಡನೇ ಬಾರಿಗೆ ಪೊಲೀಸರು ವಶಕ್ಕೆ ಪಡೆದ ಬೆನ್ನಲ್ಲೇ, ಅಕ್ಟೋಬರ್ 8ರಂದು ದೇಶದಾದ್ಯಂತ ಪ್ರತಿಭಟನೆ ನಡೆಸಲು ಕಾಂಗ್ರೆಸ್ ಕರೆ ನೀಡಿದೆ. ಅಕ್ಟೋಬರ್ 7ನ್ನು ‘ಭಾರತೀಯ ಪ್ರಜಾಪ್ರಭುತ್ವದ ಕಪ್ಪು ದಿನ’ ಎಂದು ಪಕ್ಷ ಘೋಷಿಸಿದೆ.
ಅಕ್ಟೋಬರ್ 7ರಂದು ಜಂತರ್ ಮಂತರ್ ಗೆ ತೆರಳಲು ಪ್ರಯತ್ನಿಸುತ್ತಿದ್ದ ರಾಹುಲ್ ಗಾಂಧಿ ಹಾಗೂ ವಿರೋಧ ಪಕ್ಷದ ಹಲವು ಸಂಸದರನ್ನು ಪೊಲೀಸರು ವಶಕ್ಕೆ ಪಡೆದರು. ಇದಕ್ಕೂ ಮುನ್ನ ಇದೇ ಬೇಡಿಕೆಗಳಿಗಾಗಿ ನಡೆದ ಪ್ರತಿಭಟನೆಯಲ್ಲಿಯೂ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಹಲವು ವಿರೋಧ ಪಕ್ಷದ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಹೀಗಾಗಿ 24 ಗಂಟೆಗಳ ಅವಧಿಯಲ್ಲಿ ಅವರನ್ನು ಎರಡನೇ ಬಾರಿ ವಶಕ್ಕೆ ಪಡೆದಂತಾಗಿದೆ.
ವಿರೋಧ ಪಕ್ಷದ ಮೆರವಣಿಗೆಯನ್ನು ಪೊಲೀಸರು ತಡೆದ ಬಳಿಕ ರಾಹುಲ್ ಗಾಂಧಿ ಹಾಗೂ ಇತರ ನಾಯಕರು ಚುನಾವಣಾ ಆಯೋಗದ ಪ್ರಧಾನ ಕಚೇರಿ ಸಮೀಪ ದೀರ್ಘಕಾಲ ಧರಣಿ ನಡೆಸಿದರು. ಈ ಸಂದರ್ಭದಲ್ಲಿ ವಿರೋಧ ಪಕ್ಷದ ಸಂಸದರು ಮತ್ತು ದಿಲ್ಲಿ ಪೊಲೀಸರ ನಡುವೆ ಸಂಘರ್ಷವೂ ನಡೆಯಿತು.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್ ಅವರು ಅಕ್ಟೋಬರ್ 8ರಂದು ರಾಜ್ಯ, ಜಿಲ್ಲೆ ಹಾಗೂ ಬ್ಲಾಕ್/ಮಂಡಲ ಮಟ್ಟದಲ್ಲಿ ಪ್ರತಿಭಟನೆಗಳನ್ನು ಆಯೋಜಿಸುವಂತೆ ಪ್ರದೇಶ ಕಾಂಗ್ರೆಸ್ ಸಮಿತಿಗಳು, ಜಿಲ್ಲಾ ಕಾಂಗ್ರೆಸ್ ಸಮಿತಿಗಳು ಮತ್ತು ಬ್ಲಾಕ್ ಕಾಂಗ್ರೆಸ್ ಸಮಿತಿಗಳಿಗೆ ಸೂಚಿಸಿದ್ದಾರೆ.
ರಾಹುಲ್ ಗಾಂಧಿ ಹಾಗೂ ಇತರ ವಿರೋಧ ಪಕ್ಷದ ನಾಯಕರ ವಿರುದ್ಧ ಪೊಲೀಸರು ಕೈಗೊಂಡ ಕ್ರಮವನ್ನು ವಿರೋಧ ಪಕ್ಷದ ನಾಯಕ (LoP) ಮತ್ತು ಚುನಾಯಿತ ಪ್ರತಿನಿಧಿಗಳ ಮೇಲಿನ ‘ಹಲ್ಲೆ’ ಎಂದು ವೇಣುಗೋಪಾಲ್ ಆರೋಪಿಸಿದ್ದಾರೆ. ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ, ಹಿರಿಯ ನಾಯಕರು ಹಾಗೂ ‘ಇಂಡಿಯಾ’ ಮೈತ್ರಿಕೂಟದ ಇತರ ಸಂಸದರೊಂದಿಗೆ ಪೊಲೀಸರು ಅನುಚಿತವಾಗಿ ವರ್ತಿಸಿದ್ದಾರೆ ಮತ್ತು ಲಾಠಿಚಾರ್ಜ್ ನಡೆಸಿದ್ದಾರೆ. ಇದರಿಂದ ಕೆಲವರು ಗಾಯಗೊಂಡಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ತೆಗೆದುಹಾಕುವವರೆಗೆ ಹಾಗೂ ಚುನಾವಣಾ ವ್ಯವಸ್ಥೆಯ ಘನತೆಯನ್ನು ಮರುಸ್ಥಾಪಿಸುವವರೆಗೆ ಹೋರಾಟ ಮುಂದುವರಿಸುವುದಾಗಿ ಕಾಂಗ್ರೆಸ್ ಹೇಳಿದೆ. ಚುನಾವಣಾ ಆಯೋಗಕ್ಕೆ ಸಂಬಂಧಿಸಿದಂತೆ ಸತತ ಎರಡನೇ ದಿನವೂ ಸಂಘರ್ಷ ನಡೆದ ಬಳಿಕ ಈ ಘೋಷಣೆ ಹೊರಬಿದ್ದಿದೆ.
ಚುನಾವಣಾ ಆಯೋಗದ ಮೇಲೆ ಒತ್ತಡ ಮುಂದುವರಿಸುವ ಉದ್ದೇಶದಿಂದ ಅಕ್ಟೋಬರ್ 8ರಂದು ದಿಲ್ಲಿಯಲ್ಲೇ ಇರುವಂತೆ ಕಾಂಗ್ರೆಸ್ ತನ್ನ ಸಂಸದರಿಗೆ ಸೂಚಿಸಿದೆ.
‘ಚುನಾವಣಾ ಪ್ರಕ್ರಿಯೆಯ ಘನತೆಗಾಗಿ’ ಹೋರಾಟ ನಡೆಸಲಾಗುತ್ತಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೆ ಪ್ರತಿಭಟನೆ ಮುಂದುವರಿಯಲಿದೆ ಎಂದೂ ಅವರು ತಿಳಿಸಿದ್ದಾರೆ.
ಇದುವರೆಗೆ ದಿಲ್ಲಿಗೆ ಸೀಮಿತವಾಗಿದ್ದ ಪ್ರತಿಭಟನೆಯನ್ನು ದೇಶದಾದ್ಯಂತ ವಿಸ್ತರಿಸಲು ಕಾಂಗ್ರೆಸ್ ಮುಂದಾಗಿದೆ. ಅಕ್ಟೋಬರ್ 8ರಂದು ತನ್ನ ಸಾಂಸ್ಥಿಕ ಜಾಲದ ಮೂಲಕ ದೇಶದ ವಿವಿಧ ರಾಜ್ಯಗಳು, ಜಿಲ್ಲೆಗಳು ಮತ್ತು ನಗರಗಳಲ್ಲಿ ಪ್ರತಿಭಟನೆಗಳನ್ನು ನಡೆಸಲು ಪಕ್ಷ ಯೋಜಿಸಿದೆ.