ಚುನಾವಣಾ ಆಯೋಗದ ಕಚೇರಿಗೆ ಜಾಥಾ : ರಾಹುಲ್ ಗಾಂಧಿ, ಪ್ರಿಯಾಂಕಾ ಸಹಿತ INDIA ಮೈತ್ರಿಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ
ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ | Photo Credit : PTI
ಹೊಸದಿಲ್ಲಿ : ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ವಿರುದ್ಧ ಚುನಾವಣಾ ಆಯೋಗದ ಕೇಂದ್ರ ಕಚೇರಿಗೆ ಸಾಗುತ್ತಿದ್ದ ಪ್ರತಿಪಕ್ಷಗಳ ಪ್ರತಿಭಟನಾ ಮೆರವಣಿಗೆಯನ್ನು ತಡೆದ ಪೊಲೀಸರು ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಸಹಿತ ಹಲವು ಸಂಸದರನ್ನು ವಶಕ್ಕೆ ಪಡೆದಿದ್ದಾರೆ.
ಚುನಾವಣಾ ಆಯೋಗದ ಕೇಂದ್ರ ಕಚೇರಿಗೆ ತೆರಳುತ್ತಿದ್ದ ಮೆರವಣಿಗೆಯನ್ನು ಪೊಲೀಸರು ಬ್ಯಾರಿಕೇಡ್ ಹಾಕಿ ತಡೆದಿದ್ದಾರೆ. ಈ ವೇಳೆ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಅವರು ಆಕಾಶವಾಣಿ ಭವನ ಪ್ರವೇಶಿಸಲು ಯತ್ನಿಸಿದ್ದಾರೆ. ಬ್ಯಾರಿಕೇಡ್ ಹತ್ತಿದ ರಾಹುಲ್ ಗಾಂಧಿ ತ್ರಿವರ್ಣ ಧ್ವಜವನ್ನು ಬೀಸಿದ್ದಾರೆ.
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು “ದೇಶದ್ರೋಹಿ” ಎಂದು ಕರೆದ ಕಾಂಗ್ರೆಸ್, ಅವರ ರಾಜೀನಾಮೆ ಹಾಗೂ ಬಂಧನಕ್ಕೆ ಆಗ್ರಹಿಸಿದೆ.
ಮೆರವಣಿಗೆಗೆ ಅನುಮತಿ ಪಡೆಯದ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಸಂಸದರಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.