ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್
ಪವಿತ್ರಾ ಗೌಡ ಸಹಿತ ಎಲ್ಲಾ ಏಳು ಆರೋಪಿಗಳ ಜಾಮೀನು ಕೂಡಾ ರದ್ದು
ಹೊಸದಿಲ್ಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸಹಿತ ಎಲ್ಲಾ ಏಳು ಆರೋಪಿಗಳಿಗೆ ಹೈಕೋರ್ಟ್ ನೀಡಿದ್ದ ಜಾಮೀನು ರದ್ದು ಮಾಡಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.
ಈ ಕೊಲೆ ಪ್ರಕರಣದಲ್ಲಿ ಆರೋಪಿ ನಟ ದರ್ಶನ್ ಗೆ ನಿಯಮಿತ ಜಾಮೀನು ನೀಡಿದ್ದ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ಸರಕಾರ ಸಲ್ಲಿಸಿದ್ದ ಅರ್ಜಿಯ ಕುರಿತು ಸುಪ್ರೀಂ ಕೋರ್ಟ್ ಈ ಮಹತ್ವದ ತೀರ್ಪು ಪ್ರಕಟಿಸಿದೆ.
2024ರ ಜೂನ್ 8ರಂದು ಚಿತ್ರದುರ್ಗದ ರೇಣುಕಾಸ್ವಾಮಿಯವರನ್ನು ಅಪಹರಿಸಿ ಕೊಲೆ ಮಾಡಿದ ಆರೋಪದಡಿ ದರ್ಶನ್, ಪವಿತ್ರಾ ಗೌಡ ಸೇರಿದಂತೆ 17 ಮಂದಿಯನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದರು.
ದರ್ಶನ್, ಪವಿತ್ರಾ ಗೌಡ, ಲಕ್ಷ್ಮಣ್, ಪ್ರದೂಶ್, ನಾಗರಾಜು, ಅನುಕುಮಾರ್ ಹಾಗೂ ಜಗದೀಶ್ ಅವರಿಗೆ ಹೈಕೋರ್ಟ್ ನಿಯಮಿತ ಜಾಮೀನು ಮಂಜೂರು ಮಾಡಿತ್ತು. ಉಳಿದ ಹತ್ತು ಮಂದಿ ಆರೋಪಿಗಳಿಗೆ ವಿಚಾರಣಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. ಇದನ್ನು ಪ್ರಶ್ನಿಸಿ ರಾಜ್ಯ ಸರಕಾರ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿತ್ತು.