100, 200 ರೂ. ನೋಟುಗಳು ಮಾತ್ರ ಚಲಾವಣೆಯಲ್ಲಿರಲಿ: ಆಂಧ್ರ ಪ್ರದೇಶದ CM ಚಂದ್ರಬಾಬು ನಾಯ್ಡು
ಚಂದ್ರಬಾಬು ನಾಯ್ಡು | Photo Credit: PTI
ಅಮರಾವತಿ: 100 ಮತ್ತು 200 ರೂ. ಮುಖಬೆಲೆಯ ನೋಟುಗಳು ಮಾತ್ರ ಚಲಾವಣೆಯಲ್ಲಿರಬೇಕು. 500, 1,000 ಹಾಗೂ 2,000 ರೂ. ಮುಖಬೆಲೆಯ ನೋಟುಗಳನ್ನು ರದ್ದುಗೊಳಿಸಬೇಕು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಸೋಮವಾರ ಆಗ್ರಹಿಸಿದ್ದಾರೆ.
ಅಧಿಕ ಮುಖಬೆಲೆಯ ನೋಟುಗಳನ್ನು ರದ್ದುಗೊಳಿಸುವುದರಿಂದ ಭ್ರಷ್ಟಾಚಾರದ ಸರಪಳಿಯನ್ನು ತುಂಡರಿಸಲು ಸಾಧ್ಯವಾಗಲಿದೆ. ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿದರೆ ಸಂಪತ್ತು ಸೃಷ್ಟಿಸುವುದರ ಜತೆಗೆ ಬಡತನವನ್ನೂ ಸುಲಭವಾಗಿ ನಿರ್ಮೂಲನೆ ಮಾಡಬಹುದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
2016ರ ನವೆಂಬರ್ 8ರಂದು ಕೇಂದ್ರ ಸರ್ಕಾರ ಕಪ್ಪುಹಣ, ಖೋಟಾ ನೋಟು ಹಾಗೂ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ 500 ಮತ್ತು 1,000 ರೂ. ಮುಖಬೆಲೆಯ ನೋಟುಗಳನ್ನು ಅಮಾನ್ಯಗೊಳಿಸಿತ್ತು. ಈ ನಿರ್ಧಾರಕ್ಕೆ 10 ವರ್ಷ ತುಂಬಿದ ಹಿನ್ನೆಲೆಯಲ್ಲಿ ನಾಯ್ಡು ಮತ್ತೆ ಅಧಿಕ ಮುಖಬೆಲೆಯ ನೋಟುಗಳ ರದ್ದತಿಯ ಬೇಡಿಕೆಯನ್ನು ಮುಂದಿಟ್ಟಿದ್ದಾರೆ.
“ಡಿಜಿಟಲ್ ಕರೆನ್ಸಿ ವರದಿಗೆ ಮಾಹಿತಿ ನೀಡಿದವನು ನಾನೇ. ಈ ವರದಿಯನ್ನು ಪರಿಗಣಿಸುವಂತೆ ಪ್ರಧಾನಿಯವರನ್ನು ಆಗ್ರಹಿಸಿದ್ದೆ. ಈಗಲೂ ಅದೇ ಬೇಡಿಕೆಯನ್ನು ಮುಂದಿಡುತ್ತಿದ್ದೇನೆ. ಈ ವಿಚಾರವನ್ನು ಪ್ರಸ್ತಾಪಿಸುತ್ತಲೇ ಇರುತ್ತೇನೆ. 500, 1,000 ಹಾಗೂ 2,000 ರೂ. ಮುಖಬೆಲೆಯ ನೋಟುಗಳನ್ನು ರದ್ದುಗೊಳಿಸಲೇಬೇಕು. 100 ಮತ್ತು 200 ರೂ. ಮುಖಬೆಲೆಯ ನೋಟುಗಳು ಮಾತ್ರ ಉಳಿಯಬೇಕು” ಎಂದು ಅವರು ಹೇಳಿದ್ದಾರೆ.
ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದರಿಂದ ಆರ್ಥಿಕ ಮತ್ತು ಆಡಳಿತಾತ್ಮಕ ವ್ಯವಸ್ಥೆಯಲ್ಲಿ ಆಳವಾಗಿ ಬೇರೂರಿರುವ ಸಮಸ್ಯೆಗಳನ್ನು ಪರಿಹರಿಸಬಹುದು ಎಂದಿರುವ ಅವರು, ಸಂಪತ್ತು ಸೃಷ್ಟಿಸುವುದು ಮತ್ತು ಬಡತನ ನಿರ್ಮೂಲನೆ ಮಾಡುವುದು ಕಷ್ಟದ ಕೆಲಸಗಳಲ್ಲ ಎಂದು ತಿಳಿಸಿದ್ದಾರೆ.