ಐಎಸ್ಎಸ್‌ನಿಂದ ಯಶಸ್ವಿಯಾಗಿ ಭೂಮಿಗೆ ಬಂದಿಳಿದ ಶುಭಾಂಶು ಶುಕ್ಲಾ ಸೇರಿ ನಾಲ್ವರು ಗಗನಯಾತ್ರಿಗಳು
Screengrab:X/@SpaceX
ಹೊಸದಿಲ್ಲಿ: ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ 18 ದಿನಗಳ ವಾಸ್ತವ್ಯದ ನಂತರ ಭಾರತೀಯ ಗಗನಯಾತ್ರಿ, ಐಎಎಫ್ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಸೇರಿ ನಾಲ್ವರು ಗಗನಯಾತ್ರಿಗಳ ಕ್ಯಾಲಿಫೋರ್ನಿಯಾದ ಸ್ಯಾನ್ ಡಿಯಾಗೋ ಕರಾವಳಿಯಲ್ಲಿ ಯಶಸ್ವಿಯಾಗಿ ಬಂದಿಳಿದಿದ್ದಾರೆ.
ಜೂ.25ರಂದು ಆಕ್ಸಿಯಂ-4 ಮಿಷನ್ ಮೂಲಕ ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ, ಅಮೆರಿಕ ಮಹಿಳಾ ಗಗನಯಾತ್ರಿ ಪೆಗ್ಗಿ ವಿಟ್ಸನ್, ಹಂಗೇರಿಯ ಟಿಬೋರ್ ಕಾಪು ಹಾಗೂ ಪೋಲೆಂಡ್‌ನ ಗಗನಯಾತ್ರಿ ಸ್ಲಾವೋಸ್ಜ್ ಉಜ್ನಾನ್ಸ್ಕಿ ಅಂತರಿಕ್ಷ ಯಾನಕ್ಕೆ ತೆರಳಿದ್ದರು.
ಬಾಹ್ಯಾಕಾಶದಲ್ಲಿ 18 ದಿನಗಳ ಕಾಲ ಉಳಿದು ಹಲವಾರು ವೈಜ್ಞಾನಿಕ ಪ್ರಯೋಗಗಳನ್ನು ಮಾಡಿದ್ದು, ಎಲ್ಲಾ ಪರೀಕ್ಷೆಗಳು ಯಶಸ್ವಿಯಾಗಿವೆ ಎಂದು ತಿಳಿದು ಬಂದಿದೆ.
ಸೋಮವಾರ ಸಂಜೆ 4:45 ಕ್ಕೆ ಬಾಹ್ಯಾಕಾಶ ನಿಲ್ದಾಣದಿಂದ ಅನ್‌ಡಾಕಿಂಗ್ ಪ್ರಕ್ರಿಯೆ ಯಶಸ್ವಿಯಾಗಿದೆ. ಒಟ್ಟು 22.5 ಗಂಟೆಗಳ ಕಾಲ ಪ್ರಯಾಣ ಬೆಳೆಸಿ ಡ್ರ್ಯಾಗನ್ ಬಾಹ್ಯಾಕಾಶ ನೌಕೆ ಮಧ್ಯಾಹ್ನ 3ಕ್ಕೆ ಪೆಸಿಫಿಕ್ ಮಹಾಸಾಗರದ ಕ್ಯಾಲಿಫೋರ್ನಿಯಾ ಕರಾವಳಿಯಲ್ಲಿ ಬಂದಿಳಿದಿದೆ.