ಬೀದಿ ನಾಯಿಗಳ ಹಾವಳಿ ಕುರಿತು ವರದಿ ಸಲ್ಲಿಕೆಗೆ ವಿಫಲ : ಎಲ್ಲಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಸುಪ್ರೀಂ ಕೋರ್ಟ್ ಸಮನ್ಸ್
ಸುಪ್ರೀಂಕೋರ್ಟ್ | PC : PTI
ಹೊಸದಿಲ್ಲಿ: ಬೀದಿ ನಾಯಿಗಳ ಹಾವಳಿ ಕುರಿತ ವರದಿ ಸಲ್ಲಿಸುವಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ನಿರ್ಲಕ್ಷ್ಯ ತೋರಿರುವುದಕ್ಕೆ ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಪಶ್ಚಿಮ ಬಂಗಾಳ ಮತ್ತು ತೆಲಂಗಾಣ ಹೊರತುಪಡಿಸಿ ಉಳಿದ ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ಸಮನ್ಸ್ ಜಾರಿ ಮಾಡಿದೆ.
‘In Re: City Hounded by Strays, Kids Pay the Price’ ಎಂಬ ಸ್ವಯಂಪ್ರೇರಿತ ಪ್ರಕರಣದ ವಿಚಾರಣೆಯಲ್ಲಿ, ನ್ಯಾಯಮೂರ್ತಿ ವಿಕ್ರಮ್ ನಾಥ್, ನ್ಯಾಯಮೂರ್ತಿ ಸಂದೀಪ್ ಮೆಹ್ತಾ ಮತ್ತು ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅವರಿದ್ದ ಪೀಠವು ಈ ಆದೇಶ ಹೊರಡಿಸಿದೆ.
ರಾಜ್ಯಗಳು ಪ್ರಾಣಿಗಳ ಜನನ ನಿಯಂತ್ರಣ (ಎಬಿಸಿ) ನಿಯಮಗಳನ್ನು ಜಾರಿಗೆ ತರಲು ತೆಗೆದುಕೊಂಡ ಕ್ರಮಗಳ ಕುರಿತು ಅಫಿಡವಿಟ್‌ಗಳನ್ನು ಸಲ್ಲಿಸದೇ ಕೋರ್ಟ್ ಆದೇಶಗಳನ್ನು ಪಾಲಿಸದಿರುವುದು ಗಂಭೀರ ಎಂದು ಪೀಠ ಅಭಿಪ್ರಾಯಪಟ್ಟಿದೆ.
ನ್ಯಾಯಮೂರ್ತಿ ವಿಕ್ರಮ್ ನಾಥ್ ಅವರು, “ಬೀದಿ ನಾಯಿಗಳ ದಾಳಿಗಳು ನಿರಂತರವಾಗಿ ನಡೆಯುತ್ತಿವೆ. ಇಂತಹ ಘಟನೆಗಳು ವಿದೇಶಿ ರಾಷ್ಟ್ರಗಳ ದೃಷ್ಟಿಯಲ್ಲಿ ದೇಶದ ಪ್ರತಿಷ್ಠೆಯನ್ನು ಹಾಳುಮಾಡುತ್ತಿವೆ. ಈ ಕುರಿತ ವರದಿಗಳನ್ನು ನಾವು ದಿನಂಪ್ರತಿ ಮಾಧ್ಯಮಗಳಲ್ಲಿ ನೋಡುತ್ತಿದ್ದೇವೆ,” ಎಂದು ಕಳವಳ ವ್ಯಕ್ತಪಡಿಸಿದರು.
ಪಶ್ಚಿಮ ಬಂಗಾಳ, ತೆಲಂಗಾಣ ಹಾಗೂ ದಿಲ್ಲಿ ಮಹಾನಗರ ಪಾಲಿಕೆ ಮಾತ್ರ ಅಫಿಡವಿಟ್‌ಗಳನ್ನು ಸಲ್ಲಿಸಿವೆ, ಆದರೆ ಅವುಗಳು ಇನ್ನೂ ದಾಖಲೆಯಲ್ಲಿ ಇಲ್ಲ ಎಂದು ಪೀಠವು ಗಮನಿಸಿದೆ.
ಇತರೆ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳು ಮುಂದಿನ ಸೋಮವಾರ ಬೆಳಿಗ್ಗೆ 10:30ಕ್ಕೆ ಸುಪ್ರೀಂ ಕೋರ್ಟ್ ಮುಂದೆ ಖುದ್ದಾಗಿ ಹಾಜರಾಗಬೇಕೆಂದು ಪೀಠ ಆದೇಶಿಸಿದೆ.
ಆದೇಶವನ್ನು ಪಾಲಿಸಲು ವಿಫಲವಾದರೆ ಸಂಬಂಧಿತ ರಾಜ್ಯಗಳ ವಿರುದ್ಧ ದಂಡ ವಿಧಿಸುವುದು ಹಾಗೂ ಬಲವಂತದ ಕ್ರಮ ಕೈಗೊಳ್ಳುವ ಬಗ್ಗೆ ಸುಪ್ರೀಂ ಕೋರ್ಟ್ ಎಚ್ಚರಿಕೆ ನೀಡಿದೆ.