ರಾಹುಲ್ ಗಾಂಧಿ ಆಸ್ತಿ ಕುರಿತ ದೂರಿನ ಬಗ್ಗೆ ಪರಿಶೀಲನೆಗೆ ಸಿಬಿಐ, ಈಡಿಗೆ ಸೂಚಿಸಿದ್ದ ಹೈಕೋರ್ಟ್ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್
Photos: PTI
ಹೊಸದಿಲ್ಲಿ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಆರೋಪಗಳ ಕುರಿತು ಪರಿಶೀಲನೆ ನಡೆಸುವಂತೆ ಸಿಬಿಐ ಮತ್ತು ಜಾರಿ ನಿರ್ದೇಶನಾಲಯಕ್ಕೆ ನಿರ್ದೇಶಿಸಿದ್ದ ಅಲಹಾಬಾದ್ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಬುಧವಾರ ರದ್ದುಗೊಳಿಸಿದೆ.
ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠವು, ಪ್ರಕರಣವನ್ನು ಮರುಪರಿಶೀಲನೆಗಾಗಿ ಅಲಹಾಬಾದ್ ಹೈಕೋರ್ಟ್‌ಗೆ ಕಳುಹಿಸಿದೆ.
ರಾಹುಲ್ ಗಾಂಧಿ ವಿರುದ್ಧ ಮಾಡಿರುವ ಆರೋಪಗಳನ್ನು ಪರಿಶೀಲಿಸಿ, ಈ ಬಗ್ಗೆ ಮಾಹಿತಿ ನೀಡುವಂತೆ ಈ ಹಿಂದೆ ಹೈಕೋರ್ಟ್ ಸಿಬಿಐ ಮತ್ತು ಜಾರಿ ನಿರ್ದೇಶನಾಲಯಕ್ಕೆ ನಿರ್ದೇಶನ ನೀಡಿತ್ತು.
ಸಿಬಿಐ ಸಲ್ಲಿಸಿದ್ದ ಅಫಿಡವಿಟ್ ಬಗ್ಗೆಯೂ ಅಸಮಾಧಾನ ವ್ಯಕ್ತಪಡಿಸಿದ್ದ ಹೈಕೋರ್ಟ್, ತನಿಖೆಯ ಪ್ರಸ್ತುತ ಸ್ಥಿತಿಯನ್ನು ವಿವರಿಸುವ ಹೊಸ ಅಫಿಡವಿಟ್ ಸಲ್ಲಿಸುವಂತೆ ಸೂಚಿಸಿತ್ತು.
ಕರ್ನಾಟಕ ಮೂಲದ ಬಿಜೆಪಿ ಕಾರ್ಯಕರ್ತ ಎಸ್.ವಿಘ್ನೇಶ್ ಶಿಶಿರ್ ಈ ಅರ್ಜಿ ಸಲ್ಲಿಸಿದ್ದರು. ರಾಹುಲ್ ಗಾಂಧಿ ಅವರು ಆದಾಯಕ್ಕಿಂತ ಹೆಚ್ಚಿನ ಆಸ್ತಿಯನ್ನು ಹೊಂದಿದ್ದಾರೆ ಎಂದು ಅವರು ಆರೋಪಿಸಿದ್ದರು. ರಾಹುಲ್ ಗಾಂಧಿ ಮತ್ತು ಅವರ ಕುಟುಂಬದ ಇತರ ಸದಸ್ಯರ ವಿರುದ್ಧ ತನಿಖೆ ನಡೆಸುವಂತೆಯೂ ಅವರು ಕೋರಿದ್ದರು.
ಈ ಪ್ರಕರಣದಲ್ಲಿ ಹಿರಿಯ ವಕೀಲ ಕಪಿಲ್ ಸಿಬಲ್ ಅವರು ರಾಹುಲ್ ಗಾಂಧಿ ಪರವಾಗಿ ವಾದಿಸಿದ್ದರು.