×
Ad

ಉತ್ತರ ಪ್ರದೇಶ | ಮದುವೆ ಮನೆಯಲ್ಲಿ ನೃತ್ಯ ಮಾಡುವ ವಿಚಾರಕ್ಕೆ ಗಲಾಟೆ : ಬಾಲಕನ ಕೊಲೆ

Update: 2025-03-08 21:14 IST

ಸಾಂದರ್ಭಿಕ ಚಿತ್ರ | PC : freepik.com

ಲಕ್ನೋ : ಉತ್ತರ ಪ್ರದೇಶದ ಬಲ್ಲಿಯಾದಲ್ಲಿ ಮದುವೆ ಮನೆಯಲ್ಲಿ ನೃತ್ಯ ಮಾಡುವ ವಿಚಾರಕ್ಕೆ ಸಂಬಂಧಿಸಿ ಗಲಾಟೆ ನಡೆದು ಬಾಲಕನ ಕೊಲೆಯಲ್ಲಿ ಅಂತ್ಯವಾಗಿದೆ.

ಛಾಕ್ಕನ್ ಗ್ರಾಮದಲ್ಲಿ ಘಟನೆ ನಡೆದಿದೆ. ಮೃತ ಬಾಲಕನನ್ನು ಕೃಷ್ಣ ರಾಜ್‌ಭರ್‌(15) ಎಂದು ಗುರುತಿಸಲಾಗಿದೆ.

ವರದಿ ಪ್ರಕಾರ, ಶುಕ್ರವಾರ ರಾತ್ರಿ ಛಾಕ್ಕನ್ ಗ್ರಾಮದಲ್ಲಿ ವಿವಾಹ ಕಾರ್ಯಕ್ರಮದಲ್ಲಿ ಕೃಷ್ಣ ರಾಜ್‌ಭರ್‌ ಮತ್ತು ಆತನ ಸಂಬಂಧಿಯೋರ್ವರು ನೃತ್ಯ ಮಾಡುತ್ತಿದ್ದರು. ಈ ವೇಳೆ ವಾಗ್ವಾದ ನಡೆದು ಕೆಲವರು ಹಲ್ಲೆ ನಡೆಸಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡು ಕೃಷ್ಣ ರಾಜಭರ್ ಸ್ಥಳದಲ್ಲೇ ಮೃತಪಟ್ಟರೆ, ಮತ್ತೋರ್ವ ಗಾಯಗೊಂಡಿದ್ದಾರೆ.

ಘಟನೆ ಬಗ್ಗೆ ಮಾಹಿತಿ ಪಡೆದ ತಕ್ಷಣ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಬಾಲಕನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಘಟನೆಯನ್ನು ಖಂಡಿಸಿ ಬಾಲಕನ ಕುಟುಂಬಸ್ಥರು ಮತ್ತು ಗ್ರಾಮಸ್ಥರು ಸಿಕಂದರಪುರ ಪಟ್ಟಣದ ಗೋರಖ್ಪುರ-ಬಲ್ಲಿಯಾ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಆರೋಪಿಗಳನ್ನು ಶೀಘ್ರವಾಗಿ ಬಂಧಿಸುವಂತೆ ಆಗ್ರಹಿಸಿದರು.

ಪೊಲೀಸ್ ಅಧೀಕ್ಷಕ ಓಂವಿರ್ ಸಿಂಗ್ ಈ ಕುರಿತು ಪ್ರತಿಕ್ರಿಯಿಸಿ, ರಾಜ್‌ಭರ್‌ ಮತ್ತು ಆತನ ಸಂಬಂಧಿಕರೋರ್ವರು ನೃತ್ಯ ಮಾಡುವ ವಿಚಾರಕ್ಕೆ ಗಲಾಟೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಘಟನೆಯಿಂದ ಇಡೀ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದ್ದು, ಆರೋಪಿಗಳ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಹೇಳಿದರು.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News