ಚುನಾವಣೆಗೆ ಇನ್ನೂ ಎರಡು ವರ್ಷ; ಯಾದಗಿರಿ ಬಿಜೆಪಿಯಲ್ಲಿ ಟಿಕೆಟ್ ಆಕಾಂಕ್ಷಿಗಳ ಪೈಪೋಟಿ?
ಯಾದಗಿರಿ: ವಿಧಾನಸಭಾ ಚುನಾವಣೆಗೆ ಇನ್ನೂ ಎರಡು ವರ್ಷ ಬಾಕಿಯಿದ್ದರೂ, ಜಿಲ್ಲೆಯ ಬಿಜೆಪಿಯಲ್ಲಿ ಟಿಕೆಟ್ ಆಕಾಂಕ್ಷಿಗಳ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿವೆ. ಪಕ್ಷ ಸಂಘಟನೆಯ ಚಟುವಟಿಕೆಗಳಿಂತ ವೈಯಕ್ತಿಕ ವರ್ಚಸ್ಸು ಹಾಗೂ ಬೆಂಬಲಿಗರ ಬಳಗವನ್ನು ಗಟ್ಟಿಗೊಳಿಸುವ ಪ್ರಯತ್ನಗಳೇ ಹೆಚ್ಚಾಗಿ ಗೋಚರಿಸುತ್ತಿವೆ ಎಂಬ ಚರ್ಚೆ ಕಾರ್ಯಕರ್ತರ ವಲಯದಲ್ಲೇ ಕೇಳಿಬರುತ್ತಿದೆ.
ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರ ೧೨ ವರ್ಷಗಳ ಆಡಳಿತ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡ ರಾಚಣ್ಣಗೌಡ ಮುದ್ನಾಳ ಅವರು ಮೈಲಾರಲಿಂಗೇಶ್ವರ ಗದ್ದುಗೆಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದರು. ಮತ್ತೊಂದೆಡೆ ಬಿಜೆಪಿ ರಾಜ್ಯ ಕಾರ್ಯಕಾರಿ ಸದಸ್ಯ ಮಹೇಶರಡ್ಡಿ ಮುದ್ನಾಳ ಅವರು ನಗರದ ಲಕ್ಷ್ಮೀ ದೇವಸ್ಥಾನದಲ್ಲಿ ಪ್ರತ್ಯೇಕ ಪೂಜೆ ನೆರವೇರಿಸಿದರು.
ಒಂದೇ ವಿಷಯದ ಹಿನ್ನೆಲೆಯಲ್ಲಿ ಇಬ್ಬರು ನಾಯಕರು ಪ್ರತ್ಯೇಕ ಕಾರ್ಯಕ್ರಮಗಳನ್ನು ಆಯೋಜಿಸಿರುವುದು ಪಕ್ಷದೊಳಗಿನ ನಾಯಕತ್ವದ ಪೈಪೋಟಿ ಬಗ್ಗೆ ಚರ್ಚೆಗೆ ಕಾರಣವಾಗಿದೆ.
ಕಳೆದ ಕೆಲವು ದಿನಗಳಿಂದ ಬಿಜೆಪಿ ರಾಜ್ಯ ಕಾರ್ಯಕಾರಿ ಸದಸ್ಯ ಮಹೇಶರಡ್ಡಿ ಮುದ್ನಾಳ ಅವರು ಮಾಧ್ಯಮ ಪ್ರತಿನಿಧಿಗಳಿಗೆ ಔತಣ ಕೂಟ ಏರ್ಪಡಿಸಿದರೆ, ರಾಚಣ್ಣಗೌಡ ಮುದ್ನಾಳ ಅವರು ಕಾರ್ಯಕರ್ತರನ್ನು ಶ್ರೀಶೈಲ ಯಾತ್ರೆಗೆ ಕರೆದೊಯ್ಯುವ ಮೂಲಕ ತಮ್ಮ ಬೆಂಬಲಿಗರ ಶಕ್ತಿ ಪ್ರದರ್ಶನ ನಡೆಸಿದ್ದಾರೆ ಎಂಬ ಮಾತು ಪಕ್ಷದಲ್ಲಿ ಕೇಳಿಬರುತ್ತಿದೆ.
ಇದೇ ವೇಳೆ, ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ 12 ವರ್ಷಗಳ ಸಾಧನೆಗಳ ಕುರಿತು ಮಾಧ್ಯಮ ಸಂವಾದ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ವಿಪ ಸದಸ್ಯ ಶಶೀಲ್ ಜಿ. ನಮೋಶಿ ಭಾಗವಹಿಸಿದ್ದರೂ, ಜಿಲ್ಲಾ ಬಿಜೆಪಿ ಅಧ್ಯಕ್ಷ ಬಸವರಾಜಪ್ಪ ಗೌಡ ವಿಭೂತಿಹಳ್ಳಿ ಹಾಗೂ ಬಿಜೆಪಿ ಮುಖಂಡ ರಾಚಣ್ಣಗೌಡ ಮುದ್ನಾಳ ಗೈರಾಗಿರುವುದು ಮತ್ತಷ್ಟು ಗೊಂದಲ ಮೂಡಿಸಿದೆ.
ಟಿಕೆಟ್ ಆಕಾಂಕ್ಷಿಗಳ ಪಟ್ಟಿಯಲ್ಲಿ ಹಲವು ಹೆಸರುಗಳು ಕೇಳಿಬರುತ್ತಿವೆ. ಅದರಲ್ಲೂ ಮಹೇಶರಡ್ಡಿ ಮುದ್ನಾಳ ಹಾಗೂ ರಾಚಣ್ಣ ಗೌಡ ಮುದ್ನಾಳ ಅವರ ಹೆಸರು ಪ್ರಮುಖವಾಗಿ ಚರ್ಚೆಯಾಗುತ್ತಿವೆ. ಇದೇ ಕಾರಣಕ್ಕೆ ನಾಯಕರ ಪ್ರತ್ಯೇಕ ಚಟುವಟಿಕೆಗಳು ಹೆಚ್ಚಾಗಿವೆ ಎಂಬ ಮಾತು ಕೇಳಿಬರುತ್ತಿದೆ.
ನಾಯಕತ್ವ ಸ್ಪಷ್ಟವಾಗಲಿ: ಕಾರ್ಯಕರ್ತರ ಆಗ್ರಹ: ಜಿಲ್ಲೆಯಲ್ಲಿ ಈ ಬಾರಿ ಬಿಜೆಪಿ ಅಧಿಕಾರದ ಹಿಡಿಯಲೇಬೇಕು ಎಂಬುದು ಸಾಮಾನ್ಯ ಕಾರ್ಯಕರ್ತರ ಆಶಯವಾಗಿದೆ. ನಾವು ಪಕ್ಷದ ಬೆಳವಣಿಗೆಗಾಗಿ ನಿರಂತರವಾಗಿ ದುಡಿಯುತ್ತಿದ್ದೇವೆ. ಆದರೆ ಜಿಲ್ಲೆಯ ಮಟ್ಟದಲ್ಲಿ ಪಕ್ಷದ ನಾಯಕತ್ವ ಯಾರ ಕೈಯಲ್ಲಿದೆ ಎಂಬುದು ಕಾರ್ಯಕರ್ತರಿಗೆ ಸ್ಪಷ್ಟವಾಗುತ್ತಿಲ್ಲ. ಹೀಗೇ ಮುಂದುವರಿದರೆ ಮುಂಬರುವ ಚುನಾವಣೆಯಲ್ಲಿ ಪಕ್ಷಕ್ಕೆ ಹೊಡೆತ ಬೀಳುವ ಸಾಧ್ಯತೆ ಇದೆ. ಎಲ್ಲ ನಾಯಕರು ವೈಯಕ್ತಿಕ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ, ಕಾರ್ಯಕರ್ತರೊಂದಿಗೆ ಒಗ್ಗಟ್ಟಿನಿಂದ ಕೆಲಸ ಮಾಡಬೇಕು’ ಎಂದು ಹೆಸರು ಬಹಿರಂಗಪಡಿಸಲು ಇಚ್ಛಿಸದ ಬಿಜೆಪಿ ಕಾರ್ಯಕರ್ತರೊಬ್ಬರು ಹೇಳಿದರು.
ಬಿಜೆಪಿಯಲ್ಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯ ಅಥವಾ ಪ್ರತ್ಯೇಕ ಚಟುವಟಿಕೆಗಳಿಲ್ಲ. ಪಕ್ಷದ ಎಲ್ಲಾ ನಾಯಕರು ಹಾಗೂ ಕಾರ್ಯಕರ್ತರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುತ್ತಿದ್ದೇವೆ. ಕೆಲವೊಮ್ಮೆ ವೈಯಕ್ತಿಕ ಕಾರಣಗಳಿಂದ ಎಲ್ಲ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಸಾಧ್ಯವಾಗದೇ ಇರಬಹುದು. ಅದನ್ನು ಭಿನ್ನಾಭಿಪ್ರಾಯವೆಂದು ಬಿಂಬಿಸುವುದು ಸರಿಯಲ್ಲ. ಪಕ್ಷದೊಳಗೆ ಗೊಂದಲ ಇಲ್ಲ.
-ರಾಚಣ್ಣಗೌಡ, ಬಿಜೆಪಿ ಮುಖಂಡ
ಯಾದಗಿರಿ ಜಿಲ್ಲಾ ಬಿಜೆಪಿಯಲ್ಲಿ ಯಾವುದೇ ಬಣ ರಾಜಕೀಯ ಇಲ್ಲ. ಪಕ್ಷದ ಮುಖಂಡರಾದ ರಾಚಣ್ಣಗೌಡ ಮುದ್ನಾಳ ಹಾಗೂ ಮಹೇಶರಡ್ಡಿ ಮುದ್ನಾಳ ಇಬ್ಬರೂ ಟಿಕೆಟ್ ಆಕಾಂಕ್ಷಿಗಳಾಗಿದ್ದರೂ, ಅವರ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಪಕ್ಷ ಸಂಘಟನೆ ಬಲಪಡಿಸುವ ನಿಟ್ಟಿನಲ್ಲಿ ಎಲ್ಲ ಕಾರ್ಯಕರ್ತರನ್ನು ಒಗ್ಗೂಡಿಸಿಕೊಂಡು ಹೋಗುವ ಕೆಲಸ ಮಾಡುತ್ತಿದ್ದಾರೆ. ಬಿಜೆಪಿ ಕಾರ್ಯಕರ್ತರು ಮತ್ತು ನಾಯಕರು ಎಲ್ಲರೂ ಪಕ್ಷದ ಗೆಲುವನ್ನೇ ಗುರಿಯಾಗಿಸಿಕೊಂಡು ಕೆಲಸ ಮಾಡುತ್ತಿದ್ದಾರೆ.
-ಪರಶುರಾಮ ಕುರಕುಂದಿ
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ
ಪಕ್ಷದೊಳಗೆ ಯಾವುದೇ ಬಣ ಇಲ್ಲ. ರಾಚಣ್ಣಗೌಡ ಅವರು ಟಿಕೆಟ್ ಆಕಾಂಕ್ಷಿಯಾಗಿದ್ದು, ತಮಗೂ ಒಂದು ಬಾರಿ ಅವಕಾಶ ಕೊಡಿ ಎಂದು ಪ್ರಯತ್ನಿಸುತ್ತಿದ್ದಾರೆ. ಮಹೇಶರಡ್ಡಿ ಅವರೂ ಟಿಕೆಟ್ ಆಕಾಂಕ್ಷಿಯಾಗಿದ್ದು, ತಮ್ಮದೇ ರೀತಿಯಲ್ಲಿ ಪ್ರಯತ್ನ ಮಾಡುತ್ತಿದ್ದಾರೆ. ಆದರೆ, ಕಾರ್ಯಕರ್ತರ ಕಣ್ಣಿಗೆ ಇಬ್ಬರೂ ಬೇರೆ ಬೇರೆ ಚಟುವಟಿಕೆಗಳನ್ನು ಮಾಡುತ್ತಿರುವಂತೆ ಕಾಣುತ್ತಿದೆ ಅಷ್ಟೇ. ವಾಸ್ತವದಲ್ಲಿ ಅಂತಹದೇನೂ ಇಲ್ಲ.
-ಶಿವರಾಜ ದಾಸನಕೇರಿ
ಬಿಜೆಪಿ ಕಾರ್ಯಕರ್ತ