ವಿವಾದದಲ್ಲೂಬಿ.ನಾಗೇಂದ್ರಗೆ ಮತ್ತೆ ಮಂತ್ರಿಗಿರಿ
ಕಾರ್ಯಕರ್ತರಲ್ಲಿ ಮೂಡಿದ ಆತ್ಮವಿಶ್ವಾಸ
ಬಳ್ಳಾರಿ: ರಾಜಕೀಯ ಏರಿಳಿತಗಳು, ಆರೋಪ-ಪ್ರತ್ಯಾರೋಪಗಳು ಮತ್ತು ಕಾನೂನು ಹೋರಾಟಗಳಿಂದ ಪ್ರಚಲಿತದಲ್ಲಿರುವ ಬಳ್ಳಾರಿ ಗ್ರಾಮೀಣ ಕ್ಷೇತ್ರದ ಶಾಸಕ ಬಿ. ನಾಗೇಂದ್ರ ಮತ್ತೊಮ್ಮೆ ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ಪಡೆದಿದ್ದಾರೆ. ಈ ಬೆಳವಣಿಗೆ ಬಳ್ಳಾರಿ, ವಿಜಯನಗರ ಭಾಗದ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಮೂಡಿಸಿದೆ.
ಬಳ್ಳಾರಿ ಜಿಲ್ಲೆಯ ರಾಜಕೀಯದಲ್ಲಿ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿರುವ ಬಿ. ನಾಗೇಂದ್ರ ಬಿಜೆಪಿ ಮೂಲಕ ರಾಜಕೀಯ ಪ್ರವೇಶಿಸಿ, ಬಳಿಕ ಸ್ವತಂತ್ರ ಅಭ್ಯರ್ಥಿಯಾಗಿಯೂ ಗೆಲುವು ಸಾಧಿಸಿದ್ದರು. ನಂತರ ಕಾಂಗ್ರೆಸ್‌ಗೆ ಸೇರ್ಪಡೆಗೊಂಡು 2023ರ ವಿಧಾನಸಭೆ ಚುನಾವಣೆಯಲ್ಲಿ ಬಳ್ಳಾರಿ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧಿಸಿ ಮಾಜಿ ಸಚಿವ ಬಿ. ಶ್ರೀರಾಮುಲು ಅವರನ್ನು ಸುಮಾರು 29,500 ಮತಗಳ ಅಂತರದಿಂದ ಸೋಲಿಸಿ ಪ್ರಾಬಲ್ಯ ಕಾಪಾಡಿಕೊಂಡಿದ್ದಾರೆ.
1993ರಲ್ಲಿ ಬಳ್ಳಾರಿಯ ವೀರಶೈವ ಕಾಲೇಜಿನಲ್ಲಿ ಬಿ.ಕಾಂ. ಪದವಿ ಪಡೆದಿರುವ ನಾಗೇಂದ್ರ ಅವರು ವಿದ್ಯಾರ್ಥಿ ಜೀವನದಿಂದಲೇ ಸಾರ್ವಜನಿಕ ಬದುಕಿನಲ್ಲಿ ಸಕ್ರಿಯರಾಗಿದ್ದರು. 2008ರಿಂದ 2018ರವರೆಗೆ ಕೂಡ್ಲಿಗಿ ಕ್ಷೇತ್ರವನ್ನು ಪ್ರತಿನಿಧಿಸಿದ ಅವರು, ನಂತರ ಬಳ್ಳಾರಿ ಗ್ರಾಮೀಣ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿ ಜನಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
2024ರಲ್ಲಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ನಿಧಿ ದುರುಪಯೋಗ ಪ್ರಕರಣದಲ್ಲಿ ಅವರ ಹೆಸರು ಪ್ರಸ್ತಾಪಗೊಂಡಿತ್ತು. ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ ಅವರನ್ನು ಬಂಧಿಸಿತ್ತು. ಈ ಬೆಳವಣಿಗೆಯ ನಂತರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ವಿಶೇಷ ನ್ಯಾಯಾಲಯದಿಂದ ಜಾಮೀನು ಪಡೆದ ಅವರು ತನಿಖೆಗೆ ಸಹಕರಿಸುತ್ತಿದ್ದು, ಪ್ರಕರಣದ ವಿಚಾರಣೆ ಇನ್ನೂ ನ್ಯಾಯಾಲಯದಲ್ಲಿ ಮುಂದುವರಿದಿದೆ. ಆರೋಪಗಳ ಕುರಿತು ಅಂತಿಮ ನ್ಯಾಯಾಂಗ ತೀರ್ಪು ಇನ್ನೂ ಹೊರಬಂದಿಲ್ಲ.
ಈ ಎಲ್ಲ ಬೆಳವಣಿಗೆಗಳ ನಡುವೆಯೂ ಮತ್ತೆ ಸಚಿವ ಸಂಪುಟದಲ್ಲಿ ಅವಕಾಶ ದೊರೆತಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಬಳ್ಳಾರಿ ಭಾಗಕ್ಕೆ ಸಚಿವ ಸಂಪುಟದಲ್ಲಿ ಮತ್ತೊಮ್ಮೆ ಪ್ರಾತಿನಿಧ್ಯ ದೊರೆತಿರುವುದರಿಂದ ಜಿಲ್ಲೆಯ ಅಭಿವೃದ್ಧಿ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ಸಿಗಬಹುದು ಎಂಬ ನಿರೀಕ್ಷೆ ವ್ಯಕ್ತವಾಗಿದೆ.