ಸಿಂಧನೂರು: ಸಚಿವ ಸ್ಥಾನದ ಆಕಾಂಕ್ಷಿಯಾಗಿರುವ ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿ ಅವರಿಗೆ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಸ್ಥಾನ ನೀಡಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ನಿಗಮದ ಅಧ್ಯಕ್ಷ ಸ್ಥಾನ ನೀಡುವ ಮೂಲಕ ಕಾಂಗ್ರೆಸ್ ಹೈಕಮಾಂಡ್ ಹಾಗೂ ರಾಜ್ಯ ಸರಕಾರ ಸಮಾಧಾನ ಸೂತ್ರ ಅನುಸರಿಸಿದೆಯೇ ಎಂಬ ಪ್ರಶ್ನೆಯೂ ಎದುರಾಗಿದೆ.

ಐದು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಹಂಪನ ಗೌಡ ಬಾದರ್ಲಿ ಅವರು 2023ರಿಂದಲೇ ಸಚಿವ ಸ್ಥಾನಕ್ಕಾಗಿ ಪ್ರಬಲ ಆಕಾಂಕ್ಷಿಯಾಗಿದ್ದರು. ಸಿದ್ದರಾಮಯ್ಯ ನೇತೃತ್ವದ ಸರಕಾರದ ಅವಧಿಯಲ್ಲಿ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿದರೂ, ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಅದನ್ನು ಸ್ವೀಕರಿಸದೆ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ವಿಚಾರ ಪಕ್ಷದೊಳಗೂ ಕಾರ್ಯಕರ್ತರ ವಲಯದಲ್ಲೂ ಚರ್ಚೆಗೆ ಗ್ರಾಸವಾಗಿತ್ತು.

ನಂತರ ರಾಜ್ಯ ರಾಜಕಾರಣದಲ್ಲಿ ಬದಲಾವಣೆಗಳಾದರೂ, ಸಚಿವ ಸಂಪುಟ ಸೇರುವ ನಿಟ್ಟಿನಲ್ಲಿ ಬಾದರ್ಲಿ ಪ್ರಯತ್ನ ಮುಂದುವರಿಸಿದ್ದರು ಎನ್ನಲಾಗಿದೆ.

ದಿಲ್ಲಿ ಮಟ್ಟದಲ್ಲಿಯೂ ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸಿದ್ದರು ಎಂಬ ಮಾತುಗಳು ಕೇಳಿಬಂದಿದ್ದವು. ಆದರೆ, ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟದಲ್ಲೂ ಅವರಿಗೆ ಅವಕಾಶ ದೊರೆಯಲಿಲ್ಲ. ಇದರಿಂದ ಅವರ ಬೆಂಬಲಿಗರು ಹಾಗೂ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದರು.

ಐದು ಬಾರಿ ಶಾಸಕರಾಗಿ ಪಕ್ಷಕ್ಕೆ ಕೊಡುಗೆ ನೀಡಿರುವ ಬಾದರ್ಲಿ ಅವರನ್ನು ಕಾಂಗ್ರೆಸ್ ನಿರ್ಲಕ್ಷಿಸುತ್ತಿದೆ ಎಂಬ ಆರೋಪದ ನಡುವೆ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಸ್ಥಾನ ನೀಡಿರುವುದು ರಾಜಕೀಯ ಸಮಾಧಾನದ ಪ್ರಯತ್ನವೇ ಎಂಬ ವಿಶ್ಲೇಷಣೆಗಳು ಕೇಳಿಬರುತ್ತಿವೆ.

ನಿಗಮದ ಅಧ್ಯಕ್ಷ ಸ್ಥಾನವನ್ನು ಬಾದರ್ಲಿ ಸ್ವೀಕರಿಸುತ್ತಾರೆಯೇ ಅಥವಾ ಸಚಿವ ಸ್ಥಾನಕ್ಕಾಗಿ ಪ್ರಯತ್ನ ಮುಂದುವರಿಸುತ್ತಾರೆಯೇ ಎಂಬುದು ಕುತೂಹಲ ಮೂಡಿಸಿದೆ. ಪಕ್ಷದ ನಿರ್ಧಾರಕ್ಕೆ ಸಹಮತ ಸೂಚಿಸಿ ಅಧ್ಯಕ್ಷ ಸ್ಥಾನ ಅಲಂಕರಿಸುತ್ತಾರಾ ಅಥವಾ ಸಚಿವ ಸ್ಥಾನದ ಬೇಡಿಕೆಯನ್ನು ಮತ್ತಷ್ಟು ಬಲಪಡಿಸುತ್ತಾರಾ ಎಂಬ ಚರ್ಚೆ ಅವರ ಬೆಂಬಲಿಗರ ವಲಯದಲ್ಲೂ ನಡೆಯುತ್ತಿದೆ.

ಇತ್ತೀಚೆಗೆ ಬಿಡುಗಡೆಯಾದ ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕಾತಿ ಪಟ್ಟಿಯಲ್ಲಿ ಹಂಪನಗೌಡ ಬಾದರ್ಲಿ ಸೇರಿದಂತೆ ಹಲವು ಶಾಸಕರಿಗೆ ಜವಾಬ್ದಾರಿ ನೀಡಲಾಗಿದೆ. ಈ ನೇಮಕಾತಿಗಳ ಕುರಿತು ರಾಜಕೀಯ ವಲಯದಲ್ಲಿ ವಿವಿಧ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.

ಕೆಕೆಆರ್‌ಡಿಬಿ ಸ್ಥಾನ ಕೈಬಿಟ್ಟಿದ್ದೇಕೆ?

ಹಂಪನಗೌಡ ಬಾದರ್ಲಿ ಅವರು ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಅಧ್ಯಕ್ಷ ಸ್ಥಾನಕ್ಕೂ ಆಸಕ್ತಿ ಹೊಂದಿದ್ದರು ಎನ್ನಲಾಗಿತ್ತು. ಆದರೆ, ಕೊನೆ ಕ್ಷಣದಲ್ಲಿ ಆ ಸ್ಥಾನವನ್ನು ನಿರಾಕರಿಸಿದ್ದಾರೆ ಎಂಬ ಚರ್ಚೆ ಇದೀಗ ಮುನ್ನೆಲೆಗೆ ಬಂದಿದೆ.

ಕೆಕೆಆರ್‌ಡಿಬಿ ಅಧ್ಯಕ್ಷ ಸ್ಥಾನ ಅಲಂಕರಿಸಿದವರು ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಸೋಲನುಭವಿಸುತ್ತಾರೆ ಎಂಬ ರಾಜಕೀಯ ನಂಬಿಕೆ ಸ್ಥಳೀಯವಾಗಿ ಇದೆ ಎನ್ನಲಾಗುತ್ತಿದೆ. ಇದೇ ಕಾರಣಕ್ಕೆ ಬಾದರ್ಲಿ ಅವರು ಆ ಸ್ಥಾನವನ್ನು ಕೈಬಿಟ್ಟರೇ ಎಂಬ ಕುತೂಹಲ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಮೂಡಿದೆ.

ಒಟ್ಟಿನಲ್ಲಿ, ಸಚಿವ ಸ್ಥಾನಕ್ಕಾಗಿ ಹಲವು ವರ್ಷಗಳಿಂದ ಪ್ರಯತ್ನಿಸುತ್ತಿರುವ ಹಂಪನಗೌಡ ಬಾದರ್ಲಿ ಅವರಿಗೆ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಸ್ಥಾನ ನೀಡಿರುವುದು ಅವರ ರಾಜಕೀಯ ಭವಿಷ್ಯದ ದೃಷ್ಟಿಯಿಂದ ಮಹತ್ವ ಪಡೆದಿದೆ. ಅವರು ನಿಗಮದ ಅಧ್ಯಕ್ಷ ಸ್ಥಾನ ಸ್ವೀಕರಿಸಿ ಪಕ್ಷದ ನಿರ್ಧಾರಕ್ಕೆ ಸಹಮತ ಸೂಚಿಸುತ್ತಾರೆಯೇ ಅಥವಾ ಸಚಿವ ಸ್ಥಾನದ ಪ್ರಯತ್ನ ಮುಂದುವರಿಸುತ್ತಾರೆಯೇ ಎಂಬುದು ಮುಂದಿನ ದಿನಗಳಲ್ಲಿ ಸ್ಪಷ್ಟವಾಗಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಮಹಮ್ಮದ್ ಮುಸ್ತಫಾ ಕಾಟಮಳ್ಳಿ

contributor