ಸುಪ್ರೀಂ ಕೋರ್ಟ್‌ (Photo: PTI)

ಹೊಸದಿಲ್ಲಿ, ಅ. 15: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದ ದಾಖಲೆಗಳನ್ನು ಸಂಪೂರ್ಣವಾಗಿ ಬಹಿರಂಗಪಡಿಸುವಂತೆ ಕೋರಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ನೇತೃತ್ವದಲ್ಲಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಗುರುವಾರ ನಡೆಸಲಿದೆ.

ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು ವಿವೇಕ್‌ ಜೋಶಿ ಅವರು ದಾಖಲಿಸಿರುವ ಕಡತಗಳು, ಕಾರ್ಯಸೂಚಿಗಳು, ಸಭೆಯ ನಡಾವಳಿಗಳು, ಟಿಪ್ಪಣಿಗಳು ಹಾಗೂ ಆಕ್ಷೇಪಣೆಗಳನ್ನು ಬಹಿರಂಗಪಡಿಸುವಂತೆ ಕೋರಿ ರಾಹುಲ್‌ ಗಾಂಧಿ ಸೇರಿದಂತೆ ವಿರೋಧ ಪಕ್ಷಗಳ ನಾಯಕರು ಅ. 12ರಂದು ಜಂಟಿ ಅರ್ಜಿ ಸಲ್ಲಿಸಿದ್ದಾರೆ.

ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್‌ ಮತ್ತು ನ್ಯಾಯಮೂರ್ತಿ ಜಾಯ್‌ಮಾಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠವು ಅರ್ಜಿಯ ವಿಚಾರಣೆ ನಡೆಸಲಿದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ಅವರು ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಏಕಪಕ್ಷೀಯವಾಗಿ ಹಾಗೂ ನಿರಂಕುಶವಾಗಿ ನಡೆದುಕೊಂಡಿದ್ದಾರೆಯೇ ಎಂಬುದನ್ನು ಪರಿಶೀಲಿಸಲು ಚುನಾವಣಾ ಆಯೋಗದ ದಾಖಲೆಗಳನ್ನು ನ್ಯಾಯಾಂಗ ಪರಿಶೀಲನೆಗೆ ಒಳಪಡಿಸಬೇಕು ಎಂದು ರಾಹುಲ್‌ ಗಾಂಧಿ ಕೋರಿದ್ದಾರೆ.

ದೇಶದಾದ್ಯಂತ ಸುಮಾರು 13 ಕೋಟಿ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಎಸ್‌ಐಆರ್‌ ಪ್ರಕ್ರಿಯೆಯು ಚುನಾವಣಾ ವ್ಯವಸ್ಥೆಯ ಪಾವಿತ್ರ್ಯ ಮತ್ತು ನಿಷ್ಪಕ್ಷಪಾತದ ಬಗ್ಗೆ ಗಂಭೀರ ಕಳವಳಗಳನ್ನು ಹುಟ್ಟುಹಾಕಿದೆ ಎಂದು ವಿರೋಧ ಪಕ್ಷಗಳ ನಾಯಕರು ಹೇಳಿದ್ದಾರೆ.

ಅರ್ಹ ನಾಗರಿಕರು ಮತದಾರರಾಗಿ ನೋಂದಾಯಿಸಿಕೊಳ್ಳುವ ಹಾಗೂ ಮತದಾನದ ಹಕ್ಕು ಚಲಾಯಿಸುವ ಸಾಂವಿಧಾನಿಕ ಹಕ್ಕಿಗೆ ಈ ಪ್ರಕ್ರಿಯೆಯಿಂದ ಧಕ್ಕೆಯಾಗುತ್ತಿದೆ ಎಂಬುದು ಅವರ ಆರೋಪ. ಅರ್ಜಿಯಲ್ಲಿನ ವಿಷಯಗಳ ಕುರಿತು ವಿಚಾರಣೆ ನಡೆಸಿ ತೀರ್ಪು ನೀಡುವವರೆಗೆ ಎಸ್‌ಐಆರ್‌ ಪ್ರಕ್ರಿಯೆಯನ್ನು ಸ್ಥಗಿತಗೊಳಿಸುವಂತೆ ರಾಹುಲ್‌ ಗಾಂಧಿ ಮಧ್ಯಂತರ ಆದೇಶವನ್ನೂ ಕೋರಿದ್ದಾರೆ.

‘ರಾಜಕೀಯ ಒಲವು ಏನೇ ಇದ್ದರೂ, ಮತದಾನದ ಹಕ್ಕು ಪ್ರತಿಯೊಬ್ಬ ಅರ್ಹ ನಾಗರಿಕನಿಗೂ ಸೇರಿದೆ. ಪಕ್ಷ ರಾಜಕೀಯವನ್ನು ಮೀರಿ ಈ ಹಕ್ಕನ್ನು ರಕ್ಷಿಸುವುದು ಸಾಂವಿಧಾನಿಕ ಕರ್ತವ್ಯ’ ಎಂದು ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರ ಮೂಲಕ ವಕೀಲ ಪ್ರಸನ್ನ ಎಸ್. ಸಲ್ಲಿಸಿರುವ ಅರ್ಜಿಯಲ್ಲಿ ತಿಳಿಸಲಾಗಿದೆ.

ಪ್ರತಿಭಟನಾಕಾರರ ಅರ್ಜಿಗಳ ವಿಚಾರಣೆಯೂ ಇಂದು

ಅ. 10ರಂದು ಪ್ರತಿಭಟನಾಕಾರರ ಮೇಲೆ ಪೊಲೀಸರು ಕೈಗೊಂಡ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಿರುವ ಇತರ ಅರ್ಜಿಗಳ ವಿಚಾರಣೆಯೂ ಇದೇ ಪೀಠದ ಮುಂದೆ ನಡೆಯಲಿದೆ. ಮುಖ್ಯ ಚುನಾವಣಾ ಆಯುಕ್ತರ ವಿರುದ್ಧದ ಪ್ರತಿಭಟನೆ ಹಾಗೂ ದಿಲ್ಲಿಯಲ್ಲಿ ಸಾರಿಗೆ ಸೇವೆಗಳ ಸ್ಥಗಿತಕ್ಕೆ ಸಂಬಂಧಿಸಿದ ಅರ್ಜಿಗಳು ವಿಚಾರಣೆಗೆ ಬರಲಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor