ರಾಯಚೂರಿನಲ್ಲಿ 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ
ರಾಯಚೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ರಾಯಚೂರು ಮಹಾನಗರ ಪಾಲಿಕೆ, ಆಯುಷ್ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಂಯುಕ್ತಾಶ್ರದಲ್ಲಿ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಜೂನ್ 21ರ ರವಿವಾರದಂದು ನಗರದ ಮಹ್ಮಾತಗಾಂಧಿ ಕ್ರೀಡಾಂಗಣದಲ್ಲಿ ಸಾಮೂಹಿಕ ಯೋಗ ಕಾರ್ಯಕ್ರಮ ನಡೆಯಿತು.
ಕರ್ನಾಟಕ ಮಾಹಿತಿ ಆಯೋಗದ ಕಲಬುರಗಿ ಪೀಠದ ರಾಜ್ಯ ಮಾಹಿತಿ ಆಯುಕ್ತರಾದ ಬಿ.ವೆಂಕಟ್ ಸಿಂಗ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಅರುಣಾಂಗ್ಷು ಗಿರಿ, ರಾಯಚೂರು ವಿಭಾಗದ ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ವೇಳೆ ಕರ್ನಾಟಕ ಮಾಹಿತಿ ಆಯೋಗದ ಕಲಬುರಗಿ ಪೀಠದ ರಾಜ್ಯ ಮಾಹಿತಿ ಆಯುಕ್ತರಾದ ಬಿ.ವೆಂಕಟ್ ಸಿಂಗ್ ಅವರು ಮಾತನಾಡಿ, ಯೋಗವು ಶರೀರಕ್ಕೆ ಆರೋಗ್ಯವನ್ನು, ಮನಸ್ಸಿಗೆ ಆನಂದವನ್ನು ಕೊಟ್ಟು, ಕ್ರಿಯಾಶೀಲವಾಗಿರಲು ದಿವ್ಯ ಔಷಧವಾಗಿದೆ. ಒತ್ತಡದ ಜೀವನದ ಮಧ್ಯೆ ಈ ಸಾಧನೆಗೆ ದಿನದ ಕನಿಷ್ಠ ಕೆಲ ಸಮಯ ಮೀಸಲಿಡಬೇಕು ಎಂದರು.
ಇದಕ್ಕೂ ಮೊದಲು ನಗರದ ಮಹ್ಮಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಯೋಗ ದಿನಾಚರಣೆ ಅಂಗವಾಗಿ ಯೋಗ ಶಿಕ್ಷಕರು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ವಿವಿಧ ಯೋಗಾಸನಗಳ ಅಭ್ಯಾಸ ಮಾಡಿಸಿದರು.
ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಗಣ್ಯರು, ವಿದ್ಯಾರ್ಥಿಗಳು, ಯೋಗ ಸಂಸ್ಥೆಗಳ ಪದಾಧಿಕಾರಿಗಳು, ಸಾರ್ವಜನಿಕರು ಯೋಗ ಅಭ್ಯಾಸ ಮಾಡಿದರು. ನಂತರ ಯೋಗ ಸ್ಪರ್ಧೆಯಲ್ಲಿ ವಿಜೇತರಿಗೆ ಪ್ರಮಾಣಪತ್ರ ವಿತರಿಸಲಾಯಿತು.
ಇದೇ ಸಂದರ್ಭದಲ್ಲಿ ರಾಯಚೂರು ಮಹಾನಗರ ಪಾಲಿಕೆಯ ಕಂದಾಯ ವಿಭಾಗದ ಉಪ ಆಯುಕ್ತೆ ಸಂತೋಷ ರಾಣಿ, ಜಿಲ್ಲಾ ಆಯುಷ್ ಇಲಾಖೆಯ ಅಧಿಕಾರಿ ಡಾ.ಶಂಕರಗೌಡ ಪಾಟೀಲ, ರಾಯಚೂರು ಮಹಾನಗರ ಪಾಲಿಕೆಯ ಸದಸ್ಯ ಕಾರ್ಯದರ್ಶಿ ಕೃಷ್ಣ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವೀರೇಶ ನಾಯಕ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸುನೀತಾ, ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಮುಖ್ಯಸ್ಥ ಸ್ಮಿತಾ ಅಕ್ಕೊರು, ಯೋಗ ಶಿಕ್ಷಕ ತಿಮ್ಮಪ್ಪ ವಡ್ಡಿಪಲ್ಲಿ, ಯೋಗ ನ್ಯಾಚೋರೋಪತಿ ವೈದ್ಯಾಧಿಕಾರಿ ಡಾ.ಪೂಜಾ ಸೇರಿದಂತೆ ವಿವಿಧ ಸಂಘಸಂಸ್ಥೆಯ ಮುಖಂಡರು, ವಿದ್ಯಾರ್ಥಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.