ರಾಯಚೂರು | ಅತಿಥಿ ಶಿಕ್ಷಕರನ್ನು ಶೀಘ್ರವಾಗಿ ನೇಮಕ ಮಾಡಿ : ಜಿ.ಕೆ.ನಾಗರಾಜ ಒತ್ತಾಯ
ರಾಯಚೂರು: ಶಾಲಾ ಆರಂಭವಾಗುವ ವೇಳೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಬೇಕು, ಮೆರಿಟ್ ಆಧಾರದ ಮೇಲೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವ ಬದಲು ಸೇವಾ ಆಧಾರದ ಮೇಲೆ ನೇಮಕ ಮಾಡಿಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಸರಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಅತಿಥಿ ಶಿಕ್ಷಕರ ಸಂಘದ ರಾಯಚೂರು ತಾಲೂಕು ಘಟಕದ ಅಧ್ಯಕ್ಷ ಜಿ.ಕೆ.ನಾಗರಾಜ ಶಿಕ್ಷಣ ಸಚಿವರಿಗೆ ಒತ್ತಾಯಿಸಿದರು.
ಕರ್ನಾಟಕದಲ್ಲಿ ಮೇ.29ರಿಂದ ಈ ಬಾರಿಯ ಶೈಕ್ಷಣಿಕ ವರ್ಷ ಆರಂಭವಾಗುತ್ತಿದೆ. ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ 60 ಸಾವಿರ ಶಿಕ್ಷಕರ ಕೊರತೆಯಿದೆ. 50,000 ಪ್ರಾಥಮಿಕ ಶಾಲಾ ಶಿಕ್ಷಕರ ಕೊರತೆಯಿದೆ. ಪ್ರೌಢ ಶಾಲೆಯಲ್ಲಿ 10,000 ಶಿಕ್ಷಕರ ಕೊರತೆಯಿದೆ. ಇಂತಹ ಪರಿಸ್ಥಿತಿಯಲ್ಲಿ ಮಕ್ಕಳ ಕಲಿಕೆಗೆ ತೊಂದರೆಯಾಗುತ್ತದೆ. ಶೈಕ್ಷಣಿಕ ಗುಣಮಟ್ಟ ಕುಸಿಯುತ್ತಿದೆ. ಆದ್ದರಿಂದ ಶಾಲೆ ಆರಂಭದಲ್ಲೇ ಈ ಹಿಂದೆ ಅತಿಥಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸಿದ ಅತಿಥಿ ಶಿಕ್ಷಕರನ್ನು ನೇಮಕ ಮಾಡಿ ಶಾಲಾ ಚಟುವಟಿಕೆಗಳಿಗೆ ಅನುಕೂಲ ಕಲ್ಪಿಸಿ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಸರಕಾರ ಮುಂದಾಗಬೇಕು ಎಂದು ಶಿಕ್ಷಣ ಸಚಿವರಿಗೆ ಜಿ.ಕೆ.ನಾಗರಾಜ ಆಗ್ರಹಿಸಿದರು.