ಸರಕಾರಿ ಕಾಲೇಜುಗಳಿಗೆ ಶೀಘ್ರವೇ ಅತಿಥಿ ಉಪನ್ಯಾಸಕರ ನೇಮಕಾತಿ : ಸಚಿವ ಶರಣಪ್ರಕಾಶ್ ಪಾಟೀಲ್
ಡಾ.ಶರಣಪ್ರಕಾಶ್ ಪಾಟೀಲ್
ಸಿಂಧನೂರು: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಶೀಘ್ರದಲ್ಲೇ ಅತಿಥಿ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
ಶನಿವಾರ ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಸೇವಾ ಪರಿಗಣನೆ ಸಂಬಂಧಿತ ವಿಚಾರಗಳಿಂದಾಗಿ ನೇಮಕಾತಿ ತಡವಾಗಿದೆ. ಈ ಕುರಿತು ಉನ್ನತ ಶಿಕ್ಷಣ ಇಲಾಖೆಯ ವಿಶೇಷ ಸಭೆ ನಡೆದಿದ್ದು, ಕಾನೂನು ಸಚಿವರೊಂದಿಗೆ ಚರ್ಚೆಯೂ ನಡೆದಿದೆ. ಸರ್ಕಾರ ಶೀಘ್ರದಲ್ಲೇ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲಿದೆ ಎಂದು ಹೇಳಿದರು.
ರಾಜ್ಯದಲ್ಲಿ ಮಳೆಹಾನಿ ವರದಿ ಸಲ್ಲಿಸಲು ಮುಖ್ಯಮಂತ್ರಿ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದು, ರಾಯಚೂರಿನಲ್ಲಿ ಹೆಚ್ಚಿನ ಮಳೆಯಾಗಿರುವುದರಿಂದ ಕೂಡಲೇ ಬೆಳೆ ಹಾನಿ ಸಮೀಕ್ಷೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಲು ಆದೇಶಿಸಲಾಗಿದೆ. ಸೆ.30ರವರೆಗೆ ಮಳೆಯ ವಾತಾವರಣ ಮುಂದುವರಿಯುವ ನಿರೀಕ್ಷೆ ಇದೆ. ಭತ್ತ ಹೊರತುಪಡಿಸಿ ತೊಗರಿ, ಸೂರ್ಯಕಾಂತಿ, ಸಜ್ಜೆ ಸೇರಿ ಹಲವು ಬೆಳೆಗಳು ನೀರಿನಲ್ಲಿ ನಿಂತಿರುವುದರಿಂದ ಅವುಗಳ ರಕ್ಷಣೆಗೆ ಕೃಷಿ ಇಲಾಖೆಗೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದರು.
ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸಿ ಕಾಳಸಂತೆಗೆ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಯಾರೂ ಉಪವಾಸ ಮಲಗಬಾರದು ಎಂಬ ಉದ್ದೇಶದಿಂದ ಸರ್ಕಾರ ಯೋಜನೆ ತಂದಿದೆ. ಸಾರ್ವಜನಿಕರು ಸಹ ಇದರ ದುರುಪಯೋಗ ಮಾಡಬಾರದು ಎಂದು ಸಚಿವರು ಎಚ್ಚರಿಸಿದರು.
ಸಿಂಧನೂರು ತಾಲೂಕಿನ 19 ಹಳ್ಳಿಗಳನ್ನು ಮಸ್ಕಿಗೆ ಸೇರ್ಪಡೆ ಮಾಡುವ ವಿಷಯದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಇಬ್ಬರು ಶಾಸಕರು ಪತ್ರ ನೀಡಿದ್ದಾರೆ. ಆದರೆ ಅಂತಿಮ ತೀರ್ಮಾನ ಜನರದ್ದಾಗಿರುತ್ತದೆ. ಸ್ಥಳೀಯರ ಅಭಿಪ್ರಾಯ ಸಂಗ್ರಹಿಸಿದ ಬಳಿಕವೇ ನಿರ್ಧಾರ ಕೈಗೊಳ್ಳಲಾಗುತ್ತದೆ” ಎಂದರು.
ವೈದ್ಯಕೀಯ ಸೀಟು ಹಂಚಿಕೆಯಲ್ಲಿ ಯಾರಿಗೂ ಅನ್ಯಾಯವಾಗಿಲ್ಲ. ಸರ್ಕಾರಿ ಕಾಲೇಜುಗಳಲ್ಲಿ 400 ಹಾಗೂ ಖಾಸಗಿ ಕಾಲೇಜುಗಳಲ್ಲಿ 600 ಸೀಟುಗಳನ್ನು ಹಂಚಿಕೆ ಮಾಡಲಾಗಿದೆ ಎಂದು ಸಚಿವರು ವಿವರಿಸಿದರು.
ಈ ಸಂದರ್ಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಶಾಸಕ ಹಂಪನಗೌಡ ಬಾದರ್ಲಿ ಉಪಸ್ಥಿತರಿದ್ದರು.